Abhijeet Dipke (ಚಿತ್ರ X) 
ದೇಶ

ದೆಹಲಿಯಲ್ಲಿ ಭುಗಿಲೆದ್ದ ಸಂಸದ್ ಚಲೋ ಕಾವು: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಪೊಲೀಸ್ ವಶಕ್ಕೆ! Abhijeet Dipke

ನವದೆಹಲಿ: ಸಿಜೆಪಿ ಪಕ್ಷವು ಆಯೋಜಿಸಿದ್ದ ಬೃಹತ್ ಸಂಸದ್ ಚಲೋ ಪ್ರತಿಭಟನಾ ಮೆರವಣಿಗೆಯ ವೇಳೆ ರಾಜಧಾನಿ ದೆಹಲಿಯಲ್ಲಿ ತೀವ್ರ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ. ಪ್ರತಿಭಟನೆಯ ನೇತೃತ್ವ ವಹಿಸಿದ್ದ ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ (Abhijeet Dipke) ಅವರನ್ನು ದೆಹಲಿ ಪೊಲೀಸರು ಸೋಮವಾರ (ಜು 20) ಬಂಧಿಸಿದ್ದಾರೆ ಎಂದು ಪಕ್ಷದ ಅಧಿಕೃತ ವಕ್ತಾರ ಸೌರವ್ ದಾಸ್ ತಿಳಿಸಿದ್ದಾರೆ.
ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ದೆಹಲಿ ಪೊಲೀಸರು ಮನಬಂದಂತೆ ಹಲ್ಲೆ ನಡೆಸುತ್ತಿದ್ದಾರೆ. ಆದಾಗ್ಯೂ, ರಸ್ತೆಗಿಳಿದು ಹೋರಾಡುತ್ತಿರುವ ವಿದ್ಯಾರ್ಥಿಗಳ ಪರವಾಗಿ ಧ್ವನಿಯೆತ್ತಲು ಮತ್ತು ಬೆಂಬಲವಾಗಿ ನಿಲ್ಲುವಂತೆ ಸೌರವ್ ದಾಸ್ ಸಂಸದರಿಗೆ ಮನವಿ ಮಾಡಿದ್ದಾರೆ.

ಪರೀಕ್ಷಾ ವ್ಯವಸ್ಥೆಯಲ್ಲಿ ಸಮಗ್ರ ಸುಧಾರಣೆ ತರಬೇಕೆಂದು ಆಗ್ರಹಿಸಿ ಸಿಜೆಪಿ ಸಂಸ್ಥೆಯು ಸಂಸದ್ ಚಲೋ ಮೆರವಣಿಗೆಯನ್ನು ಆಯೋಜಿಸಿತ್ತು. ಸಂಸತ್ತಿನ ಮುಂಗಾರು ಅಧಿವೇಶನದ ಆರಂಭದ ದಿನದಂದೇ ಸಾವಿರಾರು ಬೆಂಬಲಿಗರು ಮತ್ತು ವಿದ್ಯಾರ್ಥಿಗಳು ಜಂತರ್ ಮಂತರ್‌ನಲ್ಲಿ ಜಮಾಯಿಸಿ, ಅಲ್ಲಿಂದ ಸಂಸತ್ ಭವನದತ್ತ ತೆರಳಲು ಯತ್ನಿಸಿದರು.
ಸಂಸತ್ತಿನ ಸುತ್ತಮುತ್ತಲೂ ಹೆಚ್ಚಿನ ಭದ್ರತೆಗಾಗಿ ಹಾಕಲಾಗಿದ್ದ ಬ್ಯಾರಿಕೇಡ್​ಗಳನ್ನು ದಾಟಲು ಪ್ರತಿಭಟನಾಕಾರರು ಯತ್ನಿಸಿದಾಗ, ಅವರನ್ನು ತಡೆಯಲು ಭದ್ರತಾ ಪಡೆಗಳು ಅಶ್ರುವಾಯು ಹಾಗೂ ಲಾಠಿ ಚಾರ್ಜ್​ ನಡೆಸಲಾಯಿತು. ಆದಾಗ್ಯೂ, ಭಾರಿ ಸಂಖ್ಯೆಯಲ್ಲಿ ಜನಸ್ತೋಮ ನೆರೆದಿದ್ದರಿಂದ ಮುಂಜಾಗ್ರತಾ ಕ್ರಮವಾಗಿ ಸಂಸತ್ ಭವನದ ಕೆಲವು ಮುಖ್ಯ ದ್ವಾರಗಳನ್ನು ತಾತ್ಕಾಲಿಕವಾಗಿ ಮುಚ್ಚಲಾಗಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಉಪವಾಸ ಹಿಂಪಡೆದ ದೀಪ್ಕೆ!

ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ಸಿಜೆಪಿ (CJP) ಸಂಸ್ಥಾಪಕ ಅಭಿಜೀತ್ ದೀಪ್ಕೆ ತಮ್ಮ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹವನ್ನು ಹಿಂಪಡೆದಿದ್ದಾರೆ. ಸರ್ಕಾರದ ಕಡೆಯಿಂದ ಮಾತುಕತೆಯ ಭರವಸೆ ದೊರೆತ ಹಿನ್ನೆಲೆಯಲ್ಲಿ, ಸೋಮವಾರ ಪ್ರತಿಭಟನಾ ರ‍್ಯಾಲಿ ಆರಂಭವಾಗುತ್ತಿದ್ದಂತೆ ಅವರು ತಮ್ಮ ಉಪವಾಸ ಸತ್ಯಾಗ್ರಹವನ್ನು ಮೊಟಕುಗೊಳಿಸಿದರು.

