ಶಿವಮೊಗ್ಗದ ರಾಮಣ್ಣ ಶ್ರೇಷ್ಠಿ ಪಾರ್ಕ್‌ನಲ್ಲಿ ಮನೆ-ಮನೆಗೆ ಪೊಲೀಸ್ ಕಾರ್ಯಕ್ರಮವನ್ನು ಜಿಲ್ಲಾ ನ್ಯಾಯಾಧೀಶ ಮಂಜುನಾಥ ನಾಯಕ್ ಉದ್ಘಾಟಿಸಿದರು. ಎಂ.ಎಸ್.ಸಂತೋಷ್, ಜಿ.ಕೆ.ಮಿಥುನ್‌ಕುಮಾರ್, ಅನಿಲ್ಕುಮಾರ್ ಭೂಮರಡ್ಡಿ, ಎ.ಜಿ.ಕಾರಿಯಪ್ಪ, ಹನುಮಂತಪ್ಪ ಇದ್ದರು. 
ನ್ಯೂಸ್

ಜನರ ಸಮಸ್ಯೆ ತಾಳ್ಮೆಯಿಂದ ಆಲಿಸಿ-ಸ್ಪಂದಿಸಿ

ಶಿವಮೊಗ್ಗ: ಪೊಲೀಸ್ ವ್ಯವಸ್ಥೆ ಬಗ್ಗೆ ಜನರಲ್ಲಿರುವ ಹೆದರಿಕೆ ಮೊದಲು ತೊಲಗಬೇಕು. ಪೊಲೀಸರು ಜನರ ಸಮಸ್ಯೆಗಳನ್ನು ತಾಳ್ಮೆಯಿಂದ ಆಲಿಸಿ ಸ್ಪಂದಿಸಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಮಂಜುನಾಥ ನಾಯಕ್ ಸಲಹೆ ನೀಡಿದರು.

ನಗರದ ರಾಮಣ್ಣ ಶ್ರೇಷ್ಠಿ ಪಾರ್ಕ್‌ನಲ್ಲಿ ಗುರುವಾರ ಕರ್ನಾಟಕ ರಾಜ್ಯ ಪೊಲೀಸ್, ಶಿವಮೊಗ್ಗ ಜಿಲ್ಲಾ ಪೊಲೀಸ್ ಇಲಾಖೆಯಿಂದ ಮನೆ-ಮನೆಗೆ ಪೊಲೀಸ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಸಮುದಾಯ ಪೊಲೀಸ್ ವ್ಯವಸ್ಥೆ ಬಲಪಡಿಸುವ ನಿಟ್ಟಿನಲ್ಲಿ ಇದೊಂದು ಅತ್ಯುತ್ತಮ ಕಾರ್ಯಕ್ರಮವಾಗಿದೆ. ಜತೆಗೆ ಸಾರ್ವಜನಿಕರೊಂದಿಗೆ ಇಲಾಖೆ ಉತ್ತಮ ಹಾಗೂ ಸ್ನೇಹಪರ ಸಂಬಂಧವನ್ನು ಬೆಸೆದು ಸೌಹಾರ್ದ ಸಮಾಜ ನಿರ್ಮಿಸುವ ಉದ್ದೇಶದಿಂದ ಯೋಜನೆ ರೂಪಿಸಲಾಗಿದೆ ಎಂದರು.

ಪೊಲೀಸರು ಮನೆಗೆ ಬರುವುದು, ಜನರು ಪೊಲೀಸ್ ಠಾಣೆಗೆ ಹೋಗುವುದನ್ನು ಯಾರೂ ಅಪೇಕ್ಷಿಸುವುದಿಲ್ಲ. ಇಂತಹ ಸನ್ನಿವೇಶದಲ್ಲಿ ಪೊಲೀಸ್ ವ್ಯವಸ್ಥೆಯನ್ನು ಜನಸ್ನೇಹಿ ಮತ್ತು ಆಡಳಿತಸ್ನೇಹಿಯಾಗಿಸಲು ಸರ್ಕಾರ ಮುಂದಾಗಿದೆ. ಈ ಯೋಜನೆಯಡಿ ಸ್ಥಳೀಯ ಪೊಲೀಸ್ ಸಿಬ್ಬಂದಿ ಮನೆ-ಮನೆಗೆ ಬಂದು ಜನರೊಂದಿಗೆ ಸಂವಾದ ನಡೆಸುವುದು ಸ್ವಾಗತಾರ್ಹ. ಮನೆಗಳಿಗೆ ಭೇಟಿ ನೀಡುವ ವೇಳೆ ಸಮವಸ್ತ ಧರಿಸದಿದ್ದರೆ ಉತ್ತಮ. ಮಕ್ಕಳೊಂದಿಗೆ ಸ್ನೇಹದಿಂದ ಮಾತನಾಡಿಸಿ ವಿಶ್ವಾಸಕ್ಕೆ ತೆಗೆದುಕೊಳ್ಳಖಬೇಕು. ಜನರ ಮಾತನ್ನು ತಾಳ್ಮೆಯಿಂದ ಆಲಿಸಿ, ಸ್ಪಂದಿಸಬೇಕು ಎಂದರು.

ಮನೆ ಮನೆಗೆ ಪೊಲೀಸ್ ಕಾರ್ಯಕ್ರಮ ಕುರಿತಾದ ಕರಪತ್ರ, ಬೀಟ್ ಬುಕ್ ಬಿಡುಗಡೆ ಮಾಡಲಾಯಿತು. ಎಸ್‌ಪಿ ಜಿ.ಕೆ.ಮಿಥುನ್‌ಕುಮಾರ್, ಎಎಸ್‌ಪಿ ಅನಿಲ್ಕುಮಾರ್ ಭೂಮರಡ್ಡಿ, ಹಿರಿಯ ಸಿವಿಲ್ ನ್ಯಾಯಾಧೀಶ ಎಂ.ಎಸ್.ಸಂತೋಷ್, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಎ.ಜಿ.ಕಾರಿಯಪ್ಪ, ರಾಮಣ್ಣ ಶೆಟ್ಟಿ ಗಣಪತಿ ಸೇವಾ ಸಮಿತಿ ಪ್ರಧಾನ ಕಾರ್ಯದರ್ಶಿ ಹನುಮಂತಪ್ಪ ಉಪಸ್ಥಿತರಿದ್ದರು.