ನ್ಯೂಸ್

ದೇಶಕ್ಕೆ ಮೋದಿನೇ ಗ್ಯಾರಂಟಿ; ವಿಜಯೇಂದ್ರ

ಬೆಂಗಳೂರು: ದೇಶದ ಭವಿಷ್ಯದ ದೃಷ್ಟಿ, ಶಕ್ತಿಶಾಲಿ ಮತ್ತು ಅಗ್ರಗಣ್ಯ ರಾಷ್ಟ್ರ ನಿರ್ಮಾಣ ಮಾಡಲು ಪ್ರಧಾನಿ ನರೇಂದ್ರ ಮೋದಿ ಅವರಿಂದ ಮಾತ್ರ ಸಾಧ್ಯ. ದೇಶಕ್ಕೆ ಮೋದಿನೇ ಗ್ಯಾರಂಟಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.

ಜಯನಗರದಲ್ಲಿ ಬೆಂಗಳೂರು ನಗರ ದಕ್ಷಿಣ ಜಿಲ್ಲಾ ಬಿಜೆಪಿಯಿಂದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ , ಪ್ರತಿಪಕ್ಷ ನಾಯಕ ಆರ್.ಅಶೋಕ್ ಅವರಿಗೆ ಅಭಿನಂದನಾ ಸಮಾರಂಭ ಮತ್ತು ನೂತನ ಜಿಲ್ಲಾಧ್ಯಕ್ಷ ಸಿ.ಕೆ.ರಾಮಮೂರ್ತಿ ಅವರ ಪದಗ್ರಹಣ ಸಮಾರಂಭ ಉದ್ದೇಶಿಸಿ ಮಾತನಾಡಿದರು.

ರಾಜ್ಯದಲ್ಲಿ ಕಾಂಗ್ರೆಸ್ ಗೆಲುವಿನ ನಂತರ ಭ್ರಮೆಯಲ್ಲಿದೆ. ಪಂಚ ರಾಜ್ಯ ಚುನಾವಣೆಯಲ್ಲಿ ಮೂರು ರಾಜ್ಯ ಚುನಾವಣೆಯ ಫಲಿತಾಂಶ ನೋಡಿದ ಕಾಂಗ್ರೆಸ್‌ಗೆ ಮಾರ್ಮಘಾತವಾಗಿದೆ. ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರೇ ಬಿಜೆಪಿ 400 ಲೋಕಸಭಾ ಕ್ಷೇತ್ರ ಗೆಲ್ಲುತ್ತದೆ ಎಂದು ಹೇಳಿದ್ದಾರೆ ಎಂದರು.

ನಮ್ಮ ತಪ್ಪಿನಿಂದ ಕಾಂಗ್ರೆಸ್ ಸರ್ಕಾರ ಬಂದಿದೆ. ನಾನು ರಾಜ್ಯಾದ್ಯಂತ ಪ್ರವಾಸ ಮಾಡಿದ್ದೇನೆ. ರಾಜ್ಯದಲ್ಲಿ ಒಂದು ಬಿಡಿಗಾಸು ಅಭಿವೃದ್ದಿ ಮಾಡಿಲ್ಲ. 8 ತಿಂಗಳ ಆಡಳಿತದ ಕಾಂಗ್ರೆಸ್ ಸರ್ಕಾರ ಜನವಿರೋಧಿಯಾಗಿದೆ ಎಂದು ಟೀಕಿಸಿದರು.

ಭ್ರಷ್ಟಚಾರ ರಹಿತ ಆಡಳಿತ ನೀಡಿದ ವಿಶ್ವದ ಗಮನ ಸೆಳದ ನಾಯಕ ಪ್ರಧಾನಿ ಮೋದಿಯವರು. ಬಡವರು,ರೈತರು, ಮಹಿಳೆಯರು, ಯುವಕರು 2047ವಿಕಸಿತ ಭಾರತ ನಿರ್ಮಾಣ ಮಾಡುವ ಅಚಲ ವಿಶ್ವಾಸವನ್ನು ಮೋದಿ ಇಟ್ಟುಕೊಂಡಿದ್ದಾರೆ ಎಂದು ಹೇಳಿದರು.

