ನ್ಯೂಸ್

ಮೇಕೆದಾಟು; ಬಿಜೆಪಿ, ಕಾಂಗ್ರೆಸ್ ಎಲ್ಲ ಪಕ್ಷಗಳು ಪ್ರಣಾಳಿಕೆಗೆ ಸೇರ್ಪಡೆ ಮಾಡಲಿ: ದೇವೇಗೌಡ

ಬೆಂಗಳೂರು: ಮೇಕೆದಾಟು ಕುಡಿಯುವ ನೀರಿನ ಯೋಜನೆಯನ್ನು ಡಿಎಂಕೆ ತನ್ನ ಲೋಕಸಭೆ ಚುನಾವಣೆಯ ಪ್ರಣಾಳಿಕೆಯಲ್ಲಿ ವಿರೋಧಿಸಿರುವುದನ್ನು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ. ದೇವೇಗೌಡ ಖಂಡಿಸಿದರು.

ಜೆ.ಪಿ.ಭವನದಲ್ಲಿ ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ರಾಜ್ಯದ ಎಲ್ಲ ರಾಜಕೀಯ ಪಕ್ಷಗಳು ಮೇಕೆದಾಟು ಯೋಜನೆಯನ್ನು ಬೆಂಬಲಿಸಿ ಅದನ್ನು ಕಾರ್ಯಗತಗೊಳಿಸುವ ಅಚಲ ನಿರ್ಧಾರವನ್ನು ಇದೇ ಚುನಾವಣೆಯ ಪ್ರಣಾಳಿಕೆಯಲ್ಲಿ ಪ್ರಕಟಿಸಲಿ. ಜೆಡಿಎಸ್, ಬಿಜೆಪಿ, ಕಾಂಗ್ರೆಸ್ ಸೇರಿ ಎಲ್ಲ ಪಕ್ಷಗಳು ದೃಢ ಹೆಜ್ಜೆಯನ್ನು ಇಡಲಿ ಎಂದು ಆಗ್ರಹಿಸಿದರು.

ನಾವು ಕೂಡ ಜೆಡಿಎಸ್ ಪ್ರಣಾಳಿಕೆಯಲ್ಲಿ ಮೇಕೆದಾಟು ಬೆಂಬಲಿಸಿ ಆ ಕುಡಿಯುವ ನೀರಿನ ಯೋಜನೆಯನ್ನು ಜಾರಿ ಮಾಡುತ್ತೇವೆ ಎಂದು ಜನರಿಗೆ ತಿಳಿಸುತ್ತೇವೆ ಎಂದು ಗುಡುಗಿದರು.

ಎಲ್ಲರೂ ಒಟ್ಟಾಗಿ ಹೋರಾಟ ಮಾಡೋಣ

ಇಂತಹ ಬೆದರಿಕೆಗಳಿಗೆ ಯಾವುದೇ ರೀತಿಯ ಭಯ ಪಡಬೇಕಾಗಿಲ್ಲ. ಚುನಾವಣೆ ಮುಗಿದ ಮೇಲೆ ಮೇಕೆದಾಟು ಅಣೆಕಟ್ಟು ಕಟ್ಟಲು ನಾನೊಬ್ಬನೇ ಅಲ್ಲ, ರಾಜ್ಯ ಸರ್ಕಾರ, ಮುಖ್ಯಮಂತ್ರಿ, ಬಿಜೆಪಿ ನಾಯಕರಾದ ಯಡಿಯೂರಪ್ಪ ಸಮೇತ ಹೋರಾಟ ಮಾಡೋಣ. ಅದಕ್ಕೂ ಮೊದಲು ಮೇಕೆದಾಟು ಕಟ್ಟಲು ಮ್ಯಾನಿಫೆಸ್ಟೋದಲ್ಲಿ ಹಾಕೋಣ. ಆ ನಿಟ್ಟಿನಲ್ಲಿ ಸಮಸ್ತ ಕನ್ನಡಿಗರಿಗೆ ಭರವಸೆ ನೀಡೋಣ. ಡಿಎಂಕೆ ಮಿತ್ರಪಕ್ಷವಾದ ಕಾಂಗ್ರೆಸ್ ಕೂಡ ಮೇಕೆದಾಟು ಯೋಜನೆ ಬೆಂಬಲಿಸಿ ಪ್ರಣಾಳಿಕೆಯಲ್ಲಿ ಜನತೆಗೆ ಭರವಸೆ ನೀಡಲಿ ಎಂದು ಒತ್ತಾಯಿಸಿದರು.

