ಪಾಟ್ನಾ: ಬಿಹಾರ ರಾಜಕೀಯದಲ್ಲಿ ಸಿಎಂ ನಿತೀಶ್ ಕುಮಾರ್ ಅವರ ರಾಜೀನಾಮೆಯಿಂದ ಎರಡು ದಶಕಗಳ ಕಾಲ ನಡೆದ ಜೆಡಿಯು ಆಡಳಿತಕ್ಕೆ ತೆರೆ ಬಿದ್ದಿದ್ದು, ಮೊದಲ ಬಾರಿಗೆ ಇಂದಿನಿಂದ(ಏ.15) ಬಿಜೆಪಿ ದರ್ಬಾರ್ ಶುರುವಾಗಲಿದ್ದು, ಬಿಹಾರದ ನೂತನ ಮುಖ್ಯಮಂತ್ರಿಯಾಗಿ ಸಾಮ್ರಾಟ್ ಚೌಧರಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ಬೆಳಗ್ಗೆ 11 ಗಂಟೆಗೆ ಬಿಹಾರ ರಾಜ್ಯಪಾಲರ ಕಚೇರಿ ಲೋಕಭವನದಲ್ಲಿ ಪ್ರಮಾಣವಚನ ಸ್ವೀಕಾರ ಸಮಾರಂಭ ನಡೆಯಲಿದೆ. ಸಿಎಂ ಆಗಿ ಸಾಮ್ರಾಟ್ ಚೌಧರಿ ಪ್ರಮಾಣ ವಚನ ಸ್ವೀಕರಿಸಿದ್ರೆ, ಜೆಡಿಯುನ ವಿಜಯ್ ಚೌಧರಿ ಮತ್ತು ಬಿಜೇಂದ್ರ ಯಾದವ್ ಉಪಮುಖ್ಯಮಂತ್ರಿಗಳಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ರಾಜ್ಯಪಾಲ ಸೈಯದ್ ಅತಾ ಹಸ್ನೈನ್ ಪ್ರತಿಜ್ಞಾವಿಧಿ ಬೋಧಿಸಲಿದ್ದಾರೆ.
ಮಂಗಳವಾರ ಮಧ್ಯಾಹ್ನ ಮುಖ್ಯಮಂತ್ರಿ ಸ್ಥಾನಕ್ಕೆ ಜೆಡಿಯು ಮುಖ್ಯಸ್ಥ ನಿತೀಶ್ ಕುಮಾರ್ ರಾಜೀನಾಮೆ ನೀಡಿದ ಬಳಿಕ 57 ವರ್ಷದ ಉಪ ಮುಖ್ಯಮಂತ್ರಿ ಸಾಮ್ರಾಟ್ ಚೌಧರಿ ಅವರನ್ನು ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.
ಹೊಸ ಇತಿಹಾಸ ಸೃಷ್ಟಿ
ಸಾಮ್ರಾಟ್ ಆಯ್ಕೆಯ ಮೂಲಕ ಬಿಹಾರದಲ್ಲಿ ಹೊಸ ಇತಿಹಾಸ ಸೃಷ್ಟಿಯಾಗಿದ್ದು, ಬಿಹಾರದ ಅತ್ಯುನ್ನತ ಹುದ್ದೆಯನ್ನು ಅಲಂಕರಿಸಿದ ಬಿಜೆಪಿಯ ಮೊಟ್ಟಮೊದಲ ನಾಯಕ ಎಂಬ ಹೆಗ್ಗಳಿಕೆಗೆ ಅವರು ಪಾತ್ರರಾಗಿದ್ದಾರೆ. ಇಷ್ಟು ವರ್ಷಗಳ ಕಾಲ ಬಿಹಾರದಲ್ಲಿ ಸಮ್ಮಿಶ್ರ ಸರ್ಕಾರದ ಭಾಗವಾಗಿ ಪ್ರಮುಖ ಪಾತ್ರ ವಹಿಸಿದ್ದ ಬಿಜೆಪಿ, ಈಗ ಮೊದಲ ಬಾರಿಗೆ ಸ್ವತಂತ್ರವಾಗಿ ಮತ್ತು ತನ್ನದೇ ನಾಯಕತ್ವದಲ್ಲಿ ಸರ್ಕಾರವನ್ನು ಮುನ್ನಡೆಸಲು ಸಜ್ಜಾಗಿದೆ.
ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಉಪಮುಖ್ಯಮಂತ್ರಿ ವಿಜಯ್ ಕುಮಾರ್ ಸಿನ್ಹಾ, ಸಾಮ್ರಾಟ್ ಚೌಧರಿ ಹೆಸರನ್ನು ಪ್ರಸ್ತಾಪಿಸಿದರು. ಈ ಪ್ರಸ್ತಾವನೆಯನ್ನು ಹಿರಿಯ ಶಾಸಕರಾದ ರೇಣು ದೇವಿ, ಮಂಗಲ್ ಪಾಂಡೆ ಮತ್ತು ದಿಲೀಪ್ ಜೈಸ್ವಾಲ್ ಅನುಮೋದಿಸಿದರು. ಕೇಂದ್ರ ವೀಕ್ಷಕರಾಗಿ ಆಗಮಿಸಿದ್ದ ಹಿರಿಯ ನಾಯಕ ಶಿವರಾಜ್ ಸಿಂಗ್ ಚೌಹಾಣ್, ಚೌಧರಿ ಹೆಸರನ್ನು ಅಧಿಕೃತವಾಗಿ ಘೋಷಿಸಿದರು ಎನ್ನಲಾಗಿದೆ.
ನಿತೀಶ್ ಕುಮಾರ್ ರಾಜೀನಾಮೆ
ಬಿಹಾರದಲ್ಲಿ ದೀರ್ಘಕಾಲ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದ ನಿತೀಶ್ ಕುಮಾರ್ ಪಟನಾದ ಲೋಕ ಭವನದಲ್ಲಿ ರಾಜ್ಯಪಾಲ ಸೈಯದ್ ಅತಾ ಹಸ್ನೈನ್ ಅವರನ್ನು ಭೇಟಿಯಾಗಿ ತಮ್ಮ ರಾಜೀನಾಮೆಯನ್ನು ಸಲ್ಲಿಸಿದರು. ಈ ವೇಳೆ ಮಾತನಾಡಿದ ಅವರು, ನಾನು ಬಿಹಾರದ ಜನರಿಗಾಗಿ ಸಾಕಷ್ಟು ಕೆಲಸ ಮಾಡಿದ್ದೇನೆ. ಇಂದಿನ ಸಂಪುಟ ಸಭೆಯ ಬಳಿಕ ಮುಖ್ಯಮಂತ್ರಿ ಹುದ್ದೆಯನ್ನು ತೊರೆಯಲು ನಿರ್ಧರಿಸಿದೆ ಎಂದು ತಿಳಿಸಿದರು (ಏಜೆನ್ಸೀಸ್).