ನವದೆಹಲಿ: ಸಿಇಸಿ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆಗೂ ಮುನ್ನವೇ ದೆಹಲಿಯ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಭಿಜೀತ್ ದಿಪ್ಕೆ, ಸೌರವ್ ದಾಸ್ ಹಾಗೂ ಅಶುತೋಷ್ ರಂಕಾ ಅವರನ್ನು ಬಂಧಿಸಿದ್ದಾರೆ.
ಈ ಕುರಿತು ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಸಿಜೆಪಿ, ಸಿಜೆಪಿ ನಾಯಕರಾದ ಅಭಿಜಿತ್ ದಿಪ್ಕೆ, ಸೌರವ್ ದಾಸ್ ಹಾಗೂ ಅಶುತೋಷ್ ರಂಕಾ ಅವರಿದ್ದ ವಿಮಾನವು ನವದೆಹಲಿಯ ಇಂದಿರಾ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಳಿಯುತ್ತಿದ್ದಂತೆ ಭದ್ರತಾ ಪಡೆಗಳು ಅವರನ್ನು ವಶಕ್ಕೆ ಪಡೆದಿವೆ ಎಂದು ತಿಳಿಸಿದೆ.
ಎಕ್ಸ್ನಲ್ಲಿ ಹಂಚಿಕೊಂಡಿರುವ ವಿಡಿಯೋದಲ್ಲಿ ಪೊಲೀಸರು, ವಿಮಾನದ ಒಳಗೆ ಪ್ರವೇಶ ಮಾಡಿ ಮೂವರನ್ನು ವಶಕ್ಕೆ ಪಡೆದಿರುವುದು ಕಾಣುತ್ತದೆ. ಅದೇ ರೀತಿ ಖ್ಯಾತ ಯೂಟ್ಯೂಬರ್ ಧ್ರುವ್ ರಾಠಿ ಅವರನ್ನು ಗುರುಗ್ರಾಮದ ಸೆಕ್ಟರ್ 56 ರಲ್ಲಿರುವ ಅವರ ನಿವಾಸದಿಂದ ವಶಕ್ಕೆ ಪಡೆಯಲಾಗಿದೆ.
ಮೂಲಗಳ ಪ್ರಕಾರ, ಸುಮಾರು 50 ದೆಹಲಿ ಪೊಲೀಸರ ತಂಡ ಶನಿವಾರ ಬೆಳಿಗ್ಗೆ ಧ್ರುವ್ ಅವರ ಗುರುಗ್ರಾಮ್ ಮನೆಗೆ ಬಂದು ಅವರನ್ನು ವಶಕ್ಕೆ ಪಡೆದಿದೆ. ಜರ್ಮನಿಯಲ್ಲಿರುವ ಧ್ರುವ್ ಇತ್ತೀಚೆಗೆ ಸಿಜೆಪಿ ಪ್ರತಿಭಟನೆಯಲ್ಲಿ ಭಾಗವಹಿಸಲು ಭಾರತಕ್ಕೆ ಆಗಮಿಸಿದ್ದಾರೆ.
ಚುನಾವಣಾ ಪಟ್ಟಿಯಲ್ಲಿನ ಲೋಪದೋಷಗಳು ಹಾಗೂ ಇನ್ನಿತರ ವಿವಾದಗಳ ವಿಚಾರವಾಗಿ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಯನ್ನು ಒತ್ತಾಯಿಸಿ ಸಿಜೆಪಿ ಈ ಬೃಹತ್ ಪ್ರತಿಭಟನೆಗೆ ಕರೆ ನೀಡಿತ್ತು. ಪ್ರತಿಭಟನೆಗೆ ಅನುಮತಿ ನಿರಾಕರಿಸಿದ್ದ ದೆಹಲಿ ಪೊಲೀಸರು, ಭದ್ರತಾ ದೃಷ್ಟಿಯಿಂದ ರಾಷ್ಟ್ರ ರಾಜಧಾನಿಯಾದ್ಯಂತ ಹದ್ದಿನ ಕಣ್ಣಿಟ್ಟಿದ್ದಾರೆ.
ಜಂತರ್ ಮಂತರ್ ಪ್ರದೇಶದಲ್ಲಿ ಬಿಗಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ದೆಹಲಿಯಾದ್ಯಂತ ಪೊಲೀಸರು ಮತ್ತು ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳ (CAPF) 20,000ಕ್ಕೂ ಹೆಚ್ಚು ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಪ್ರತಿಭಟನಾಕಾರರು ನಗರ ಪ್ರವೇಶಿಸದಂತೆ ತಡೆಯಲು ದೆಹಲಿಯ ಎಲ್ಲಾ ಗಡಿ ಭಾಗಗಳಲ್ಲಿ ತೀವ್ರ ತಪಾಸಣೆ ಕೈಗೊಳ್ಳಲಾಗಿದ್ದು, ಹೊರಗಿನಿಂದ ಬರುವ ವಾಹನಗಳ ಸಂಚಾರವನ್ನು ಸಂಪೂರ್ಣವಾಗಿ ನಿರ್ಬಂಧಿಸಲಾಗಿದೆ (ಏಜೆನ್ಸೀಸ್).