ನಿತೀಶ್ ಕುಮಾರ್ ಅವರ ಪುತ್ರ ನಿಶಾಂತ್ ಕುಮಾರ್ ಪ್ರಮಾಣವಚನ 
ದೇಶ

ಬಿಹಾರ ಸಚಿವ ಸಂಪುಟ ವಿಸ್ತರಣೆ; ನಿತೀಶ್ ಕುಮಾರ್ ಪುತ್ರ ನಿಶಾಂತ್ ಸೇರಿ 31 ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕಾರ | Cabinet Expansion

ಪಾಟ್ನಾ: ಬಿಹಾರದಲ್ಲಿ ಸಾಮ್ರಾಟ್ ಚೌಧರಿ ನೇತೃತ್ವದ ಎನ್​ಡಿಎ ಸರ್ಕಾರದ ಸಚಿವ ಸಂಪುಟ ವಿಸ್ತರಣೆಯಾಗಿದ್ದು, ಇಂದು(ಮೇ 07) ಜೆಡಿಯು ಮುಖ್ಯಸ್ಥ ನಿತೀಶ್ ಕುಮಾರ್ ಅವರ ಪುತ್ರ ನಿಶಾಂತ್ ಕುಮಾರ್ ಸೇರಿ 31 ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.
ಪಾಟ್ನಾದ ಗಾಂಧಿ ಮೈದಾನದಲ್ಲಿ ಕಾರ್ಯಕ್ರಮ ನಡೆದಿದ್ದು, ರಾಜ್ಯಪಾಲ ನಿವೃತ್ತ ಲೆಫ್ಟಿನೆಂಟ್ ಜನರಲ್ ಸೈಯದ್ ಅತಾ ಹಸ್ನೈನ್ ಪ್ರಮಾಣ ವಚನ ಬೋಧಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ಜೆಡಿಯು ಮುಖ್ಯಸ್ಥ ನಿತೀಶ್ ಕುಮಾರ್ ಹಾಗೂ ರಾಜ್ಯದ ಆಡಳಿತಾರೂಢ ಎನ್‌ಡಿಎಯ ಇತರ ಹಿರಿಯ ನಾಯಕರು ಭಾಗವಹಿಸಿದ್ದರು.
ನಿಶಾಂತ್ ಕುಮಾರ್ ಮತ್ತು ಮಾಜಿ ಡಿಸಿಎಂ ವಿಜಯ್ ಕುಮಾರ್ ಸಿನ್ಹಾ ಅಷ್ಟೇ ಅಲ್ಲದೆ, ಮಾಜಿ ಸಚಿವರಾದ ಶ್ರಾವಣ್ ಕುಮಾರ್ ಮತ್ತು ಅಶೋಕ್ ಚೌಧರಿ ಸೇರಿ ಐದು ಪಕ್ಷಗಳ ಹಲವು ಸದಸ್ಯರನ್ನು ಸಿಎಂ ಸಾಮ್ರಾಟ್ ಚೌಧರಿ ತಮ್ಮ ಸಂಪುಟಕ್ಕೆ ಸೇರಿಸಿಕೊಂಡಿದ್ದಾರೆ.
ಕಳೆದ ತಿಂಗಳು ಜೆಡಿಯು ರಾಷ್ಟ್ರೀಯ ಅಧ್ಯಕ್ಷ ನಿತೀಶ್ ಕುಮಾರ್ ರಾಜ್ಯಸಭೆಗೆ ಆಯ್ಕೆಯಾದ ಬಳಿಕ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ, ಬಿಜೆಪಿ ನೇತೃತ್ವದ ಎನ್​ಡಿಎ ಸರ್ಕಾರ ರಚನೆಯಾಗಿದೆ. ಬಿಜೆಪಿಯ ಮೊದಲ ಮುಖ್ಯಮಂತ್ರಿಯಾಗಿ ಸಾಮ್ರಾಟ್ ಚೌಧರಿ ಅಧಿಕಾರ ವಹಿಸಿಕೊಂಡಿದ್ದಾರೆ.
ಬಿಹಾರದ ಎನ್​ಡಿಎ ಸರ್ಕಾರದಲ್ಲಿ ಒಟ್ಟು ಐದು ಪಕ್ಷಗಳಿದ್ದು, ಬಿಜೆಪಿ ಮತ್ತು ಜೆಡಿ(ಯು) ಹೊರತುಪಡಿಸಿ, ಕೇಂದ್ರ ಸಚಿವರಾದ ಚಿರಾಗ್ ಪಾಸ್ವಾನ್ ಮತ್ತು ಜಿತನ್ ರಾಮ್ ಮಾಂಝಿ ನೇತೃತ್ವದ ಎಲ್‌ಜೆಪಿಆರ್‌ವಿ ಮತ್ತು ಎಚ್‌ಎಎಂ ಹಾಗೂ ರಾಜ್ಯಸಭಾ ಸಂಸದ ಉಪೇಂದ್ರ ಕುಶ್ವಾಹ ಅವರ ಆರ್‌ಎಲ್‌ಎಂ ಸೇರಿವೆ. ಈ ಪಕ್ಷದ ಕೆಲವರಿಗೂ ಕೂಡ ಕ್ಯಾಬಿನೆಟ್​ನಲ್ಲಿ ಸ್ಥಾನ ಕಲ್ಪಿಸಲಾಗಿದೆ (ಏಜೆನ್ಸೀಸ್).