ನ್ಯೂಸ್

ಅಪಘಾತದಲ್ಲಿ ಗಾಯಗೊಂಡ ಶಾಸಕನ ಪುತ್ರ

ವಿಜಯವಾಣಿ ಸುದ್ದಿಜಾಲ ಬೆಂಗಳೂರು
ಹೊರವರ್ತುಲ ರಸ್ತೆಯಲ್ಲಿ ಸಂಭವಿಸಿದ ದ್ವಿಚಕ್ರ ವಾಹನ ಸ್ವಯಂ ಅಪಘಾತದಲ್ಲಿ ಶಾಸಕ ವಿನಯ್ ಕುಲಕರ್ಣಿ ಪುತ್ರ ಗಾಯಗೊಂಡಿದ್ದಾನೆ.
ಹೇಮಂತ್(೧೯) ಗಾಯಗೊಂಡ ಸವಾರ. ಧಾರವಾಡ ಗ್ರಾಮೀಣ ಕ್ಷೇತ್ರದ ಶಾಸಕ ವಿನಯ್ ಕುಲಕರ್ಣಿ ಪುತ್ರ ಹೇಮಂತ್ ಗುರುವಾರ ಬೆಳಗ್ಗೆ ೫ ಗಂಟೆ ಸುಮಾರಿಗೆ ಹೊರವರ್ತುಲ ರಸ್ತೆಯಲ್ಲಿ ಎಚ್‌ಎಸ್‌ಆರ್ ಲೇಔಟ್ ಕಡೆಯಿಂದ ಇಬ್ಬಲೂರು ಕಡೆಗೆ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದರು. ಈ ವೇಳೆ ಮಾರ್ಗ ಮಧ್ಯೆ ನಿಯಂತ್ರಣ ತಪ್ಪಿ ದ್ವಿಚಕ್ರ ವಾಹನ ಸಹಿತ ರಸ್ತೆಗೆ ಬಿದ್ದಿದ್ದಾರೆ. ಈ ವೇಳೆ ಹೇಮಂತ್ ಎಡಗಾಲಿಗೆ ಪೆಟ್ಟಾಗಿ ರಕ್ತಸ್ರಾವವಾಗಿದೆ. ಕೂಡಲೇ ಸ್ಥಳೀಯರು ಗಾಯಾಳುವನ್ನು ಸಮೀಪದ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಹೇಮಂತ್ ದ್ವಿಚಕ್ರ ವಾಹನದಲ್ಲಿ ಒಬ್ಬರೇ ಹೋಗುತ್ತಿದ್ದರು. ನಿಯಂತ್ರಣ ತಪ್ಪಿ ಬಿದ್ದಿರುವ ಪರಿಣಾಮ ಗಾಯಗೊಂಡಿದ್ದಾರೆ. ಇದೀಗ ಚಿಕಿತ್ಸೆ ಪಡೆದಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ಸಂಬಂಧ ಬೆಳ್ಳಂದೂರು ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.