ಬೆಂಗಳೂರು: ವಲಸೆ ಕಾರ್ಮಿಕರಿಗೆ ಬಸ್ ವ್ಯವಸ್ಥೆ ಮಾಡುವ ಸಂಬಂಧ ಸುಳ್ಳು ಹೇಳಿ ಸಿಕ್ಕಿಬಿದ್ದಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ತಮ್ಮ ಪಕ್ಷದಿಂದಲೇ ಟೀಕೆಗೆ ಒಳಗಾಗಿ ಮುಜುಗರಕ್ಕೆ ಒಳಗಾಗಿರುವ ಬೆನ್ನಲ್ಲೇ ಇದೀಗ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಸರದಿ!
ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿ ಜನರ ರಕ್ಷಣೆ ಮಾಡುವ ಸಲುವಾಗಿ ಆರಂಭಗೊಂಡಿರುವ ಪಿಎಂ ಕೇರ್ಸ್ ನಿಧಿಯ ಬಗ್ಗೆ ಗಂಭೀರ ಆರೋಪ ಮಾಡಿರುವ ಕಾಂಗ್ರೆಸ್ ಅಧ್ಯಕ್ಷ ಸೋನಿಯಾ ಗಾಂಧಿ ವಿರುದ್ಧ ಎಫ್ಐಆರ್ ದಾಖಲಾಗಿದ್ದು, ಅವರನ್ನು ಸಂಕಷ್ಟಕ್ಕೆ ಸಿಲುಕಿಸಿದೆ.
ಜನರೇ ಖುದ್ದಾಗಿ ಇಷ್ಟಪಟ್ಟು ನೀಡುವ ಹಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ವಿದೇಶಗಳ ಟೂರ್ ಮಾಡಿ ಮಜಾ ಮಾಡುತ್ತಿದ್ದಾರೆ. ಇದು ಬಡಜನರಿಗೆ ಖರ್ಚು ಆಗುತ್ತಿಲ್ಲ, ಈ ಹಣದ ಸದ್ಬಳಕೆ ಆಗುತ್ತಿಲ್ಲ ಎಂದು ಕಾಂಗ್ರೆಸ್ನ ಅಧಿಕೃತ ಟ್ವಿಟರ್ ಖಾತೆಯಲ್ಲಿ ಬರೆಯಲಾಗಿದೆ.
ಇದೀಗ ಭಾರಿ ವೈರಲ್ ಆಗಿದ್ದು, ನೆಟ್ಟಿಗರಿಂದ ತೀವ್ರ ಆಕ್ಷೇಪ ವ್ಯಕ್ತವಾಗಿದೆ. ಇದಕ್ಕೆ ಸಂಬಂಧಿಸಿದಂತೆ ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ವಕೀಲರೊಬ್ಬರು ಸೋನಿಯಾ ಗಾಂಧಿ ವಿರುದ್ಧ ದೂರು ದಾಖಲು ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಅವರ ವಿರುದ್ಧ ಪ್ರಥಮ ಮಾಹಿತಿ ವರದಿ (ಎಫ್ಐಆರ್) ದಾಖಲಿಸಿಕೊಳ್ಳಲಾಗಿದೆ.
ಇದನ್ನೂ ಓದಿ: ಕ್ವಾರಂಟೈನ್ ಗೋಲ್ಮಾಲ್? ಒಳ್ಳೆ ಸೌಲಭ್ಯ ಮಾತ್ರ ಕೇಳ್ಲೇಬೇಡಿ, ದುಡ್ಡು ಕೊಟ್ರೆ ಹೊರಗಡೆ ಆರಾಮಾಗಿ ಹೋಗಿ…
ಇಂತಹ ಹೇಳಿಕೆಗಳ ಮೂಲಕ ಮೋದಿಯವರ ವಿರುದ್ಧ ಅಪಪ್ರಚಾರ ಮಾಡಲಾಗುತ್ತಿದ್ದು, ಜನರನ್ನು ಪ್ರಚೋದಿಸಲಾಗುತ್ತಿದೆ ಎಂದು ವಕೀಲ ಪ್ರವೀಣ್ ದೂರಿನಲ್ಲಿ ಆರೋಪಿಸಿದ್ದಾರೆ. ಈ ರೀತಿಯ ಸಂದೇಶ ಜನರನ್ನು ತಪ್ಪು ದಾರಿಗೆ ಎಳೆಯುತ್ತದೆ. ಯಾವುದೇ ಸಾಕ್ಷ್ಯಾಧಾರಗಳು ಇಲ್ಲದೆಯೇ ಸುಖಾ ಸುಮ್ಮನೆ ಜನರನ್ನು ಕೇಂದ್ರ ಸರ್ಕಾರದ ವಿರುದ್ಧ ಎತ್ತಿ ಕಟ್ಟುವ ಹುನ್ನಾರ ಇದು. ಆದ್ದರಿಂದ ಕಾಂಗ್ರೆಸ್ ಪಕ್ಷದ ಅಧಿಕೃತ ಟ್ವಿಟರ್ ಖಾತೆ ಐಎನ್‌ಸಿ ಇಂಡಿಯಾ, ಕಾಂಗ್ರೆಸ್ ಅಧ್ಯಕ್ಷರು ಮತ್ತು ನೌಕರರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕೆಂದು ಪ್ರವೀಣ್ ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಮೇ 11ರಂದು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಟ್ವಿಟರ್ನಲ್ಲಿ ಪ್ರಕಟಿಸಲಾಗಿತ್ತು. ಈ ಬಗ್ಗೆ ವಕೀಲ ಪ್ರವೀಣ್ ಅವರು ಸಾಕಷ್ಟು ಅಧ್ಯಯನ ನಡೆಸಿದ ನಂತರ ದೂರು ದಾಖಲು ಮಾಡಿದ್ದಾರೆ. ಈ ಬಗ್ಗೆ ಪ್ರಾಥಮಿಕ ಹಂತದ ವಿಚಾರಣೆ ನಡೆಸಿರುವ ಸಾಗರ ಪೊಲೀಸರು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ವಿರುದ್ಧ ಎಫ್ಐಆರ್ ದಾಖಲು ಮಾಡಿದ್ದಾರೆ. (ಏಜೆನ್ಸೀಸ್)