ECI Affidavit | ಮಮತಾ ವಿರುದ್ಧ ಸುಪ್ರೀಂ ಕೋರ್ಟ್‌ಗೆ ಅಫಿಡವಿಟ್ ಸಲ್ಲಿಸಿದ ಆಯೋಗ
ದೆಹಲಿ: ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಪ್ರಕ್ರಿಯೆಯನ್ನು ದುರ್ಬಲಗೊಳಿಸಲು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ್ದಾರೆ ಎಂದು ಆರೋಪಿಸಿ ಚುನಾವಣಾ ಆಯೋಗ ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿದ ಅಫಿಡವಿಟ್‌ನಲ್ಲಿ ತಿಳಿಸಿದೆ.
ಸಿಎಂ ಬ್ಯಾನರ್ಜಿ ಭಯವನ್ನು ಹುಟ್ಟಿಸಲು ಪತ್ರಿಕಾಗೋಷ್ಠಿಗಳನ್ನು ನಡೆಸಿದ್ದಾರೆ, ಎಸ್‌ಐಆರ್ ಕುರಿತಾಗಿ ಜನರ ದಾರಿತಪ್ಪಿಸುತ್ತಿದ್ದಾರೆ, ಸಾರ್ವಜನಿಕವಾಗಿ ತಪ್ಪು ಮಾಹಿತಿಯನ್ನು ಹರಡುತ್ತಿದ್ದಾರೆ ಎಂದು ಆಯೋಗ ತನ್ನ ಅಫಿಡವಿಟ್‌ನಲ್ಲಿ ಆರೋಪಿಸಿದೆ. ಇದರಿಂದ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯದ ವಿಶ್ವಾಸಾರ್ಹತೆಗೆ ಹಾನಿಯುಂಟಾಗುವ ಸಾಧ್ಯತೆ ಇದೆ ಎಂದು ಕಳವಳ ವ್ಯಕ್ತಪಡಿಸಿದೆ.
ಬೇರೆ ಎಲ್ಲೂ ಆಗದಷ್ಟು ಅಡಚಣೆಗಳು, ಬೆದರಿಕೆಗಳು ಪಶ್ಚಿಮ ಬಂಗಾಳದ ಎಸ್‌ಐಆರ್ ಪ್ರಕ್ರಿಯೆಯ ವಿಷಯದಲ್ಲಿ ನಡೆಯುತ್ತಿದೆ. ಪರಿಷ್ಕರಣಾ ಪ್ರಕ್ರಿಯೆಯ ಬಗ್ಗೆ ತಪ್ಪು ಮಾಹಿತಿ ನೀಡುವ ಮೂಲಕ ಜನರನ್ನು ಪ್ರಚೋದಿಸಲಾಗುತ್ತಿದೆ, ಇದು ದ್ವೇಶದ ವಾತಾವರಣವನ್ನು ಸೃಷ್ಟಿಸುವ ಪ್ರಯತ್ನವಾಗಿದ್ದು, ರಾಜ್ಯದಲ್ಲಿರುವ ಆಯೋಗದ ಅಧಿಕಾರಿಗಳು ಬೆದರಿಕೆಗಳು ಮತ್ತು ಹಿಂಸಾಚಾರದ ಘಟನೆಗಳನ್ನು ಎದುರಿಸುತ್ತಿದ್ದಾರೆ ಎಂದು ಆಯೋಗ ಹೇಳಿಕೊಂಡಿದೆ.
ಸಿಎಂ ಮಮತಾ ಬ್ಯಾನರ್ಜಿ ಎಸ್‌ಐಆರ್ ಪ್ರಕ್ರಿಯೆಯನ್ನು ನಿರಂತರವಾಗಿ ವಿರೋಧಿಸುತ್ತಲೇ ಬಂದಿದ್ದಾರೆ, ಇತ್ತೀಚೆಗೆ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರಿಗೆ ಪತ್ರ ಬರೆದು, ಮತದಾರರ ದಾಖಲೆಗಳನ್ನು ಸರಿಪಡಿಸುವ ಬದಲು, ಮತದಾರರ ಪಟ್ಟಿಯಿಂದ ಮತದಾರರ ಹೆಸರುಗಳನ್ನು ತೆಗೆದುಹಾಕುವ ವ್ಯಾಯಾಮವಾಗಿ ಎಸ್‌ಐಆರ್ ಮಾರ್ಪಟ್ಟಿದೆ ಎಂದು ಆರೋಪಿಸಿದರು. ರಾಜ್ಯದಲ್ಲಿ ಈ ಪ್ರಕ್ರಿಯೆ ಪ್ರಾರಂಭವಾದಾಗಿನಿಂದ ಇದು ಆಯುಕ್ತರಿಗೆ ಬರೆದ ಮೂರನೇ ಪತ್ರವಾಗಿದೆ.
ಎಸ್‌ಐಆರ್ ಗಡುವನ್ನು ವಿಸ್ತರಿಸುವ ಸಾಧ್ಯತೆ
ಚುನಾವಣಾ ಆಯೋಗ ಫೆಬ್ರವರಿ 14 ರೊಳಗೆ ಅಂತಿಮ ಮತದಾರರ ಪಟ್ಟಿಯನ್ನು ಬಿಡುಗಡೆ ಮಾಡಲು ನಿರ್ಧರಿಸಿತ್ತು, ಆದರೆ, ಈ ಕಾಲಮಿತಿಯನ್ನು ಈಗ ವಿಸ್ತರಿಸಬಹುದು ಎಂಬ ಮಾತುಗಳು ಕೇಳಿ ಬರುತ್ತಿವೆ. ಸುಪ್ರೀಂ ಕೋರ್ಟ್ ಹೊರಡಿಸಿದ ಕೆಲ ಸೂಚನೆಗಳಿಂದಾಗಿ ನಿಗದಿತ ಸಮಯದಲ್ಲಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಕಷ್ಟವಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ ಎಂದು ವರದಿಯಾಗಿದೆ. ಸುಪ್ರೀಂ ಕೋರ್ಟ್‌ನ ಎಲ್ಲಾ ಸೂಚನೆಗಳನ್ನು ಈಗಿರುವ ಕಾಲಮಿತಿಯೊಳಗೆ ಅನುಷ್ಠಾನಗೊಳಿಸುವುದು ಸವಾಲಿನ ಕೆಲಸ. ಹೆಚ್ಚುವರಿ ಸಮಯ ಬೇಕಾಗಬಹುದು ಎಂದು ಅಧಿಕಾರಿ ತಿಳಿಸಿದ್ದಾರೆ(ಏಜೆನ್ಸೀಸ್).