ನವದೆಹಲಿ: ಇದೇ ತಿಂಗಳು 18ರಂದು ಕೃಷ್ಣಾ ಮೇಲ್ದಂಡೆ ಯೋಜನೆ ವಿಚಾರವಾಗಿ ಕೇಂದ್ರ ಜಲಶಕ್ತಿ ಸಚಿವರು ಈ ವಿಚಾರಕ್ಕೆ ಸಂಬಂಧಿಸಿದ ಎಲ್ಲಾ ರಾಜ್ಯಗಳ ಜಲಸಂಪನ್ಮೂಲ ಸಚಿವರ ಸಭೆ ಕರೆದಿದ್ದಾರೆ. ಸಭೆಯಲ್ಲಿ ಈ ವಿಚಾರವಾಗಿ ಒಂದು ತೀರ್ಮಾನಕ್ಕೆ ಬರುವ ಭರವಸೆ ಇದೆ ಎಂದು ಡಿಸಿಎಂ DK ಶಿವಕುಮಾರ್ ತಿಳಿಸಿದರು.
ನವದೆಹಲಿಯಲ್ಲಿ ಮಾಧ್ಯಮಗಳ ಜತೆ ಮಾತನಾಡಿದರು. ದೆಹಲಿ ಭೇಟಿ ವಿಚಾರವಾಗಿ ಮಾಧ್ಯಮಗಳು ಕೇಳಿದಾಗ "ಘನತ್ಯಾಜ್ಯ ವಿಲೇವಾರಿಗೆ ಸಂಬಂಧಿಸಿದಂತೆ ದೆಹಲಿಯಲ್ಲಿ ಬಳಸಲಾಗುತ್ತಿರುವ ತಂತ್ರಜ್ಞಾನವನ್ನು ವೀಕ್ಷಿಸಲು ನಾನು ಹಾಗೂ ಬೆಂಗಳೂರು ಪಾಲಿಕೆಯಿಂದ ಸುಮಾರು 15 ಸದಸ್ಯರ ತಂಡ ದೆಹಲಿಗೆ ಆಗಮಿಸಿದ್ದೇವೆ. ಇಲ್ಲಿ ನಗರದ ಹೊರಭಾಗದಲ್ಲಿ ವಾಸನೆರಹಿತವಾಗಿ ತ್ಯಾಜ್ಯ ವಿಲೇವಾರಿ ಕೇಂದ್ರ ಮಾಡಿದ್ದಾರೆ ಎಂದು ಕೇಳಿದ್ದೇನೆ.
ಹೈಕಮಾಂಡ್ ನಾಯಕರ ಭೇಟಿ ಮಾಡುತ್ತೀರಾ ಎಂದು ಕೇಳಿದಾಗ, "ಸಧ್ಯಕ್ಕೆ ಇಲ್ಲ. ಅವರ ಸಮಯ ಸಿಕ್ಕರೆ ಭೇಟಿ ಮಾಡುತ್ತೇನೆ. 10ರಂದು ಎತ್ತಿನಹೊಳೆ ವಿಚಾರವಾಗಿ ಸಿಎಂ ಸಭೆ ಕರೆದಿದ್ದಾರೆ. ಹೀಗಾಗಿ ಸಂಜೆ ಬೆಂಗಳೂರಿಗೆ ವಾಪಸ್ಸಾಗುತ್ತೇವೆ" ಎಂದು ತಿಳಿಸಿದರು.
ನಾವು ಕಡಿಮೆ ಮಾತನಾಡುವುದು ಉತ್ತಮ
ಡಿಸಿಪಿಗಳ ಪತ್ರ ವೈರಲ್ ಆಗುತ್ತಿದೆ ಎಂದು ಕೇಳಿದಾಗ, "ಈ ಬಗ್ಗೆ ಗೃಹಮಂತ್ರಿಗಳನ್ನು ಕೇಳಿ. ಈ ಪ್ರಕರಣದಲ್ಲಿ ತನಿಖೆ ಆರಂಭವಾಗಿದ್ದು, ನಾವು ಈ ಪ್ರಕರಣದ ಬಗ್ಗೆ ಮಾತನಾಡುವುದನ್ನು ಕಡಿಮೆ ಮಾಡುವುದು ಉತ್ತಮ. ವಿರೋಧ ಪಕ್ಷಗಳು ಏನು ಬೇಕಾದರೂ ಮಾತನಾಡಬಹುದು. ಆದರೆ ಕುನ್ಹಾ ಅವರ ಸಮಿತಿ ತನಿಖೆ ಮಾಡುತ್ತಿರುವುದರಿಂದ ನಮ್ಮ ಮಾತುಗಳ ತನಿಖೆ ಮೇಲೆ ಪರಿಣಾಮ ಬೀರಬಾರದು" ಎಂದು ಸ್ಪಷ್ಟನೆ ನೀಡಿದರು.