Womens Reservation Bill 
ದೇಶ

ಸೋಮವಾರವೇ ಮಸೂದೆ ಮಂಡಿಸಿ...ಪ್ರಧಾನಿ ಮೋದಿಗೆ ಪತ್ರ ಬರೆಯಲು ಇಂಡಿಯಾ ಮೈತ್ರಿಕೂಟ ನಿರ್ಧಾರ | Womens Reservation Bill

ನವದೆಹಲಿ: ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಜಾರಿಗೆ ಸಂಬಂಧಿಸಿದ ಸಂವಿಧಾನ ತಿದ್ದುಪಡಿ ಮಸೂದೆ ಪತನಗೊಂಡ ಬೆನ್ನಲ್ಲೇ, ರಾಜಕೀಯ ಸಂಘರ್ಷ ತೀವ್ರಗೊಂಡಿದ್ದು, ಮಸೂದೆಯ ಸೋಲಿನ ಹೊಣೆಯನ್ನು ಸರ್ಕಾರದ ಮೇಲೆ ಹಾಕಿರುವ ವಿರೋಧ ಪಕ್ಷಗಳು, ಈಗ ಮಸೂದೆಯ ಹಳೆಯ ಆವೃತ್ತಿಯನ್ನೇ ಜಾರಿಗೆ ತರಬೇಕೆಂದು ಒತ್ತಾಯಿಸಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆಯಲು ಸಿದ್ಧತೆ ನಡೆಸಿವೆ.
ಈ ಮೂಲಕ ಮಸೂದೆಯ ವಿಷಯದಲ್ಲಿ ಸರ್ಕಾರದ ವಿರುದ್ಧ ರಾಷ್ಟ್ರಮಟ್ಟದಲ್ಲಿ ಒಗ್ಗಟ್ಟಿನ ಹೋರಾಟ ರೂಪಿಸಲು ಇಂಡಿಯಾ ಮೈತ್ರಿಕೂಟದ ಮಿತ್ರಪಕ್ಷಗಳು ನಿರ್ಧರಿಸಿವೆ.
ವಿರೋಧ ಪಕ್ಷಗಳು ದೇಶಾದ್ಯಂತ ಸರಣಿ ಪತ್ರಿಕಾಗೋಷ್ಠಿಗಳನ್ನು ನಡೆಸಲು ಚಿಂತನೆ ನಡೆಸಿದ್ದು, ಮಹಿಳಾ ಮೀಸಲಾತಿಯನ್ನು ತಾವು ಬೆಂಬಲಿಸುತ್ತದೆಯಾದರೂ, ಸರ್ಕಾರವು ಈ ಮಸೂದೆಯ ಹೆಸರಿನಲ್ಲಿ ಕ್ಷೇತ್ರ ಪುನರ್ವಿಂಗಡಣೆ ನಡೆಸಿ ದೇಶದ ರಾಜಕೀಯ ನಕ್ಷೆಯನ್ನು ಬದಲಿಸಲು ಯತ್ನಿಸುತ್ತಿದೆ ಎಂದು ಜನರಿಗೆ ಮನವರಿಕೆ ಮಾಡಿಕೊಡುವುದು ಪ್ರತಿಪಕ್ಷಗಳ ಉದ್ದೇಶವಾಗಿದೆ. ಇತ್ತೀಚೆಗೆ ನಡೆದ ಮೈತ್ರಿಕೂಟದ ಸಭೆಯಲ್ಲಿ ಸೋನಿಯಾ ಗಾಂಧಿ ಎಲ್ಲಾ ಮಿತ್ರಪಕ್ಷಗಳಿಗೆ ಕೃತಜ್ಞತೆ ಸಲ್ಲಿಸಿದ್ದು, ಮಸೂದೆಯ ವಿರುದ್ಧದ ಹೋರಾಟದ ಹಾದಿಯನ್ನು ಚರ್ಚಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಪ್ರಿಯಾಂಕಾ ಪಂಚ್​...

ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಸರ್ಕಾರಕ್ಕೆ ನೇರ ಸವಾಲು ಹಾಕಿದ್ದು, ಯಾವುದೇ ವಿಳಂಬವಿಲ್ಲದೆ ಮಸೂದೆಯ ಮೂಲ ಆವೃತ್ತಿಯನ್ನು ಸದನದಲ್ಲಿ ಮಂಡಿಸಲಿ ಎಂದು ಒತ್ತಾಯಿಸಿದ್ದಾರೆ. ಸೋಮವಾರವೇ ವಿಶೇಷ ಅಧಿವೇಶನ ಕರೆದು ಹಳೆಯ ಮಸೂದೆಯನ್ನು ಮಂಡಿಸಿದರೆ ನಾವೆಲ್ಲರೂ ಬೆಂಬಲಿಸುತ್ತೇವೆ, ಆಗ ಯಾರು ಮಹಿಳಾ ವಿರೋಧಿ ಎಂಬುದು ಜಗತ್ತಿಗೆ ತಿಳಿಯಲಿದೆ ಎಂದು ಕಿಡಿಕಾರಿದ್ದಾರೆ.
2023ರ ಕಾಯ್ದೆಯು ಈಗಾಗಲೇ ಶೇಕಡಾ 33ರಷ್ಟು ಮೀಸಲಾತಿ ಒದಗಿಸಿದ್ದರೂ, ಅದನ್ನು ಪ್ರಾಯೋಗಿಕವಾಗಿ ಜಾರಿಗೆ ತರುವ ಸರ್ಕಾರದ ಹೊಸ ಪ್ರಯತ್ನಗಳು ದೇಶದ ಚುನಾವಣಾ ರಚನೆಯನ್ನು ಬದಲಿಸುವ ಪಿತೂರಿಯಾಗಿದೆ ಎಂದು ರಾಹುಲ್ ಗಾಂಧಿ ಸೇರಿದಂತೆ ಇತರ ನಾಯಕರು ಆರೋಪಿಸಿದ್ದಾರೆ.

ಮಸೂದೆಗೆ ಸೋಲು..

ಸಂಸತ್ತಿನಲ್ಲಿ ನಡೆದ ಮತದಾನದ ವಿವರಗಳ ಪ್ರಕಾರ, ಚರ್ಚೆಯ ಬಳಿಕ ನಡೆದ ಮತದಾನದಲ್ಲಿ ಒಟ್ಟು 528 ಸದಸ್ಯರು ಭಾಗವಹಿಸಿದ್ದರು. ಈ ಪೈಕಿ 298 ಸದಸ್ಯರು ಮಸೂದೆಯ ಪರವಾಗಿ ಮತ ಚಲಾಯಿಸಿದರೆ, 230 ಸದಸ್ಯರು ಮಸೂದೆಯನ್ನು ವಿರೋಧಿಸಿ ಮತ ಹಾಕಿದರು. ಸಾಂವಿಧಾನಿಕ ತಿದ್ದುಪಡಿ ಮಸೂದೆಯು ಅಂಗೀಕಾರವಾಗಲು ಸದನದಲ್ಲಿ ಹಾಜರಿದ್ದು ಮತ ಚಲಾಯಿಸುವ ಸದಸ್ಯರ ಪೈಕಿ ಕನಿಷ್ಠ ಮೂರನೇ ಎರಡರಷ್ಟು (ಅಂದರೆ ಸುಮಾರು 326 ಮತಗಳು) ಬೆಂಬಲದ ಅಗತ್ಯವಿತ್ತು. ಆದರೆ ಸರ್ಕಾರದ ಪರವಾಗಿ ಚಲಾವಣೆಯಾಗಿದ್ದು 298 ಮತಗಳು.
ಇಂಡಿಯಾ ಕೂಟದ ಬಹುತೇಕ ಎಲ್ಲಾ ಪಕ್ಷಗಳು ಈ ಮಸೂದೆಗಳನ್ನು ಒಗ್ಗಟ್ಟಿನಿಂದ ವಿರೋಧಿಸಿದ್ದು ಈ ಸೋಲಿಗೆ ಪ್ರಮುಖ ಕಾರಣವಾಗಿದೆ. ಹೊಸ ಜನಗಣತಿಯಿಲ್ಲದೆ ಕ್ಷೇತ್ರ ಪುನರ್ವಿಂಗಡಣೆ ಮಾಡುವುದು ದಕ್ಷಿಣದ ರಾಜ್ಯಗಳ ರಾಜಕೀಯ ಪ್ರಾತಿನಿಧ್ಯಕ್ಕೆ ಧಕ್ಕೆ ತರುತ್ತದೆ ಮತ್ತು ಇದು ಒಬಿಸಿ ಸಮುದಾಯವನ್ನು ನಿರ್ಲಕ್ಷಿಸುವ ಪ್ರಯತ್ನ ಎಂದು ವಿರೋಧ ಪಕ್ಷಗಳು ವಾದಿಸಿದವು. 2029ರ ಚುನಾವಣೆಯಿಂದ ಮೀಸಲಾತಿ ಜಾರಿಯಾಗಲಿದೆ ಎಂಬ ಸರ್ಕಾರದ ಪ್ರಸ್ತಾಪವನ್ನು ಚುನಾವಣಾ ಗಿಮಿಕ್ ಎಂದು ಕರೆದಿದ್ದ ವಿಪಕ್ಷಗಳು, ಅಂತಿಮವಾಗಿ ಸದನದಲ್ಲಿ ಮಸೂದೆಯನ್ನು ತಡೆಯುವಲ್ಲಿ ಯಶಸ್ವಿಯಾಗಿವೆ(ಏಜೆನ್ಸೀಸ್​).