ಪ್ರಧಾನಿ ಮೋದಿ ಮತ್ತು ಸಿಎಂ ವಿಜಯ್
ಚೆನ್ನೈ: ದೇಶಾದ್ಯಂತ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ 3 ರೂ. ಹೆಚ್ಚಳವನ್ನು ಖಂಡಿಸಿರುವ ತಮಿಳುನಾಡು ನೂತನ ಸಿಎಂ ಸಿ.ಜೋಸೆಫ್ ವಿಜಯ್(CM Vijay), ಇದೇ ಮೊದಲ ಬಾರಿ ಕೇಂದ್ರ ಸರ್ಕಾರವನ್ನು ಟೀಕಿಸಿದ್ದು, ಇಂಧನ ಬೆಲೆ ಏರಿಕೆ ಕ್ರಮ ಸ್ವೀಕರ್ಹವಲ್ಲ, ಕೇಂದ್ರ ವಿಳಂಬ ಮಾಡದೇ ತಕ್ಷಣ ಹಿಂಪಡೆಯುವಂತೆ ಒತ್ತಾಯಿಸಿದ್ದಾರೆ.
ಈ ಕುರಿತು ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿರುವ ಅವರು, ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಕುಸಿದಾಗ ತೈಲ ಕಂಪನಿಗಳು ಇಂಧನ ಬೆಲೆಯನ್ನು ಕಡಿಮೆ ಮಾಡುವುದಿಲ್ಲ, ಆದರೆ ಭಾರಿ ಲಾಭ ಗಳಿಸುವುದನ್ನು ಮುಂದುವರಿಸುತ್ತವೆ ಎಂದು ಉಲ್ಲೇಖಿಸಿ ಕಿಡಿಕಾರಿದ್ದಾರೆ.
ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಕುಸಿದಾಗ, ತೈಲ ಕಂಪನಿಗಳು ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಅದಕ್ಕೆ ತಕ್ಕಂತೆ ಕಡಿಮೆ ಮಾಡುವುದಿಲ್ಲ. ಬದಲಾಗಿ, ಲಾಭವನ್ನು ಮಾತ್ರ ತೆಗೆದುಕೊಳ್ಳುತ್ತಾರೆ. ಐದು ರಾಜ್ಯಗಳ ವಿಧಾನಸಭಾ ಚುನಾವಣೆಯ ನಂತರ ಪೆಟ್ರೋಲಿಯಂ ಉತ್ಪನ್ನಗಳ ಬೆಲೆಯಲ್ಲಿನ ಈ ಹೆಚ್ಚಳ ಸ್ವೀಕಾರಾರ್ಹವಲ್ಲ ಎಂದಿದ್ದಾರೆ.
ಈ ಏರಿಕೆಯು ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳ ಮೇಲೆ ಪರಿಣಾಮ ಬೀರುತ್ತದೆ. ವಿಶೇಷವಾಗಿ ದ್ವಿಚಕ್ರ ವಾಹನ ಬಳಕೆದಾರರ, ಅವರ ಮಾಸಿಕ ವೆಚ್ಚಗಳನ್ನು ಹೆಚ್ಚಿಸುವ ಮೂಲಕ ತೀವ್ರ ಪರಿಣಾಮ ಬೀರುತ್ತದೆ. ಮತ್ತು ವಾಹನ ಸಾಲವನ್ನು ಮರುಪಾವತಿಸುವ ಕ್ಯಾಬ್ ನಿರ್ವಾಹಕರು ಸಹ ತೀವ್ರವಾಗಿ ಪರಿಣಾಮ ಬೀರುತ್ತದೆ ಎಂದು ಹೇಳಿದ್ದಾರೆ.
ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳ(MSME) ಮೇಲಿನ ಪರಿಣಾಮದ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಅವರು, ಪೆಟ್ರೋಲಿಯಂ ಉತ್ಪನ್ನಗಳ ಬೆಲೆ ಏರಿಕೆಯಿಂದಾಗಿ ತಮ್ಮ ಉತ್ಪನ್ನಗಳ ಉತ್ಪಾದನಾ ವೆಚ್ಚದಲ್ಲಿ ಹೆಚ್ಚಳದಿಂದಾಗಿ MSMEಗಳು ಮಾರುಕಟ್ಟೆ ಮತ್ತು ರಫ್ತುಗಳಲ್ಲಿ ಮಂದಗತಿಯನ್ನು ಎದುರಿಸುತ್ತವೆ ಎಂದು ತಿಳಿಸಿದ್ದಾರೆ.
ಏತನ್ಮದ್ಯೆ, ಕೇಂದ್ರ ಸಚಿವ ಜಿ ಕಿಶನ್ ರೆಡ್ಡಿ ಇಂಧನ ಬೆಲೆ ಏರಿಕೆಯನ್ನು ಸಮರ್ಥಿಸಿಕೊಂಡಿದ್ದು, ಮಧ್ಯಪ್ರಾಚ್ಯ ಸಂಘರ್ಷ ಮತ್ತು ಪ್ರಮುಖ ಜಾಗತಿಕ ತೈಲ ಸಾಗಣೆ ಮಾರ್ಗವಾದ ಹಾರ್ಮುಜ್ ಜಲಸಂಧಿಯಲ್ಲಿನ ನಿರ್ಬಂಧಗಳ ಮಧ್ಯೆ ಕಚ್ಚಾ ತೈಲದ ಆಮದು ವೆಚ್ಚದಲ್ಲಿನ ಏರಿಕೆ ಇದಕ್ಕೆ ಕಾರಣ ಎಂದಿದ್ದಾರೆ (ಏಜೆನ್ಸೀಸ್).