ನ್ಯೂಸ್

ಲಾರಿಗೆ ಬಸ್​ ಡಿಕ್ಕಿ; 10 ಮಂದಿ ಮೃತ್ಯು, 30ಕ್ಕೂ ಹೆಚ್ಚು ಜನರು ಗಂಭೀರ

ನಾಸಿಕ್: ಬಸ್​-ಲಾರಿ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 10 ಮಂದಿ ಮೃತಪಟ್ಟು, 30ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಹಾರಾಷ್ಟ್ರದ ನಾಸಿಕ್​ನಲ್ಲಿರುವ ಮುಂಬೈ-ಆಗ್ರಾ ಹೆದ್ದಾರಿಯಲ್ಲಿ ನಡೆದಿದೆ.

ಬಸ್​ ನಾಸಿಕ್​ ಕಡೆಯಿಂದ ಜಲ್​ಗಾಂವ್​ನತ್ತ ಹೋಗುತ್ತಿದ್ದಾಗ ದುರ್ಘಟನೆ ಸಂಭವಿಸಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಈ ಪೈಕಿ ಹಲವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ನಾಸಿಕ್ ವಿಭಾಗದ ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು, ನಾಸಿಕ್​ನಿಂದ ಜಲ್​ಗಾಂವ್​ ಕಡೆ ಹೊರಟ್ಟಿದ್ದ ಬಸ್​ ಟೈರ್​ ಸ್ಫೋಟಗೊಂಡ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ಎದುರು ನರುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ವಿಚಾರ ತಿಳಿದ ಕೂಡಲೇ ಪೊಲೀಸ್​ ಹಾಗೂ ರಕ್ಷಣಾ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿ ಮೃತದೇಹಗಳನ್ನು ಹೊರತೆಗೆದು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.

ಕೆಲ ಮೃತದೇಹಗಳು ಬಸ್​ನಡಿ ಸಿಲುಕಿಕೊಂಡಿದ್ದ ಕಾರಣ ಕಟ್​ ಮಾಡಿ ಹೊರತೆಗೆಯಬೇಕಾಯಿತು. ಮೃತರ ಮಾಹಿತಿಯನ್ನು ಕಲೆ ಹಾಕಲಾಗುತ್ತಿದ್ದು, ಗುರುತು ಪತ್ತೆಯಾದವರ ಕುಟುಂಬಸ್ಥರಿಗೆ ಮಾಹಿತಿ ನೀಡಲಾಗಿದೆ. ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ತನಿಖೆ ಬಳಿಕ ಮತ್ತಷ್ಟು ಮಾಹಿತಿ ನೀಡಲಾಗುವುದು ಎಂದು ನಾಸಿಕ್ ವಿಭಾಗದ ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.