ನವದೆಹಲಿ: ಬುಧವಾರ (ಅ.7) ಚುನಾವಣಾ ಆಯೋಗ ನಡೆಸುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (SIR) ಗೆ ವಿರೋಧ ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಬೇಕೆಂದು ದೆಹಲಿಯ ಜಂತರ್-ಮಂತರ್‌ನಲ್ಲಿ ಪ್ರತಿಭಟನೆ ನಡೆಸುವುದಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕರೆ ನೀಡಿದ್ದರು.
ಆದರೆ, ಈಗ ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹಾಗೂ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಸೇರಿದಂತೆ ಅನೇಕ ಪ್ರತಿಭಟನಾಕಾರರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದಿರುವುದಾಗಿ ವರದಿಯಾಗಿದೆ.
ಪೊಲೀಸರಿಂದ ಬಂಧನಕ್ಕೆ ಒಳಗಾಗುತ್ತಿದ್ದ ಸಂದರ್ಭದಲ್ಲಿ ಮಾತನಾಡಿದ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ, ದೆಹಲಿ ಪೊಲೀಸರು ಸಂಸದರ ಮೇಲೆ ಮನ ಬಂದಂತೆ ಹಲ್ಲೆ ನಡೆಸುತ್ತಿದ್ದು, ನನ್ನ ಮೈತುಂಬಾ ಗಾಯಗೊಳಿಸಿದ್ದಾರೆಂದು ಆರೋಪಿಸಿದ್ದಾರೆ. ಇವರು, ನಮ್ಮನ್ನು ನೆಲದ ಮೇಲೆ ಬಿಸಾಡುತ್ತಿದ್ದು, ಈಗ ಇಲ್ಲಿಂದ ನಮ್ಮನ್ನು ಕರೆದದೊಯ್ಯಲು ಮುಂದಾಗಿದ್ದಾರೆ. ಆದರೆ ನಾವು ಇಲ್ಲಿಂದ ಎಲ್ಲಿಗೂ ಹೋಗುವುದಿಲ್ಲ ಎಂದು ಸಂಸದೆ ಆಕ್ರೋಶ ಭರಿತವಾಗಿ ನುಡಿದಿದ್ದಾರೆ.
ಇನ್ನು ಪ್ರತಿಭಟನೆ ನೇತೃತ್ವವಹಿಸಿದ್ದ, ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯನ್ನು ದೆಹಲಿ ಪೊಲೀಸರು ಕೈ-ಕಾಲುಗಳನ್ನು ಹಿಡಿದುಕೊಂಡು ಹೋಗಿ ಪೊಲೀಸ್ ವ್ಯಾನ್ನಲ್ಲಿ ತುಂಬಿಸಿದ್ದಾರೆ. ಈ ಸಂದರ್ಭದಲ್ಲಿ ರಾಹುಲ್ ಗಾಂಧಿ ಪೊಲೀಸರ ಕೈಯಿಂದ ತಪ್ಪಿಸಿಕೊಳ್ಳಲು ಮಾಡಿರುವ ವಿಫಲ ಪ್ರಯತ್ನದ ವಿಡಿಯೋಗಳು ಸೋಷಿಯಲ್ ಮೀಡಿಯಾನಲ್ಲಿ ವೈರಲ್ ಆಗುತ್ತಿದೆ.
ಮುಖ್ಯ ಚುನಾವಣಾ ಆಯುಕ್ತ ಭೇಟಿಗಾಗಿ ಆಗ್ರಹಿಸಿ ಸುಮಾರು 8 ಗಂಟೆಗಳ ಕಾಲ ಧರಣಿ ನಡೆಸಿ ಘಲ ದೊರೆಯದ ಹಿನ್ನಲೆ, ದೆಹಲಿಯ ಜಂತರ್-ಮಂತರ್‌ನಲ್ಲಿ ಕೇಂದ್ರ ಚುನಾವಣಾ ಆಯೋಗ ಹಾಗೂ ಮುಖ್ಯ ಚುನಾವಣಾ ಆಯುಕ್ತರ ರಾಜೀನಾಮೆ ಆಗ್ರಹಿಸಿ ಪ್ರತಿಭಟನೆ ನಡೆಸುವುದಾಗಿ ರಾಹುಲ್ ಗಾಂಧಿ ಘೋಷಿಸಿದ್ದಾರೆ.
ದೇಶದಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ಎಸ್ಐಆರ್ ಪ್ರಕ್ರಿಯೆಯನ್ನು ತಕ್ಷಣವೇ ನಿಲ್ಲಿಸಬೇಕು ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಬೇಕು ಎನ್ನವುದು ಈ ಪ್ರತಿಭಟನೆಯ ಪ್ರಮುಖ ಉದ್ದೇಶವಾಗಿದೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.
300 ಕ್ಕೂ ಹೆಚ್ಚಿನ ಎಂಪಿ, ಎಂಎಲ್ಎಗಳು ಮುಖ್ಯ ಚುನಾವಣಾ ಆಯುಕ್ತರು ತಮ್ಮ ಹುದ್ದೆಗೆ ರಾಜೀನಾಮೆ ನೀಡಬೇಕು ಮತ್ತು ಚುನಾವಣಾ ಆಯೋಗದ ಎದುರಿಗೆ ಪ್ರತಿಭಟನೆ ನಡೆಸಲು ಅವಕಾಶ ನೀಡಬೇಕೆಂದು ನಾವು ಒತ್ತಾಯ ಮಾಡಿದ್ದೆವು. ಆದರೆ ಈ ಕುರಿತು ಸಕಾರಾತ್ಮಕ ಪ್ರತಿಕ್ರಿಯೆ ವ್ಯಕ್ತವಾಗದ ಹಿನ್ನಲೆ, ಜಂತರ್-ಮಂತರ್‌ನಲ್ಲಿ ಪ್ರತಿಭಟನೆ ಮುಂದುವರಿಸುವುದಾಗಿ ರಾಹುಲ್ ಗಾಂಧಿ ತಿಳಿಸಿದ್ದಾರೆ, (ಏಜೆನ್ಸೀಸ್).