ತಮಿಳುನಾಡು: ( bus) ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಮಹಿಳೆಯರು ಸೇರಿದಂತೆ ಒಂಬತ್ತು ಜನರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ತಮಿಳುನಾಡಿನ ಕಡಲೂರು ಜಿಲ್ಲೆಯಲ್ಲಿ ಬುಧವಾರ ಸಂಜೆ ಈ ಭೀಕರ ಅಪಘಾತ ಸಂಭವಿಸಿದೆ.
ಕಡಲೂರು ಜಿಲ್ಲೆಯ ಎಲುತ್ತೂರು ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ರಾತ್ರಿ 8 ಗಂಟೆ ಸುಮಾರಿಗೆ ತಿರುಚಿಯಿಂದ ಚೆನ್ನೈಗೆ ತೆರಳುತ್ತಿದ್ದ ಸರ್ಕಾರಿ ಬಸ್ಸಿನ ಮುಂಭಾಗದ ಟೈರ್ ಇದ್ದಕ್ಕಿದ್ದಂತೆ ಸಿಡಿದಿದೆ. ಚಾಲಕನ ನಿಯಂತ್ರಣ ತಪ್ಪಿದ ಬಸ್ ರಸ್ತೆಯ ಮಧ್ಯದಲ್ಲಿರುವ ವಿಭಜಕಕ್ಕೆ ಡಿಕ್ಕಿ ಹೊಡೆದು, ರಸ್ತೆಯ ಇನ್ನೊಂದು ಬದಿಗೆ ಪಲ್ಟಿಯಾಗಿ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಎರಡು ಕಾರುಗಳಿಗೆ ಡಿಕ್ಕಿ ಹೊಡೆದಿದೆ.
ಸರ್ಕಾರಿ ಬಸ್ಸೊಂದು ಟೈರ್ ಒಡೆದು ನಿಯಂತ್ರಣ ತಪ್ಪಿ ಎರಡು ಕಾರುಗಳಿಗೆ ಡಿಕ್ಕಿ ಹೊಡೆದ ಈ ಅಪಘಾತದಲ್ಲಿ 9 ಜನರು ಸಾವನ್ನಪ್ಪಿದ್ದಾರೆ. ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಮೃತರಲ್ಲಿ 5 ಪುರುಷರು ಮತ್ತು 4 ಮಹಿಳೆಯರು ಸೇರಿದ್ದಾರೆ.
ಅಪಘಾತದಲ್ಲಿ ಗಾಯಗೊಂಡವರನ್ನು ಹತ್ತಿರದ ಆಸ್ಪತ್ರೆಗಳಿಗೆ ಕರೆದೊಯ್ಯಲಾಯಿತು. ಸ್ಥಳಕ್ಕೆ ಪೊಲೀಸರು ಬಂದಿದ್ದು, ಪರಿಶೀಲನೆ ಮಾಡುತ್ತಿದ್ದಾರೆ. ಈ ಅಪಘಾತದಲ್ಲಿ ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ. ಮೃತರ ಗುರುತನ್ನು ಪತ್ತೆ ಹಚ್ಚುವ ಪ್ರಕ್ರಿಯೆ ನಡೆಯುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.
ಮುಖ್ಯಮಂತ್ರಿಗಳ ಸಾರ್ವಜನಿಕ ಪರಿಹಾರ ನಿಧಿಯಿಂದ ಮೃತರ ಕುಟುಂಬಗಳಿಗೆ ತಲಾ 3 ಲಕ್ಷ ರೂಪಾಯಿ ಮತ್ತು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವವರಿಗೆ ತಲಾ 1 ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಘೋಷಿಸಿದ್ದಾರೆ.