ಸಿದ್ದರಾಮಯ್ಯ ಬಜೆಟ್‌ನಲ್ಲೇ ಮೇಕೆದಾಟು ಯೋಜನೆಗೆ ಅವಕಾಶ ಮಾಡಿದ್ದಾರೆ. ಮೂರು ಪಕ್ಷಗಳು ಒಟ್ಟುಗೂಡಿಯೇ ಹೋರಾಡಬೇಕು ಎಂದು ತಿಳಿಸಿದರು.

ಪರಿಸರ ನಿಪುಣರಿಗೆ ಕಿವಿಮಾತು

ಮೇಕೆದಾಟು ಯೋಜನೆಯಿಂದ ಐದು ಸಾವಿರ ಎಕರೆ ಮುಳುಗಡೆ ಆಗಲ್ಲ. ಈ ಅಂಶವನ್ನು ಪರಿಸರ ನಿಪುಣರು ಅರ್ಥ ಮಾಡಿಕೊಳ್ಳಬೇಕು. ಅಧಿಕಾರಿಗಳು, ನೀರಾವರಿ ತಜ್ಞರು ಮೇಕೆದಾಟು ಯೋಜನೆಯಿಂದ 30 ಟಿಎಂಸಿ ನೀರು ಬಳಕೆ ಮಾಡಿಕೊಳ್ಳಬಹುದು ಎಂದು ಹೇಳಿದ್ದಾರೆ.

2019ರಲ್ಲಿ ರಾಜ್ಯ ಸರ್ಕಾರ ಡಿಪಿಆರ್ ಸಲ್ಲಿಸಿದೆ. ಇದಕ್ಕೆ ಪ್ರಧಾನಮಂತ್ರಿ ಅನುಮತಿ ಕೊಡಿಸಬೇಕು ಹಾಗೂ ಈ ಮೇಕೆದಾಟು ಯೋಜನೆ ವಿಷಯದಲ್ಲಿ ಪ್ರಧಾನಿ ಮಧ್ಯಸ್ಥಿಕೆ ವಹಿಸಬೇಕು ಎಂದು ಮನವಿ ಮಾಡಿದರು.

ಪ್ರಧಾನಿ ಮೋದಿ ಮತ್ತು ಕೇಂದ್ರ ಜಲಶಕ್ತಿ ಸಚಿವರಾದ ಗಜೇಂದ್ರ ಶೇಖಾವತ್ ಅವರಿಗೆ ವಿವರವಾಗಿ ಮೇಕೆದಾಟು ಯೋಜನೆ ಬಗ್ಗೆ ಪತ್ರ ಬರೆದಿದ್ದೇನೆ. ಬೆಂಗಳೂರಿಗೆ ಕುಡಿಯುವ ನೀರಿಗಾಗಿ ಮೇಕೆದಾಟು ಯೋಜನೆಗೆ ಅವಕಾಶ ನೀಡಬೇಕು ಎಂದು ಮನವರಿಕೆ ಮಾಡಿಕೊಟ್ಟಿದ್ದೇನೆ. ತಮಿಳುನಾಡಿಗೆ ನೀರು ಬಿಡುವುದನ್ನು ನಿಯಂತ್ರಿಸಬೇಕು ಎಂದು ಪತ್ರ ಬರೆದಿದ್ದೇನೆ ಎಂದು ತಿಳಿಸಿದರು.

ರಾಜಕೀಯ ಬೇರೆಸಬೇಡಿ

ಮೇಕೆದಾಟು ಯೋಜನೆ ವಿಚಾರದಲ್ಲಿ ರಾಜಕೀಯ ಬೆರೆಸಬೇಡಿ. ಕುಡಿಯುವ ನೀರಿಗೆ ಮೊದಲ ಆದ್ಯತೆ ಕೊಡಬೇಕು. ಮಾನವೀಯತೆಯಿಂದ ಮೇಕೆದಾಟು ಬಗ್ಗೆ ಎಲ್ಲರೂ ಯೋಚನೆ ಮಾಡಬೇಕು. ಇಲ್ಲಿ ರಾಜ್ಯ ಸರ್ಕಾರದ ವೈಫಲ್ಯ ಅಂತಲ್ಲ ಎಂದರು.

