Ramalinga Reddy ಚಿತ್ರ ಎಕ್ಸ್​ 
ದೇಶ

ಆತ್ಮಸಾಕ್ಷಿಗೆ ವಿರುದ್ಧವಾಗಿ ಕೆಲಸ ಮಾಡಲ್ಲ...ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ರಾಮಲಿಂಗಾ ರೆಡ್ಡಿ Ramalinga Reddy

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸುವಂತಹ ಮಹತ್ವದ ವಿದ್ಯಮಾನವೊಂದು ನಡೆದಿದ್ದು, ಖಾತೆ ಹಂಚಿಕೆಯಾದ ಬೆನ್ನಲ್ಲೇ ನೂತನ ಸಚಿವ ರಾಮಲಿಂಗಾ ರೆಡ್ಡಿ ಅವರು ತಮ್ಮ ಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವ ನಿರ್ಧಾರ ಪ್ರಕಟಿಸಿದ್ದಾರೆ.

ರಾಜೀನಾಮೆ ಪತ್ರದಲ್ಲಿ, ನನ್ನ ಆತ್ಮಸಾಕ್ಷಿಗೆ ವಿರುದ್ಧವಾಗಿ ಕಾರ್ಯನಿರ್ವಹಿಸಲು ಸಾಧ್ಯವಿಲ್ಲ. ಆ ಕಾರಣದಿಂದಲೇ ನಾನು ರಾಜೀನಾಮೆ ನಿರ್ಧಾರಕ್ಕೆ ಬಂದಿದ್ದೇನೆ ಎಂದು ಹೇಳುವ ಮೂಲಕ ತಮ್ಮ ಅಸಮಾಧಾನವನ್ನು ಬಹಿರಂಗಪಡಿಸಿದ್ದಾರೆ.
ಖಾತೆ ಹಂಚಿಕೆಯಲ್ಲಿ ಜಲಸಂಪನ್ಮೂಲ ಇಲಾಖೆ ಸಿಕ್ಕ ಬೆನ್ನಲ್ಲೇ ಈ ದಿಢೀರ್ ರಾಜೀನಾಮೆ ನಿರ್ಧಾರ ಪ್ರಕಟಿಸಿರುವ ರೆಡ್ಡಿ, ತಮಗೆ ಸಂಪುಟದಲ್ಲಿ ಸ್ಥಾನ ನೀಡಿದ್ದಕ್ಕಾಗಿ ಮುಖ್ಯಮಂತ್ರಿಗಳಿಗೆ ಧನ್ಯವಾದ ಅರ್ಪಿಸಿದ್ದಾರೆ. ಪಕ್ಷಾಂತರದ ಕುರಿತಾದ ಎಲ್ಲಾ ವದಂತಿಗಳಿಗೆ ತೆರೆ ಎಳೆದಿರುವ ರಾಮಲಿಂಗಾ ರೆಡ್ಡಿ ಅವರು, ನಾನು ಯಾವುದೇ ಕಾರಣಕ್ಕೂ ಕಾಂಗ್ರೆಸ್ ಪಕ್ಷವನ್ನು ತೊರೆಯುವುದಿಲ್ಲ, ಶಾಸಕನಾಗಿ ಮತ್ತು ಪಕ್ಷದ ಸಾಮಾನ್ಯ ಕಾರ್ಯಕರ್ತನಾಗಿ ಮುಂದುವರಿಯುತ್ತೇನೆ ಎಂದಿದ್ದಾರೆ.

