ಗುವಾಹಟಿ: ಸಾರ್ವಜನಿಕ ಸ್ಥಳಗಳು ಹಾಗೂ ಟ್ರಾಫಿಕ್ ಸಿಗ್ನಲ್‌ಗಳಲ್ಲಿ ಹಣಕ್ಕಾಗಿ ಒತ್ತಾಯಿಸಿ ಸುಲಿಗೆ, ಬೆದರಿಕೆ ಮತ್ತು ಅಸಭ್ಯ ವರ್ತನೆ ತೋರಿದ ಆರೋಪದಡಿ ಅಸ್ಸಾಂನ ಗುವಾಹಟಿ ಪೊಲೀಸರು ಬೃಹತ್ ಕಾರ್ಯಾಚರಣೆ ನಡೆಸಿ 22 ತೃತೀಯಲಿಂಗಿಗಳನ್ನು ಬಂಧಿಸಿದ್ದಾರೆ. ನಗರದ ಪ್ರಮುಖ ಜಂಕ್ಷನ್‌ಗಳು ಮತ್ತು ಸಾರ್ವಜನಿಕ ಕಾರ್ಯಕ್ರಮಗಳ ವೇಳೆ ಸಾರ್ವಜನಿಕರಿಗೆ ತೀವ್ರ ಕಿರುಕುಳ ನೀಡಲಾಗುತ್ತಿದೆ ಎಂಬ ನಿರಂತರ ದೂರುಗಳು ಬಂದ ಹಿನ್ನೆಲೆಯಲ್ಲಿ ಖಾಕಿ ಪಡೆ ಈ ದಿಟ್ಟ ಕ್ರಮ ಕೈಗೊಂಡಿದೆ.
ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಗುವಾಹಟಿ ಜಂಟಿ ಪೊಲೀಸ್ ಆಯುಕ್ತ ಅಂಕುರ್ ಜೈನ್, ನಗರದ ಮೂರು ಪೊಲೀಸ್ ಜಿಲ್ಲೆಗಳ ಡಿಸಿಪಿಗಳ ನೇತೃತ್ವದಲ್ಲಿ ವಿಶೇಷ ತಂಡಗಳನ್ನು ರಚಿಸಿ ಈ ಸಂಘಟಿತ ಕಾರ್ಯಾಚರಣೆ ನಡೆಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ಟ್ರಾಫಿಕ್ ಸಿಗ್ನಲ್‌ಗಳು ಮತ್ತು ಜನಸಂದಣಿ ಇರುವ ಪ್ರದೇಶಗಳಲ್ಲಿ ಕೆಲವರು ಬಲವಂತವಾಗಿ ಹಣ ವಸೂಲಿ ಮಾಡುತ್ತಿರುವ ಬಗ್ಗೆ ಸಾರ್ವಜನಿಕರಿಂದ ವ್ಯಾಪಕ ದೂರುಗಳು ಕೇಳಿಬಂದಿದ್ದವು. ಹಣ ಕೊಡಲು ನಿರಾಕರಿಸಿದರೆ ಅವಾಚ್ಯ ಶಬ್ದಗಳಿಂದ ನಿಂದಿಸುವುದು, ಬೆದರಿಕೆ ಹಾಕುವುದು ಮತ್ತು ಸಾರ್ವಜನಿಕರಿಗೆ ಮುಜುಗರ ಉಂಟುಮಾಡುವ ರೀತಿಯಲ್ಲಿ ವರ್ತಿಸಲಾಗುತ್ತಿತ್ತು. ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಈ ಕಾರ್ಯಾಚರಣೆ ಅನಿವಾರ್ಯವಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.
ಈ ಕಾರ್ಯಾಚರಣೆಯಲ್ಲಿ ಕಾನೂನು ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಲಾಗಿದೆ ಎಂದು ಅಂಕುರ್ ಜೈನ್ ಸ್ಪಷ್ಟಪಡಿಸಿದ್ದಾರೆ. ತೃತೀಯಲಿಂಗಿಗಳಿಗೆ ಸಂಬಂಧಿಸಿದ ಪ್ರಕರಣಗಳನ್ನು ನಿರ್ವಹಿಸುವಾಗ ಸುಪ್ರೀಂ ಕೋರ್ಟ್‌ನ ತೀರ್ಪುಗಳು ಹಾಗೂ ಕೇಂದ್ರ ಗೃಹ ಸಚಿವಾಲಯದ ಮಾರ್ಗಸೂಚಿಗಳನ್ನು ಅನುಸರಿಸಲಾಗಿದೆ. ಲಿಂಗ ಗುರುತಿನ ಆಧಾರದ ಮೇಲೆ ಯಾರ ಮೇಲೂ ತಾರತಮ್ಯ ಮಾಡುವುದಿಲ್ಲ. ಆದರೆ, ಯಾರೇ ಅಪರಾಧ ಕೃತ್ಯಗಳಲ್ಲಿ ತೊಡಗಿದರೂ ಕಾನೂನಿನ ಪ್ರಕಾರ ಕ್ರಮ ಕೈಗೊಳ್ಳುವುದು ನಿಶ್ಚಿತ ಎಂದರು. ಬಂಧಿತರ ವಿಚಾರಣೆಗಾಗಿ ಪ್ರತ್ಯೇಕ ಅಧಿಕಾರಿಗಳನ್ನು ನಿಯೋಜಿಸಲಾಗಿದ್ದು, ಅವರ ಗುರುತಿಸುವಿಕೆಯನ್ನು ಗಮನದಲ್ಲಿಟ್ಟುಕೊಂಡೇ ಸೂಕ್ಷ್ಮವಾಗಿ ಪ್ರಕ್ರಿಯೆ ನಡೆಸಲಾಗಿದೆ.
ಬಂಧಿತ 22 ಮಂದಿಯನ್ನು ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಇದೇ ವೇಳೆ, ಕೆಲವರು ಅಕ್ರಮವಾಗಿ ಹಣ ಗಳಿಸುವ ಉದ್ದೇಶದಿಂದ ನಕಲಿಯಾಗಿ ತೃತೀಯಲಿಂಗಿಗಳ ವೇಷ ಧರಿಸುತ್ತಿದ್ದಾರೆ ಎಂಬ ಆರೋಪಗಳ ಕುರಿತು ಪ್ರತಿಕ್ರಿಯಿಸಿದ ಆಯುಕ್ತರು, ಬಂಧಿತರಿಗೆ ಸಂಬಂಧಪಟ್ಟ ಪ್ರಾಧಿಕಾರದಿಂದ ನೀಡಲಾದ ಅಧಿಕೃತ ಪ್ರಮಾಣಪತ್ರಗಳನ್ನು ಸಲ್ಲಿಸಲು ಸೂಚಿಸಲಾಗಿದೆ ಎಂದರು. ಸದ್ಯ ವಶಪಡಿಸಿಕೊಂಡಿರುವ ಗುರುತಿನ ಚೀಟಿಗಳು ಹಾಗೂ ಪ್ರಮಾಣಪತ್ರಗಳ ನೈಜತೆಯನ್ನು ಪರಿಶೀಲಿಸಲಾಗುತ್ತಿದ್ದು, ತನಿಖೆ ಮುಂದುವರಿದಿದೆ.