ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳಲ್ಲಿ ಸುದೀರ್ಘ ರಾಜಕೀಯ ಇತಿಹಾಸವನ್ನು ಹೊಂದಿರುವ ಮಂಡ್ಯ ಪ್ರಮುಖ ಕ್ಷೇತ್ರಗಳಲ್ಲಿ ಒಂದಾಗಿದೆ. ರಾಜ್ಯದಲ್ಲಿ ಒಕ್ಕಲಿಗರ ಪ್ರಾಬಲ್ಯವಿರುವ ಮಂಡ್ಯ ಕ್ಷೇತ್ರವು, ಅಧಿಕಾರದ ಚುಕ್ಕಾಣಿ ಹಿಡಿಯಲು ಕಾಂಗ್ರೆಸ್ ಮತ್ತು ಜೆಡಿಎಸ್ ನಡುವಿನ ಪೈಪೋಟಿಗೆ ಹೆಸರುವಾಸಿಯಾಗಿದೆ. 2024ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಯಿಂದಾಗಿ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಮಂಡ್ಯ ಕ್ಷೇತ್ರದಿಂದ ಕಣಕ್ಕಿಳಿದಿದ್ದರು. ಎಚ್ಡಿಕೆ ಪ್ರತಿಸ್ಪರ್ಧಿಯಾಗಿ ಕಾಂಗ್ರೆಸ್ ಸ್ಟಾರ್ ಚಂದ್ರು ಎಂದೇ ಖ್ಯಾತಿಯಾಗಿರುವ ವೆಂಕಟರಮಣೇಗೌಡ ಅವರನ್ನು ಕಣಕ್ಕಿಳಿಸಿತು. ಮಂಡ್ಯ ಸ್ಪರ್ಧಿಗಳ ಒಳ-ಹೊರಗಿನ ಹೋರಾಟದ ಈ ರಣರಂಗದಲ್ಲಿ ಎಚ್.ಡಿ.ಕುಮಾರಸ್ವಾಮಿ ಭರ್ಜರಿ ಗೆಲುವು ಸಾಧಿಸಿದ್ದಾರೆ.
ಇದನ್ನು ಓದಿ: AIMIM ಭದ್ರಕೋಟೆ ಬಲಪಡಿಸಿಕೊಂಡ ಅಸಾದುದ್ದೀನ್ ಓವೈಸಿ : ಹೈದರಾಬಾದ್ನಲ್ಲಿ 1,13,683 ಮತಗಳ ಅಂತರದಿಂದ ಮುನ್ನಡೆ
ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ 2 ಲಕ್ಷಕ್ಕೂ ಹೆಚ್ಚು ಮತಗಳ ಅಂತರದಿಂದ ಮುನ್ನಡೆ ಸಾಧಿಸಿದ್ದಾರೆ. ಅವರ ಪ್ರತಿಸ್ಪರ್ಧಿ ಕಾಂಗ್ರೆಸ್‌ನ ವೆಂಕಟರಮಣೇಗೌಡ (ಸ್ಟಾರ್ ಚಂದ್ರು) ಅವರು ಪ್ರಸ್ತುತ ಹಿಂದುಳಿದಿದ್ದಾರೆ ಎಂದು ಭಾರತೀಯ ಚುನಾವಣಾ ಆಯೋಗವು ತನ್ನ ಪೋಸ್ಟ್ನಲ್ಲಿ ತಿಳಿಸಿದೆ.
ಮಂಡ್ಯ ಲೋಕಸಭೆ ಕ್ಷೇತ್ರವು ಅದರ ಅಡಿಯಲ್ಲಿ 8 ವಿಧಾನಸಭಾ ಕ್ಷೇತ್ರಗಳನ್ನು ಹೊಂದಿದೆ. ಮಳವಳ್ಳಿ (ಎಸ್‌ಸಿ), ಮದ್ದೂರು, ಮೇಲುಕೋಟೆ, ಮಂಡ್ಯ, ಶ್ರೀರಂಗಪಟ್ಟಣ, ನಾಗಮಂಗಲ, ಕೃಷ್ಣರಾಜಪೇಟೆ ಮತ್ತು ಕೃಷ್ಣರಾಜನಗರ ಕ್ಷೇತ್ರಗಳನ್ನು ಒಳಗೊಂಡಿದೆ.
ಮಧ್ಯಾಹ್ನ 01.56ರ ಟ್ರೆಂಡ್ ಪ್ರಕಾರ ಒಟ್ಟು 545 ಲೋಕಸಭಾ ಸ್ಥಾನಗಳಲ್ಲಿ ಬಿಜೆಪಿ 295ರಲ್ಲಿ ಮತ್ತು ಕಾಂಗ್ರೆಸ್ 230ರಲ್ಲಿ ಹಾಗೂ ಇತರೆ 18ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳಲ್ಲಿ ಬಿಜೆಪಿ 16, ಕಾಂಗ್ರೆಸ್ 10 ಮತ್ತು ಜೆಡಿಎಸ್ 2 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. (ಏಜೆನ್ಸೀಸ್)