ಕಾವೇರಿ ಕೊಳ್ಳದ 9 ಜಿಲ್ಲೆಯ 22 ತಾಲೂಕು, ಬೆಂಗಳೂರು ನಗರವೂ ಸೇರಿ ಅನೇಕ ಕಡೆ ಕುಡಿಯುವ ನೀರಿನ ಸಮಸ್ಯೆ ತುಂಬಾ ಭೀಕರವಾಗಿದೆ. ಕಳೆದ ಐದು ದಿನಗಳಿಂದ ಕೆಲವರು ಮನೆಗಳಿಗೆ ಬೀಗ ಹಾಕಿ ವಲಸೆ ಹೋಗಿದ್ದಾರೆ. ಕುಡಿಯಲು ನೀರಿಲ್ಲ, ಈ ಭೀಕರ ಸಮಸ್ಯೆಗೆ ಪರಿಹಾರ ಒದಗಿಸಲು ರಾಜ್ಯ ಸರ್ಕಾರದಿಂದ ಸಾಧ್ಯವಾಗಿಲ್ಲ ಎಂದು ಹೇಳಿದರು.

ಜೆಡಿಎಸ್ ರಾಜ್ಯ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ.ದೇವೇಗೌಡರು, ವಿಧಾನ ಪರಿಷತ್ ಸದಸ್ಯ ಭೋಜೇಗೌಡ, ಜೆಡಿಎಸ್ ನಗರ ಘಟಕದ ಅಧ್ಯಕ್ಷ ಎಚ್.ಎಂ.ರಮೇಶ್ ಗೌಡ, ಪಕ್ಷದ ಕಾನೂನು ಘಟಕದ ಅಧ್ಯಕ್ಷ ಎ ಪಿ ರಂಗನಾಥ್, ಡಾ.ಸುಧಾಕರ್ ಶೆಟ್ಟಿ ಉಪಸ್ಥಿತರಿದ್ದರು.

ಯಡಿಯೂರಪ್ಪ ಪ್ರಾಮಾಣಿಕ ಪ್ರಯತ್ನ ಮಾಡಿದ್ದರು...

ಯಡಿಯೂರಪ್ಪ ಸಿಎಂ ಆಗಿದ್ದಾಗ ತಮಿಳುನಾಡಿನ ಜತೆ ಸಂಬಂಧ ವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡಿದ್ದರು. ಬೆಂಗಳೂರಿನಲ್ಲಿ ತಿರುವಳ್ಳುವರ್ ಪ್ರತಿಮೆ, ಚೆನ್ನೈನಲ್ಲಿ ಸರ್ವಜ್ಞ ಪ್ರತಿಮೆಗಳನ್ನು ಸ್ಥಾಪಿಸಿ ಒಳ್ಳೆಯ ಬಾಂಧವ್ಯಕ್ಕೆ ನಾಂದಿ ಹಾಡಿದ್ದರು. ಎರಡೂ ರಾಜ್ಯಗಳ ಸಂಬಂಧದ ವಿಚಾರದಲ್ಲಿ ಅದೊಂದು ಒಳ್ಳೆಯ ಸಂದರ್ಭ ಎಂದು ದೇವೇಗೌಡರು ನೆನಪಿಸಿದರು.

>ಸಮಸ್ಯೆ ಬಂತು ಎಂದಾಕ್ಷಣ ಸಂಘರ್ಷಕ್ಕೆ ಇಳಿಯಬೇಕಿಲ್ಲ. ಮಾತುಕತೆ ಮೂಲಕವೂ ಬಗೆಹರಿಸಿಕೊಳ್ಳಬಹುದು. ಇದನ್ನು ನೆರೆ ರಾಜ್ಯ ಅರ್ಥ ಮಾಡಿಕೊಳ್ಳಬೇಕು. ಜನರು ಯಾವ ಸಂಕ್ಷಟದಲ್ಲಿ ಇದ್ದಾರೆ ಎಂಬುದನ್ನು ಅವರು ನೋಡಬೇಕು.

-ಎಚ್.ಡಿ.ದೇವೇಗೌಡ, ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ.