ಶಿವಮೊಗ್ಗ: ಹಲವು ವರ್ಷಗಳಿಂದ ಬಗರ್‌ಹುಕುಂ ಸಾಗುವಳಿ ಮಾಡುತ್ತಿರುವ ರೈತರನ್ನು ಯಾವುದೇ ಕಾರಣಕ್ಕೂ ಒಕ್ಕಲೆಬ್ಬಿಸದಂತೆ ಸಚಿವ ಮಧು ಬಂಗಾರಪ್ಪ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಶನಿವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಅರಣ್ಯ, ಲೋಕೋಪಯೋಗಿ, ನೀರಾವರಿ ಇಲಾಖೆ, ಕೆಆರ್‌ಐಡಿಎಲ್ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನೆ ನಡೆಸಿದ ಅವರು, ದಶಕಗಳಿಂದ ಅರಣ್ಯ ಭೂಮಿಯಲ್ಲಿ ಸಾಗುವಳಿ ಮಾಡುತ್ತಿರುವ ರೈತರಿಗೆ ನೋಟಿಸ್ ಕಳಿಸುವುದು, ಒಕ್ಕಲೆಬ್ಬಿಸುವ ಕೆಲಸವನ್ನು ಅರಣ್ಯ ಇಲಾಖೆ ಸಿಬ್ಬಂದಿ ಮಾಡಬಾರದು. ಸುಪ್ರೀಂಕೋರ್ಟ್ ರೈತರ ಪರವಾಗಿ ನೀಡಿರುವ ಆದೇಶದ ಅನ್ವಯ ಅಧಿಕಾರಿಗಳು ನಡೆದುಕೊಳ್ಳಬೇಕೆಂದರು.
ಹೊಸ ಒತ್ತುವರಿಗೆ ಅವಕಾಶ ಬೇಡ. 1978ಕ್ಕೂ ಪೂರ್ವದ ಅರಣ್ಯ ಒತ್ತುವರಿ ಸಕ್ರಮಕ್ಕೆ ಕ್ರಮ ಕೈಗೊಳ್ಳಬೇಕು. ವಿವಿಧ ಭೂ ಮಂಜೂರಾತಿ ಕಾಯ್ದೆ ಹಾಗೂ ನಿಯಮಗಳಡಿ ಮಂಜೂರು ಮಾಡಲಾದ ರೈತರ ಸಾಗುವಳಿ ಹಾಗೂ ವಸತಿ ಭೂಮಿಗಳನ್ನು ಅರಣ್ಯ ಭೂಮಿ ಇಂಡೀಕರಣ ಪ್ರಸ್ತಾವನೆಯಿಂದ ಕೈಬಿಡುವ ಸಂಬಂಧ ಕೈಗೊಂಡ ಕ್ರಮದ ಬಗ್ಗೆ ವರದಿ ನೀಡಬೇಕೆಂದರು.
ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಹನುಮಂತಪ್ಪ ಮಾತನಾಡಿ, ಪಿಎಫ್ ಹಾಗೂ ಎಂಎಫ್ ಪ್ರಕರಣಗಳು ಕಿರು ಅರಣ್ಯ ವ್ಯಾಪ್ತಿಗೆ ಬರುತ್ತವೆ. ಇವುಗಳನ್ನು ಬಗೆಹರಿಸಬಹುದು. ಈ ಸಂಬಂಧ 375 ಅಧಿಸೂಚನೆಗಳಿವೆ ಎಂದು ತಿಳಿಸಿದರು.
ಶಾಸಕ ಬೇಳೂರು ಗೋಪಾಲಕೃಷ್ಣ, ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಜಿಪಂ ಸಿಇಒ ಎನ್.ಹೇಮಂತ್, ಎಸ್ಪಿ ಜಿ.ಕೆ.ಮಿಥುನ್ ಕುಮಾರ್ ಮುಂತಾದವರಿದ್ದರು.