ಚಿಕ್ಕಮಗಳೂರು: ಇಂದಿನಿಂದ ರಾಜ್ಯಾದ್ಯಂತ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಹಿನ್ನೆಲೆಯಲ್ಲಿ ಚಿಕ್ಕಮಗಳೂರಿನ ಮೂಡಿಗೆರೆ ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮ ಅವರು ಉಚಿತ ಟಿಕೆಟ್ ಪಡೆದು ಪ್ರಯಾಣ ಮಾಡಿದರು.
ಶಕ್ತಿ ಯೋಜನೆಗೆ ಚಾಲನೆ ನೀಡಿ, ಮೂಡಿಗೆರೆಯಿಂದ ಬೇಲೂರಿಗೆ ಟಿಕೆಟ್ ಪಡೆದು ಪ್ರಯಾಣ ಆರಂಭಿಸಿದರು. ಈ ವೇಳೆ ಶಾಸಕಿ ನಯನಾಗೆ ಮಹಿಳೆಯರು ಸಾಥ್ ನೀಡಿದರು. ಸುಮಾರು 15 ಕಿ.ಮೀ. ದೂರ ಪ್ರಯಾಣ ಮಾಡಿದರು.
ನಯನಾ ಅವರು ಮಾಜಿ ಸಚಿವೆ ಮೋಟಮ್ಮ ಅವರ ಪುತ್ರಿ. ಚಿಕ್ಕಮಗಳೂರಿನ ಮೂಡಿಗೆರೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕಿ. ಬಿಜೆಪಿ ಅಭ್ಯರ್ಥಿಯಾಗಿದ್ದ ದೀಪಕ್ ದೊಡ್ಡಯ್ಯ ವಿರುದ್ಧ ಗೆಲುವು ದಾಖಲಿಸಿ, ಮೊದಲ ಬಾರಿಗೆ ಶಾಸಕಿಯಾಗಿ ವಿಧಾನಸೌಧದ ಪ್ರವೇಶಿಸಿದ್ದಾರೆ.
ಇಂದು ವಿಧಾನಸೌಧದ ಮೆಟ್ಟಿಲುಗಳ ಮೇಲೆ ನಡೆದ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ದೀಪ ಬೆಳಗುವುದರ ಮೂಲಕ ಶಕ್ತಿ ಯೋಜನೆ ಉದ್ಘಾಟಿಸಿದರು. ಬಳಿಕ ಶಕ್ತಿ ಯೋಜನೆಯ ಲೋಗೋ ಮತ್ತು ಸ್ಮಾರ್ಟ್ ಕಾರ್ಡ್ ಮಾದರಿಯನ್ನು ಬಿಡುಗಡೆ ಮಾಡಿದರು. ಇದೇ ವೇಳೆ ಸಾಂಕೇತಿಕವಾಗಿ ಐದು ಮಹಿಳೆಯರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ ಮಾಡಲಾಯಿತು.
ಚಾಲನೆ ನೀಡಿದ ಬಳಿಕ ಸಿಎಂ ಸಿದ್ದರಾಮ್ಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಬಿಎಂಟಿಸಿ ಬಸ್ನಲ್ಲಿ ಮೆಜೆಸ್ಟಿಕ್ಗೆ ಒಟ್ಟಿಗೆ ಪ್ರಯಾಣ ಬೆಳೆಸಿದರು. ಈ ವೇಳೆ ಡಿಸಿಎಂ ಡಿಕೆಶಿ ಅವರು ಮಹಿಳೆಯರಿಗೆ ಉಚಿತವಾಗಿ ಟಿಕೆಟ್ ಸಹ ವಿತರಣೆ ಮಾಡಿದರು. ಬಸ್ ಮೆಜಿಸ್ಟಿಕ್ ತಲುಪಿದ ಬಳಿಕ ಧರ್ಮಸ್ಥಳಕ್ಕೆ ಹೊರಡುವ ಮೊದಲ ಕೆಎಸ್ಆರ್ಟಿಸಿ ಬಸ್ನಲ್ಲಿ ಸಿಎಂ ಸಿದ್ದರಾಮಯ್ಯ ಟಿಕೆಟ್ ವಿತರಣೆ ಮಾಡುವ ಮೂಲಕ ಶಕ್ತಿ ಯೋಜನೆಗೆ ಅಧಿಕೃತ ಚಾಲನೆ ನೀಡಿದರು. ಬಳಿಕ ಮೆಜೆಸ್ಟಿಕ್ನಿಂದ ಹೊರಟ ಬಸ್‌ಗಳಿಗೆ ಬಸ್‌ಗಳಿಗೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಮತ್ತು ಸಾರಿಗೆ ಸಚಿವರು ಹಸಿರು ನಿಶಾನೆ ತೋರಿದರು.