ಬೆಂಗಳೂರು: ಆದಾಯಕ್ಕಿಂತ ಹೆಚ್ಚಿನ ಆಸ್ತಿ ಗಳಿಕೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಅವರು ಲೋಕಾಯುಕ್ತ ಪೊಲೀಸ್ ಅಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾಗಿದ್ದರು.
ಮಂಗಳವಾರ ಮಧ್ಯಾಹ್ನ ೩ ಗಂಟೆಗೆ ಲೋಕಾಯುಕ್ತ ಪೊಲೀಸರ ಮುಂದೆ ಹಾಜರಾಗಿದ್ದರು. ಸಚಿವ ಜಮೀರ್ ಅಹ್ಮದ್ ಅವರನ್ನು ಎರಡೂವರೆ ಗಂಟೆಗಳ ಕಾಲ ವಿಚಾರಣೆ ನಡೆಸಲಾಯಿತು. ಆದಾಯಕ್ಕಿಂತ ಹೆಚ್ಚಿನ ಗಳಿಕೆ ಆರೋಪ ಹಿನ್ನೆಲೆಯಲ್ಲಿ ಜಮೀರ್ ಅವರಿಗೆ ಖುದ್ದು ವಿಚಾರಣೆಗೆ ಹಾಜರಾಗುವಂತೆ ಲೋಕಾಯುಕ್ತ ಪೊಲೀಸರು ನೊಟೀಸ್ ನೀಡಿದ್ದರು. ಈ ಹಿನ್ನೆಲೆಯಲ್ಲಿ ಸೂಕ್ತ ದಾಖಲೆಗಳೊಂದಿಗೆ ವಿಚಾರಣೆಗೆ ಹಾಜರಾಗಿದ್ದರು.
ಜಮೀರ್ ವಿರುದ್ಧ ಈ ಹಿಂದೆ ಇದ್ದ ಎಸಿಬಿಯಲ್ಲಿ ಜಾರಿ ನಿರ್ದೇಶನಾಲಯದ (ಇಡಿ) ವರದಿ ಆಧರಿಸಿ ಅಕ್ರಮ ಆಸ್ತಿ ಸಂಪಾದನೆ ಪ್ರಕರಣ ದಾಖಲಾಗಿತ್ತು. ಎಸಿಬಿ ರದ್ದುಗೊಂಡ ನಂತರ ಆ ಪ್ರಕರಣದ ಮುಂದುವರಿದ ತನಿಖೆಯನ್ನು ಲೋಕಾಯುಕ್ತ ಪೊಲೀಸರು ಕೈಗೆತ್ತಿಕೊಂಡಿದ್ದರು. ಪ್ರಾಥಮಿಕ ಹಂತದ ತನಿಖೆ ಮುಗಿಸಿದ ಪೊಲೀಸರು, ಹೆಚ್ಚಿನ ಮಾಹಿತಿ ಪಡೆದುಕೊಳ್ಳಲು ನೊಟೀಸ್ ಜಾರಿ ಮಾಡಿ ವಿಚಾರಣೆಗೆ ಕರೆದಿದ್ದರು.
ಇಡಿ ಅಧಿಕಾರಿಗಳು ದಾಳಿ ಆದಾಯಕ್ಕಿಂತ ಹೆಚ್ಚಿನ ಆಸ್ತಿ ಸಂಪಾದನೆ ಮಾಡಿರುವುದನ್ನು ಪತ್ತೆ ಹಚ್ಚಿದ್ದರು. ಬಳಿಕ ಆಗಿನ ಎಸಿಬಿಗೆ ಪತ್ರ ಬರೆದು ಭ್ರಷ್ಟಾಚಾರ ನಿಗ್ರಹ ಕಾಯ್ದೆಯಡಿ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಬೇಕೆಂದು ಸೂಚಿಸಿತ್ತು. ಅದರನ್ವಯ ಎಸಿಬಿ ಅಧಿಕಾರಿಗಳು ಪ್ರಕರಣ ದಾಖಲಿಸಿಕೊಂಡು ಜಮೀರ್ ಅಹ್ಮದ್ ನಿವಾಸ, ಕಚೇರಿಗಳ ಮೇಲೆ ದಾಳಿ ನಡೆಸಿ ಶೋಧ ಕಾರ್ಯ ನಡೆಸಿದ್ದರು. ಪ್ರಕರಣ ವಿಚಾರವಾಗಿ ಜಮೀರ್ ಅಹ್ಮದ್ ಅವರನ್ನು ಎಸಿಬಿ ಅಧಿಕಾರಿಗಳು ಸುದೀರ್ಘವಾಗಿ ವಿಚಾರಣೆ ನಡೆಸಿ ಹೇಳಿಕೆ ದಾಖಲಿಸಿದ್ದರು. ಇದೀಗ ಪ್ರಕರಣವನ್ನು ಲೋಕಾಯುಕ್ತ ಪೊಲೀಸರು ತನಿಖೆಯನ್ನು ಕೈಗೆತ್ತಿಕೊಂಡಿದ್ದು, ವಿಚಾರಣೆ ನಡೆಸಿದ್ದಾರೆ.
ಪ್ರಶ್ನೆಗಳಿಗೆ ಉತ್ತರ ಕೊಟ್ಟಿದ್ದೇನೆ:
ವಿಚಾರಣೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಜಮೀರ್ ಅಹ್ಮದ್, ವಿಚಾರಣೆಗೆ ಹಾಜರಾಗುವಂತೆ ಹೇಳಿದ್ದರು. ಮೂರು ನೋಟಿಸ್ ಕೊಟ್ಟಿದ್ದರೂ ಆದರೆ ವಿಚಾರಣೆಗೆ ಬರಲು ಸಾಧ್ಯವಾಗಿರಲಿಲ್ಲ. ಮಂಗಳವಾರ ಬರುವಂತೆ ಅಧಿಕಾರಿಗಳು ತಿಳಿಸಿದ್ದರು. ಹೀಗಾಗಿ ನಾನು ೩ ಗಂಟೆಗೆ ವಿಚಾರಣೆಗೆ ಹಾಜರಾದೆ. ಅವರು ಕೇಳಿದ ಪ್ರಶ್ನೆಗಳಿಗೆ ಉತ್ತರ ಕೊಟ್ಟಿದ್ದೇನೆ. ಮತ್ತೆ ಅವಶ್ಯಕತೆ ಇದ್ದರೆ ಕರೆಯುತ್ತೇವೆ ಎಂದಿದ್ದಾರೆ. ಅವರು ಕರೆದರೆ ಮತ್ತೆ ವಿಚಾರಣೆಗೆ ಬರುತ್ತೇನೆ ಎಂದರು.