ವಿಧಾನಸಭೆ ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ
ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಕೆಲವೇ ತಿಂಗಳಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆಗೂ ಮುಂಚಿತವಾಗಿ ರಾಜಕೀಯ ವಾಗ್ವಾದಗಳು ಆರಂಭವಾಗಿದ್ದು, ಸಿಎಂ ಮಮತಾ ಬ್ಯಾನರ್ಜಿ ಮತ್ತು ಇಡಿ ನಡುವಿನ ಜಟಾಪಟಿ ನಡುವೆ ತಮ್ಮ ಮೇಲೆ ಟಿಎಂಸಿ ಕಾರ್ಯಕರ್ತರು ಹಲ್ಲೆ ಮಾಡಿದ್ದಾರೆಂದು ಬಿಜೆಪಿ ನಾಯಕ ಮತ್ತು ವಿಧಾನಸಭೆ ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ ಆರೋಪ ಮಾಡಿದ್ದಾರೆ.
ಈ ಕುರಿತು ಶನಿವಾರ(ಜ. 10) ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಅವರು, ಇಂದು ರಾತ್ರಿ ಸುಮಾರು 8:20ರ ಸುಮಾರಿಗೆ ನಾನು ಪುರುಲಿಯಾದಿಂದ ಹಿಂತಿರುಗುತ್ತಿದ್ದಾಗ, ಪಶ್ಚಿಮ ಮೇದಿನಿಪುರ ಜಿಲ್ಲೆಯ ಚಂದ್ರಕೋಣ ರಸ್ತೆಯಲ್ಲಿ ಟಿಎಂಸಿ ಗೂಂಡಾಗಳು ನನ್ನ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದರು ಎಂದು ಆರೋಪಿಸಿದ್ದಾರೆ.
ಘಟನೆಯ ವಿಡಿಯೋ ಹಂಚಿಕೊಂಡಿರುವ ಸುವೇಂದು ಅಧಿಕಾರಿ, ಮೂಕ ಪ್ರೇಕ್ಷಕರಾಗಿದ್ದ ಪೊಲೀಸ್ ಸಿಬ್ಬಂದಿಗಳ ಸಮ್ಮುಖದಲ್ಲಿ ಈ ದಾಳಿ ನಡೆದಿದೆ. ದು ರಾಜ್ಯದ ಪ್ರತಿಯೊಂದು ವಿರೋಧದ ಧ್ವನಿಯ ಮೇಲಿನ ದಾಳಿಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ
ತೃಣಮೂಲ ಕಾಂಗ್ರೆಸ್ ಕಾರ್ಯಕರ್ತರು ಪಶ್ಚಿಮ ಬಂಗಾಳ ವಿಧಾನಸಭೆ ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ ಮೇಲೆ ಹಲ್ಲೆ ನಡೆಸಿದ್ದಾರೆ ಎನ್ನಲಾದ ಘಟನೆಯನ್ನು ಖಂಡಿಸಿ ಇಂದು(ಜ. 11) ರಾಜ್ಯಾದ್ಯಂತ ವಿವಿಧ ಕಡೆ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.
ಕಾರಿಗೆ ಬೆಂಕಿ ಹಚ್ಚಿ ಬಿಜೆಪಿ ನಾಯಕನನ್ನು ಕೊಲ್ಲಲು ಸಂಚು ರೂಪಿಸಲಾಗಿತ್ತು ಎಂದು ಆರೋಪಿಸಿ, ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಮೇದಿನಿಪುರ ನಗರ ಮತ್ತು ಬಂಕುರಾದ ಸೋನಮುಖಿಯಲ್ಲಿ ಟೈರ್ಗೆ ಬೆಂಕಿ ಹಚ್ಚಿ ಆಕ್ರೋಶವ್ಯಕ್ತಪಡಿಸಿದರು. ಘಟನೆಯಲ್ಲಿ ಭಾಗಿಯಾದ ಆರೋಪಿಗಳನ್ನು ಬಂಧಿಸುವಂತೆ ಒತ್ತಾಯಿಸಿದ್ದಾರೆ.
ಇನ್ನೂ ಘಟನೆ ಸಂಬಂಧ ಪ್ರತಿಕ್ರಿಯೆ ನೀಡಿರುವ ಪಶ್ಚಿಮ ಬಂಗಾಳ ಪೊಲೀಸರು, ಘಟನೆ ಸಂಬಂಧ ತನಿಖೆ ನಡೆಯುತ್ತಿದೆ. ವಿಡಿಯೋಗಳನ್ನು ಪರಿಶೀಲಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ (ಏಜೆನ್ಸೀಸ್).