ಪ್ರತಿ ಪಕ್ಷದ ನಾಯಕ ಆರ್.ಅಶೋಕ್ ಮಾತನಾಡಿ, ಲೋಕಸಭಾ ಚುನಾವಣೆಗೆ ಸಂಪೂರ್ಣ ತಯಾರಿ ಮಾಡಲಾಗುತ್ತಿದೆ. 28 ಲೋಕಸಭಾ ಕ್ಷೇತ್ರ ಗೆಲ್ಲಲು ಬಿಜೆಪಿ ಅಧ್ಯಕ್ಷರು ಆದೇಶ ನೀಡಿದ್ದಾರೆ. ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಬಂದಿದೆ. 8 ತಿಂಗಳ ಅವಧಿಯಲ್ಲಿ ಅಭಿವೃದ್ದಿಯಾಗಿಲ್ಲ, ಯಾವುದೇ ಕಲ್ಯಾಣ ಕಾರ್ಯಕ್ರಮ ಅನುಷ್ಠಾನವಾಗಿಲ್ಲ. ಕಾಂಗ್ರೆಸ್ ಸರ್ಕಾರ ಪಾಪರ್ ಸರ್ಕಾರ. ದೆಹಲಿ ಹೋಗಿ ಪ್ರತಿಭಟನೆ ಮಾಡಲು ಕಾಂಗ್ರೆಸ್ ತಯಾರಿ ನಡೆಸಿದ್ದಾರೆ. ದೇಶ ಒಡೆಯುವ ಕೆಲಸ ಕಾಂಗ್ರೆಸ್ ಪಕ್ಷದವರು ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಕೇಂದ್ರದಿಂದ ಹಣ ಕೇಳುತ್ತಿರುವುದು ಕಾಂಗ್ರೆಸ್ ಸರ್ಕಾರ ಲೂಟಿ ಹೊಡೆಯಲು. ಹಿಂದಿನ ಕಾಂಗ್ರೆಸ್ ಸರ್ಕಾರಕ್ಕಿಂತ ಹೆಚ್ಚು ಅನುದಾನ ರಾಜ್ಯಕ್ಕೆ ಬಂದಿದೆ. ಕಾಂಗ್ರೆಸ್‌ನವರು ದೇಶ ಎರಡು ಭಾಗ, ಉತ್ತರ ಕರ್ನಾಟಕ, ದಕ್ಷಿಣ ಕರ್ನಾಟಕ ಮತ್ತು ಬೆಂಗಳೂರು ಎರಡು ಭಾಗ ನಂತರ ಕನಕಪುರ ಒಂದು ಭಾಗ ಮಾಡಲು ಹೋಗುತ್ತಿದ್ದಾರೆ ಎಂದು ಲೇವಡಿ ಮಾಡಿದರು.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಪ್ರತಿಪಕ್ಷ ನಾಯಕ ಆರ್.ಅಶೋಕ್, ಲೋಕಸಭಾ ಸದಸ್ಯ ತೇಜಸ್ವಿ ಸೂರ್ಯ, ಶಾಸಕ ಸತೀಶ್ ರೆಡ್ಡಿ, ಮಾಜಿ ಸಚಿವ ವಿ.ಸೋಮಣ್ಣ, ಶಾಸಕರಾದ ಎಂ.ಕೃಷ್ಣಪ್ಪ, ರವಿಸುಬ್ರಮಣ್ಯ, ಉದಯ ಗರುಡಚಾರ್ ಭಾರತ ಮಾತೆಗೆ ಪುಷ್ಪನಮನ ಸಲ್ಲಿಸಿ ಸಮಾರಂಭಕ್ಕೆ ಚಾಲನೆ ನೀಡಿದರು.

ನೂತನ ಜಿಲ್ಲಾಧ್ಯಕ್ಷ, ಶಾಸಕ ಸಿ.ಕೆ.ರಾಮಮೂರ್ತಿ ಅವರಿಗೆ ಬಿಜೆಪಿ ಬಾವುಟ ಹಸ್ತಾಂತರ ಮಾಡಿ ಪದಗ್ರಹಣ ನೇರವೇರಿಸಲಾಯಿತು.

ಬೆಂಗಳೂರು ದಕ್ಷಿಣ ಬಿಜೆಪಿ ಪಕ್ಷದ ಭದ್ರಕೋಟೆ. 10 ವಿಧಾನಸಭಾ ಕ್ಷೇತ್ರಗಳು ದಕ್ಷಿಣ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಬರುತ್ತವೆ. ಸದೃಢ ಮತ್ತು ಸಂಘಟನೆ ಮೂಲಕ ಬೂತ್ ಮಟ್ಟದಲ್ಲಿ ಪ್ರಧಾನಿ ಮೋದಿ ಸರ್ಕಾರದ ಸಾಧನೆಗಳನ್ನು ಮನೆ, ಮನೆಗಳಿಗೆ ತಲುಪಿಸುವ ಕೆಲಸವನ್ನು ಪ್ರತಿಯೊಬ್ಬ ಕಾರ್ಯಕರ್ತರೂ ಮಾಡಬೇಕು.

-ಸಿ.ಕೆ.ರಾಮಮೂರ್ತಿ, ಬೆಂಗಳೂರು ದಕ್ಷಿಣ ಜಿಲ್ಲಾ ಬಿಜೆಪಿ ಅಧ್ಯಕ್ಷ.