ಸೋನಮ್ ವಾಂಗ್‌ಚುಕ್ ಆಸ್ಪತ್ರೆಗೆ ದಾಖಲು

ಪರೀಕ್ಷಾ ವ್ಯವಸ್ಥೆಯಲ್ಲಿನ ಅಕ್ರಮಗಳನ್ನು ಖಂಡಿಸಿ ಪ್ರಖ್ಯಾತ ಪರಿಸರವಾದಿ ಸೋನಮ್ ವಾಂಗ್‌ಚುಕ್ ಅವರು ಸತತ 20 ದಿನಗಳ ಕಾಲ ಉಪವಾಸ ಸತ್ಯಾಗ್ರಹ ನಡೆಸಿದ್ದರು. ಆದರೆ, ಅವರ ಆರೋಗ್ಯದಲ್ಲಿ ತೀವ್ರ ವ್ಯತ್ಯಾಸ ಕಂಡುಬಂದಿದ್ದರಿಂದ ಶನಿವಾರ ದೆಹಲಿ ಪೊಲೀಸರು ಅವರನ್ನು ಚಿಕಿತ್ಸೆಗಾಗಿ ಸಫ್ದರ್‌ಜಂಗ್ ಆಸ್ಪತ್ರೆಗೆ ದಾಖಲಿಸಿದ್ದರು. ಈ ಘಟನೆಯ ಬಳಿಕ ಅಭಿಜೀತ್ ದೀಪಿಕೆ ಅವರು ಅನಿರ್ದಿಷ್ಟಾವಧಿ ಉಪವಾಸ ಕೈಗೊಳ್ಳುವುದಾಗಿ ಘೋಷಿಸಿದ್ದರು.

ಜೆ.ಪಿ. ನಡ್ಡಾ ಜೊತೆ ಉನ್ನತ ಮಟ್ಟದ ಮಾತುಕತೆ

ರಾಷ್ಟ್ರ ರಾಜಧಾನಿಯಲ್ಲಿ ಸೋಮವಾರದಿಂದ ಸಂಸತ್ತಿನ ಮುಂಗಾರು ಅಧಿವೇಶನ ಪ್ರಾರಂಭವಾಗಿದ್ದು, ಇದೇ ವೇಳೆ ಪ್ರತಿಭಟನಾಕಾರರು ಸಂಸತ್ ಭವನಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದರು. ಈ ವೇಳೆ ಉದ್ವಿಗ್ನ ವಾತಾವರಣ ನಿರ್ಮಾಣವಾದ ಹಿನ್ನೆಲೆಯಲ್ಲಿ, ಪರಿಸ್ಥಿತಿ ತಿಳಿಗೊಳಿಸಲು ಕೇಂದ್ರ ಸರ್ಕಾರ ತಕ್ಷಣವೇ ಸ್ಪಂದಿಸಿದೆ. ಕೇಂದ್ರ ಸಚಿವ ಜೆ.ಪಿ. ನಡ್ಡಾ ಅವರು ಪ್ರತಿಭಟನಾಕಾರರ ಜೊತೆ ಮಾತುಕತೆಗೆ ಮುಂದಾಗಿದ್ದಾರೆ.

ಎಕ್ಸ್​ನಲ್ಲಿ ಮಾಹಿತಿ ಹಂಚಿಕೊಂಡ ಸೌರವ್ ದಾಸ್

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿ ಮಾಹಿತಿ ಹಂಚಿಕೊಂಡಿರುವ ಸಿಜೆಪಿ ವಕ್ತಾರ ಸೌರವ್ ದಾಸ್, ಸರ್ಕಾರವು ನಮ್ಮನ್ನು ಮಾತುಕತೆಗೆ ಆಹ್ವಾನಿಸಿದೆ. ಸೋಮವಾರ ಸಿಜೆಪಿ ನಾಯಕರ ನಿಯೋಗವು ಕೇಂದ್ರ ಸಚಿವ ಜೆ.ಪಿ. ನಡ್ಡಾ ಅವರನ್ನು ಭೇಟಿಯಾಗಲಿದೆ. ಆಶುತೋಷ್ ರಾಂಕಾ ಅವರ ನೇತೃತ್ವದಲ್ಲಿ ನಮ್ಮ ಬೇಡಿಕೆಗಳನ್ನು ಸಚಿವರಿಗೆ ಮನವರಿಕೆ ಮಾಡಿಕೊಡಲಿದ್ದು, ಈ ಬಾರಿ ನಮಗೆ ನ್ಯಾಯ ಹಾಗೂ ಜಯ ಸಿಗುವ ವಿಶ್ವಾಸವಿದೆ ಎಂದು ಬರೆದುಕೊಂಡಿದ್ದಾರೆ (ಏಜೆನ್ಸೀಸ್​​).