ನ್ಯೂಸ್

ನಗರಸಭೆ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆಗೆ ಹೈಕೋರ್ಟ್ ಅಸ್ತು : ನ. 2ರೊಳಗೆ ಪ್ರಕ್ರಿಯೆ ಪೂರ್ಣಗೊಳಿಸಲು ಸೂಚನೆ

ಬೆಂಗಳೂರು: ನಗರಸಭೆ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಗಳ ಮೀಸಲು ಅಧಿಸೂಚನೆಗೆ ಹೈಕೋರ್ಟ್ ಏಕಸದಸ್ಯ ಪೀಠ ನೀಡಿದ್ದ ತಡೆಯಾಜ್ಞೆ ತೆರವುಗೊಳಿಸಿರುವ ವಿಭಾಗೀಯ ಪೀಠ, ರಾಜ್ಯದ ಎಲ್ಲ 59 ನಗರಸಭೆಗಳ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳ ಚುನಾವಣೆಗೆ ಹಸಿರು ನಿಶಾನೆ ತೋರಿದೆ.

ಜತೆಗೆ, ನ.2ರೊಳಗೆ ಚುನಾವಣಾ ಪ್ರಕ್ರಿಯೆ ಪೂರ್ಣಗೊಳಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿದೆ. ಚುನಾವಣಾ ಫಲಿತಾಂಶ ಅರ್ಜಿಯ ಅಂತಿಮ ತೀರ್ಪಿಗೆ ಒಳಪಡಲಿದೆ ಎಂದು ಪೀಠ ಸ್ಪಷ್ಟಪಡಿಸಿದೆ.

ನಗರಸಭೆಗಳ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳಿಗೆ ಮೀಸಲಾತಿ ನಿಗದಿಪಡಿಸಿ ಅ.8ರಂದು ಹೊರಡಿಸಿದ್ದ ಅಧಿಸೂಚನೆಗೆ ತಡೆ ನೀಡಿ, ಮೀಸಲಾತಿ ಆವರ್ತನೆ ಪರಿಶೀಲಿಸಿ ಕರಡು ಸಲ್ಲಿಸಲು ತ್ರಿಸದಸ್ಯ ಸಮಿತಿ ನೇಮಕ ಮಾಡಿದ್ದ ಏಕಸದಸ್ಯ ಪೀಠದ ಮಧ್ಯಂತರ ಆದೇಶ ಪ್ರಶ್ನಿಸಿ ಸರ್ಕಾರ ಮೇಲ್ಮನವಿ ಸಲ್ಲಿಸಿತ್ತು. ಮೀಸಲಾತಿ ಕಲ್ಪಿಸುವ ವೇಳೆ ರೊಟೇಷನ್ ಅನುಸರಿಸಲಾಗಿಲ್ಲ ಎಂದು ಆಕ್ಷೇಪಿಸಿ ಹಾಸನ, ಅರಸಿಕೇರೆ, ಕೊಪ್ಪಳ, ಶಿಡ್ಲಘಟ್ಟ, ಹರಿಹರ ನಗರಸಭೆಯ ಕೆಲ ಚುನಾಯಿತ ಸದಸ್ಯರು ಹೈಕೋರ್ಟ್ ಮೆಟ್ಟಿಲೇರಿದ್ದರು.