ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಹಾಗೂ ಕಾಂಗ್ರೆಸ್ ಶಾಸಕ ಬಿ. ನಾಗೇಂದ್ರ ಪತ್ನಿ ಮಂಜುಳಾ ಅವರನ್ನು ಜಾರಿ ನಿರ್ದೇಶನಾಲಯ(ಇ.ಡಿ) ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ಡಾಲರ್ಸ್ ಕಾಲೋನಿ ನಿವಾಸದಲ್ಲಿ ಬುಧವಾರ ಅವರನ್ನು ವಶಕ್ಕೆ ಪಡೆಯಲಾಗಿದೆ. ಹಗರಣದ ಆರೋಪಿಗಳ ಹೇಳಿಕೆ ಆಧರಿಸಿ ಈ ಕ್ರಮ ಕೈಗೊಳ್ಳಲಾಗಿದೆ. ವಶಕ್ಕೆ ಪಡೆದ ನಂತರ ಅವರನ್ನು ಅಧಿಕಾರಿಗಳು ಶಾಂತಿನಗರದಲ್ಲಿರುವ ಇಡಿ ಕಚೇರಿಗೆ ಕರೆ ತಂದು ವಿಚಾರಣೆ ನಡೆಸಿದ್ದಾರೆ.
ವಾಲ್ಮೀಕಿ ನಿಗಮ ಹಗರಣದ ಹಣ ಮಂಜುಳಾ ಖಾತೆಯಿಂದ ಇತರೆ ಆರೋಪಿಗಳ ಖಾತೆಗೆ ಹಣ ವರ್ಗಾವಣೆಯಾಗಿರುವುದು ತನಿಖೆ ವೇಳೆ ಪತ್ತೆಯಾದ ಹಿನ್ನೆಲೆಯಲ್ಲಿ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಮಂಜುಳ ಅವರನ್ನು ಇ.ಡಿ ಅಧಿಕಾರಿಗಳು ವಶಕ್ಕೆ ಪಡೆಯುತ್ತಿದ್ದಂತೆಯೇ ಹಲವು ಪ್ರಶ್ನೆಗಳು, ಅನುಮಾನಗಳೂ ಹುಟ್ಟಿಕೊಂಡಿವೆ. ೧೮೭ ಕೋಟಿ ರೂ. ಹಗರಣದಲ್ಲಿ ಮಾಜಿ ಸಚಿವರ ಪತ್ನಿಯ ಪಾತ್ರವೇನು? ಆರೋಪಿಗಳು ವಿಚಾರಣೆ ವೇಳೆ ಮಂಜುಳಾ ಹೆಸರು ಹೇಳಿದ್ದಾರಾ? ಆರೋಪಿಗಳಿಂದ ಮಂಜುಳಾ ಅವರು ನಾಗೇಂದ್ರ ಪರ ಹಣ ಪಡೆದಿದ್ದಾರಾ? ಮಂಜುಳಾಗೆ ಈ ಅಕ್ರಮದ ಬಗ್ಗೆ ಮಾಹಿತಿ ಇತ್ತೇ? ೫ ದಿನದ ನಾಗೇಂದ್ರ ವಿಚಾರಣೆ ವೇಳೆ ಮಂಜುಳಾ ವಿರುದ್ಧ ಸಾಕ್ಷಿಗಳು ಸಿಕ್ಕಿವೆಯೇ ಎಂಬ ಹಲವು ಪ್ರಶ್ನೆಗಳು ಹುಟ್ಟಿಕೊಂಡಿವೆ. ಇದೀಗ ಇ.ಡಿ ನಡೆ ಬಗ್ಗೆ ಕುತೂಹಲ ಗರಿಗೆದರಿದೆ. ಈ ಮಧ್ಯೆ, ಪ್ರಕರಣದ ತನಿಖೆ ಚುರುಕುಗೊಳಿಸಿರುವ ಜಾರಿ ನಿರ್ದೇಶನಾಲಯ ಅಧಿಕಾರಿಗಳು, ಹೈದರಾಬಾದ್ ಮೂಲದ ಖಾಸಗಿ ಬ್ಯಾಂಕಿನಿಂದ ಬಳ್ಳಾರಿ ಜಿಲ್ಲೆಯ ಸುಮಾರು ೨೦ಕ್ಕೂ ಹೆಚ್ಚು ಬ್ಯಾಂಕ್ ಖಾತೆಗಳಿಗೆ ಲಕ್ಷಾಂತರ ರೂ. ಹಣ ವರ್ಗಾವಣೆ ಆಗಿರುವ ಬಗ್ಗೆ ಮಾಹಿತಿ ಕಲೆ ಹಾಕಿದ್ದಾರೆ ಎನ್ನಲಾಗಿದೆ.
ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ ಮಂಗಳವಾರ ಕರ್ನಾಟಕ ವಿಧಾನಸಭೆ ಕಲಾಪದಲ್ಲಿಯೂ ಭಾರಿ ಚರ್ಚೆಗೆ ಗ್ರಾಸವಾಯಿತು. ಇದೀಗ ಮಾಜಿ ಸಚಿವ ನಾಗೇಂದ್ರ ಪತ್ನಿಯನ್ನೂ ಇ.ಡಿ ವಶಕ್ಕೆ ಪಡೆದಿರುವುದರಿಂದ ಪ್ರತಿಪಕ್ಷಗಳಿಗೆ ಪ್ರಬಲ ಅಸ್ತ್ರ ದೊರೆತಂತಾಗಲಿದೆ. ಗುರುವಾರ ನಡೆಯುವ ಕಲಾಪದಲ್ಲಿ ಈ ವಿಚಾರ ಹೆಚ್ಚಿನ ಗದ್ದಲಕ್ಕೆ ಕಾರಣವಾಗುವ ಸಾಧ್ಯತೆ ದಟ್ಟವಾಗಿದೆ.