landslide: ಹಿಮಾಚಲ ಪ್ರದೇಶದ ಬಿಲಾಸ್ಪುರ ಜಿಲ್ಲೆಯಲ್ಲಿ ನಿರಂತರ ಮಳೆಯಿಂದಾಗಿ ಮಂಗಳವಾರ(ಅ. 07) ಸಂಜೆ ಸಂಭವಿಸಿದ ಭೀಕರ ಭೂಕುಸಿತದಲ್ಲಿ ಅವಶೇಷಗಳಡಿಯಲ್ಲಿ ಸಿಲುಕಿ ಖಾಸಗಿ ಬಸ್ನಲ್ಲಿ ಪ್ರಯಾಣಿಸುತ್ತಿದ್ದ 18 ಮಂದಿ ಮೃತಪಟ್ಟಿದ್ದು, ಹಲವು ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.
ಝಂಡುಟ್ಟಾ ವಿಧಾನಸಭಾ ವಿಭಾಗದ ಭಾಲುಘಾಟ್ ಪ್ರದೇಶದಲ್ಲಿ ಈ ಅಪಘಾತ ಸಂಭವಿಸಿದೆ. 30-35 ಪ್ರಯಾಣಿಕರನ್ನು ಹೊತ್ತು ಸಾಗುತ್ತಿದ್ದ ಖಾಸಗಿ ಬಸ್ ಮರೋಟನ್ ನಿಂದ ಘುಮಾರ್ವಿನ್ ಗೆ ತೆರಳುತ್ತಿತ್ತು ಎನ್ನಲಾಗಿದೆ. ಈ ವೇಳೆ ಹಠಾತ್ ಗುಡ್ಡ ಕುಸಿದಿದ್ದು, ಸಂಪೂಣ ಬಸ್ ಅವಶೇಷಗಳಡಿ ಸಿಲುಕಿದೆ.
ತಕ್ಷಣ ಪೊಲೀಸರು, ಜಿಲ್ಲಾ ಅಧಿಕಾರಿಗಳು ಸ್ಥಳಕ್ಕಾಗಮಿಸಿದ್ದು, ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಇದುವರೆಗೆ 18 ಮೃತದೇಹಗಳನ್ನು ಅವಶೇಷಗಳಿಂದ ಹೊರತೆಗೆಯಲಾಗಿದೆ. ಉಳಿದ ಪ್ರಯಾಣಿಕರು ಬದುಕುಳಿಯುವ ಸಾಧ್ಯತೆಗಳು ತೀರಾ ಕಡಿಮೆ ಎಂದು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿರುವ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಘಟನೆ ಬಗ್ಗೆ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಹಿಮಾಚಲ ಪ್ರದೇಶ ಸಿಎಂ ಸುಖ್ವಿಂದರ್ ಸಿಂಗ್ ಸುಖು, ಈ ಬೃಹತ್ ಭೂಕುಸಿತದಲ್ಲಿ ಖಾಸಗಿ ಬಸ್ ಸಿಲುಕಿ 10 ಜನರು ಸಾವನ್ನಪ್ಪಿದ ದುರಂತ ಸುದ್ದಿ ಬಂದಿದೆ, ಮತ್ತು ಇನ್ನೂ ಹಲವಾರು ಜನರು ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಶಂಕೆ ಇದೆ. ರಕ್ಷಣಾ ಕಾರ್ಯಾಚರಣೆಯನ್ನು ತ್ವರಿತಗೊಳಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದೇನೆ ಎಂದು ಹೇಳಿದ್ದಾರೆ. (ಏಜೆನ್ಸೀಸ್)