ತಿರುಗುಬಾಣವಾಯ್ತಾ ವರ್ಡ್​ ಪವರ್​ ಮಾತು

ರಾಮಲಿಂಗಾ ರೆಡ್ಡಿ ಅವರ ರಾಜೀನಾಮೆ ಬೆನ್ನಲ್ಲೇ ಆಕ್ರೋಶಗೊಂಡಿರುವ ಅವರ ಬೆಂಬಲಿಗರು, ಡಿ.ಕೆ. ಶಿವಕುಮಾರ್ ಅವರು ಈ ಹಿಂದೆ ಆಡಿದ್ದ ಮಾತುಗಳನ್ನೇ ಅಸ್ತ್ರವಾಗಿಸಿಕೊಂಡು ಅವರ ವಿರುದ್ಧವೇ ತಿರುಗಿಬಿದ್ದಿದ್ದಾರೆ. ಹಿಂದೊಮ್ಮೆ ಡಿ.ಕೆ. ಶಿವಕುಮಾರ್ ರಾಜಕೀಯ ಮತ್ತು ನಾಯಕತ್ವದ ನಡೆಗಳ ಬಗ್ಗೆ ಮಾತನಾಡುತ್ತಾ "Word Power is World Power" (ಕೊಟ್ಟ ಮಾತು ಜಗತ್ತನ್ನೇ ಗೆಲ್ಲಬಲ್ಲ ಶಕ್ತಿ ಹೊಂದಿದೆ) ಎಂದು ಹೇಳಿಕೆ ನೀಡಿದ್ದರು. ಇದೀಗ ಇದೇ ಹೇಳಿಕೆಯನ್ನು ರಾಮಲಿಂಗಾ ರೆಡ್ಡಿ ಬೆಂಬಲಿಗರು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಪ್ರಮಾಣದಲ್ಲಿ ಹರಿಬಿಡುತ್ತಿದ್ದಾರೆ. ಇದಷ್ಟೆ ಅಲ್ಲದೇ ಬಿಟಿಎಂ ಲೇಔಟ್​ ಕ್ಷೇತ್ರದ ವ್ಯಾಪ್ತಿಯಲ್ಲಿ ಹಾಕಲಾಗಿದ್ದ ಡಿ.ಕೆ. ಶಿವಕುಮಾರ್ ಹಾಗೂ ರಾಮಲಿಂಗಾ ರೆಡ್ಡಿ ಇಬ್ಬರೂ ಒಟ್ಟಿಗಿದ್ದ ಫ್ಲೆಕ್ಸ್​​ಗಳನ್ನು ಬೆಂಬಲಿಗರು ತೆರವುಗೊಳಿಸುತ್ತಿದ್ದಾರೆ.

ಇಂತಹ ಬೆಳವಣಿಗೆಗಳು ಸಹಜ: ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್

ರಾಮಲಿಂಗಾ ರೆಡ್ಡಿ ಅವರ ನಿರ್ಧಾರದ ಕುರಿತು ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಪ್ರತಿಕ್ರಿಯೆ ನೀಡಿದ್ದು, ರಾಮಲಿಂಗಾ ರೆಡ್ಡಿ ಅವರು ಕಾಂಗ್ರೆಸ್ ಪಕ್ಷದ ಅತ್ಯಂತ ಹಿರಿಯ ನಾಯಕರು, ಕಾಂಗ್ರೆಸ್‌ಗೆ ತೊಂದರೆ ಕೊಡುವಂತಹ ಕೆಲಸವನ್ನು ಎಂದಿಗೂ ಮಾಡುವುದಿಲ್ಲ, ರಾಜಕಾರಣದಲ್ಲಿ ಕೆಲವು ಸಂದರ್ಭಗಳಲ್ಲಿ ಇಂತಹ ಬೆಳವಣಿಗೆಗಳು ಸಹಜವಾಗಿ ನಡೆಯುತ್ತಿರುತ್ತವೆ. ನಾವು ಅವರ ಜೊತೆ ವೈಯಕ್ತಿಕವಾಗಿ ಚರ್ಚೆ ನಡೆಸಿ ಎಲ್ಲವನ್ನೂ ಸರಿಪಡಿಸುತ್ತೇವೆ ಎಂದು ಹೇಳಿದ್ದಾರೆ.

ಮುಖ್ಯಮಂತ್ರಿಗಳ ಕಚೇರಿ ತಲುಪಿದ ರಾಜೀನಾಮೆ ಪತ್ರ

ರಾಮಲಿಂಗಾ ರೆಡ್ಡಿ ಅವರ ರಾಜೀನಾಮೆ ಪತ್ರ ಅಧಿಕೃತವಾಗಿ ಮುಖ್ಯಮಂತ್ರಿಗಳ ಕಚೇರಿಯನ್ನು ತಲುಪಿದ್ದು, ರಾಮಲಿಂಗಾ ರೆಡ್ಡಿ ಅವರ ಪರವಾಗಿ ಅವರ ಆಪ್ತ ಮಾವಳ್ಳಿ ಸತ್ಯ ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿಯಾದ ತುಷಾರ್ ಗಿರಿನಾಥ್ ಅವರ ಕಚೇರಿಗೆ ಖುದ್ದಾಗಿ ಬಂದು ರಾಜೀನಾಮೆ ಪತ್ರವನ್ನು ಹಸ್ತಾಂತರಿಸಿದ್ದಾರೆ. ತುಷಾರ್ ಗಿರಿನಾಥ್ ಅವರು ಸಚಿವರ ರಾಜೀನಾಮೆ ಪತ್ರವನ್ನು ಸ್ವೀಕರಿಸಿದ್ದು, ನಿಯಮಾವಳಿಗಳ ಪ್ರಕಾರ ಪತ್ರ ತಂದಿದ್ದ ಆಪ್ತ ಮಾವಳ್ಳಿ ಸತ್ಯ ಅವರಿಗೆ ಸಿಎಂ ಕಚೇರಿಯಿಂದ ಅಧಿಕೃತ ಸ್ವೀಕೃತಿ ಪತ್ರದ (ಹಿಂಬರಹ) ಪ್ರತಿಯನ್ನು ನೀಡಿದ್ದಾರೆ.