ನ್ಯೂಸ್

ಶಿವಮೊಗ್ಗ | ದೇವಸ್ಥಾನದ ರಥಕ್ಕೆ ಬೆಂಕಿ ಹಚ್ಚಿದ ಕಿಡಿಗೇಡಿಗಳು!

ಶಿವಮೊಗ್ಗ: ಕಿಡಿಗೇಡಿಗಳು ಪೆಟ್ರೋಲ್ ಸುರಿದು ದೇವಸ್ಥಾನದ ರಥಕ್ಕೆ ಬೆಂಕಿ ಹಚ್ಚಿರುವ ಘಟನೆ ಶಿವಮೊಗ್ಗದ ರಾಗಿಗುಡ್ಡದ ಬ್ರಹ್ಮ, ವಿಷ್ಣು, ಮಹೇಶ್ವರ ದೇವಸ್ಥಾನದಲ್ಲಿ ನಡೆದಿದೆ.

ಮಾ.4ರಂದು ಸಂಜೆ 4 ಗಂಟೆ ಹೊತ್ತಿಗೆ ದುಷ್ಕರ್ಮಿಗಳು ರಥದ ಚಕ್ರಕ್ಕೆ ಬೆಂಕಿ ಹಚ್ಚಿದ್ದಾರೆ. ಮಾಸ್ಕ್ ಧರಿಸಿ ಬಂದಿದ್ದ ಇಬ್ಬರು ದುಷ್ಕರ್ಮಿಗಳು ರಥಕ್ಕೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಪರಾರಿಯಾಗಿದ್ದಾರೆ. ಈ ಸಂಬಂಧ ದೇವಸ್ಥಾನದ ಅರ್ಚಕ ರಾಘವೇಂದ್ರ ಶಿವಮೊಗ್ಗ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಕಿಡಿಗೇಡಿಗಳ ಕೃತ್ಯದಿಂದ ದೇವಸ್ಥಾನದ ರಥವು ಸಂಪೂರ್ಣವಾಗಿ ಹಾನಿಯಾಗಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಸದ್ಯ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತಲೆಮರೆಸಿಕೊಂಡಿರುವ ಕಿಡಿಗೇಡಿಗಳ ಪತ್ತೆಗೆ ಬಲೆ ಬೀಸಿದ್ದಾರೆ.