17 ರಾಜ್ಯಗಳಲ್ಲಿ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ!  
ದೇಶ

SIR ವಿವಾದದ ನಡುವೆಯೇ ಚುನಾವಣಾ ಆಯೋಗದ ಮಹತ್ವದ ನಿರ್ಧಾರ: 17 ರಾಜ್ಯಗಳಲ್ಲಿ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ!

ನವದೆಹಲಿ: ಜನಪ್ರತಿನಿಧಿ ಕಾಯ್ದೆ 1950ರ ಸೆಕ್ಷನ್ 21ರ ಅಡಿಯಲ್ಲಿ 17 ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ 2027ರ ಜನವರಿ 1 ಅನ್ನು ಅರ್ಹತಾ ದಿನಾಂಕವನ್ನಾಗಿ ಇಟ್ಟುಕೊಂಡು ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ (SIR) ನಡೆಸುವಂತೆ ಚುನಾವಣಾ ಆಯೋಗವು ಗುರುವಾರ ಮಹತ್ವದ ನಿರ್ದೇಶನ ನೀಡಿದೆ.

ನವದೆಹಲಿ: ಜನಪ್ರತಿನಿಧಿ ಕಾಯ್ದೆ 1950ರ ಸೆಕ್ಷನ್ 21ರ ಅಡಿಯಲ್ಲಿ 17 ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ 2027ರ ಜನವರಿ 1 ಅನ್ನು ಅರ್ಹತಾ ದಿನಾಂಕವನ್ನಾಗಿ ಇಟ್ಟುಕೊಂಡು ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ (SIR) ನಡೆಸುವಂತೆ ಚುನಾವಣಾ ಆಯೋಗವು ಗುರುವಾರ ಮಹತ್ವದ ನಿರ್ದೇಶನ ನೀಡಿದೆ.

ಮುಖ್ಯವಾಗಿ ಅರ್ಹ ಮತದಾರರನ್ನು, ಅದರಲ್ಲೂ ವಿಶೇಷವಾಗಿ ಯುವ ಮತ್ತು ಮೊದಲ ಬಾರಿ ಮತ ಚಲಾಯಿಸುವವರನ್ನು ಪಟ್ಟಿಗೆ ಸೇರ್ಪಡೆಗೊಳಿಸುವುದು, ಹಾಲಿ ಇರುವ ತಪ್ಪುಗಳನ್ನು ತಿದ್ದುಪಡಿ ಮಾಡುವುದು ಹಾಗೂ ಮತದಾರರ ಪಟ್ಟಿಯ ನಿಖರತೆಯನ್ನು ಹೆಚ್ಚಿಸುವುದೇ ಈ ವಿಶೇಷ ಸಂಕ್ಷಿಪ್ತ ಪರಿಷ್ಕರಣೆಯ ಮುಖ್ಯ ಉದ್ದೇಶವಾಗಿದೆ ಎಂದು ಆಯೋಗ ಪ್ರಕಟಣೆಯಲ್ಲಿ ತಿಳಿಸಿದೆ.

ಚುನಾವಣಾ ಆಯೋಗ ನೀಡಿರುವ ಮಾಹಿತಿಯ ಪ್ರಕಾರ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ಅಸ್ಸಾಂ, ಬಿಹಾರ, ಛತ್ತೀಸ್‌ಗಢ, ಗೋವಾ, ಗುಜರಾತ್, ಕೇರಳ, ಲಕ್ಷದ್ವೀಪ, ಮಧ್ಯಪ್ರದೇಶ, ಮಣಿಪುರ, ಪುದುಚೇರಿ, ಪಂಜಾಬ್, ರಾಜಸ್ಥಾನ, ತಮಿಳುನಾಡು, ಉತ್ತರ ಪ್ರದೇಶ, ಉತ್ತರಾಖಂಡ ಹಾಗೂ ಪಶ್ಚಿಮ ಬಂಗಾಳ ರಾಜ್ಯಗಳಲ್ಲಿ ಈ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯವು ನಡೆಯಲಿದೆ. ಇದರ ಜೊತೆಗೆ, ಈಗಾಗಲೇ ಎಸ್‌ಐಆರ್ ನಡೆಯುತ್ತಿರುವ ಅಥವಾ ಇತ್ತೀಚೆಗಷ್ಟೇ ಮುಕ್ತಾಯಗೊಂಡಿರುವ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ಈ ಪರಿಷ್ಕರಣೆಯ ದಿನಗಳು ಮತ್ತು ವೇಳಾಪಟ್ಟಿಯನ್ನು ನಂತರ ಪ್ರಕಟಿಸಲಾಗುವುದು ಎಂದು ಆಯೋಗ ಸ್ಪಷ್ಟಪಡಿಸಿದೆ.

ಇದನ್ನೂ ಓದಿ:ಮಹಿಳಾ ಪೇದೆ ಜೊತೆ ಅಸಭ್ಯ ವರ್ತನೆ ಆರೋಪ: ರಾಹುಲ್ ಗಾಂಧಿ ನಡತೆಯನ್ನೇ ಪ್ರಶ್ನಿಸಿದ ಬಿಜೆಪಿ ನಾಯಕ! | Rahul Gandhi

ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ತೊಡಗಿಸಿಕೊಂಡಿರುವ ಮುಖ್ಯ ಚುನಾವಣಾಧಿಕಾರಿ (ಸಿಇಒ), ಜಿಲ್ಲಾ ಚುನಾವಣಾಧಿಕಾರಿ (ಡಿಇಒ), ಮತದಾರರ ನೋಂದಣಾಧಿಕಾರಿ (ಇಆರ್‌ಒ), ಸಹಾಯಕ ಮತದಾರರ ನೋಂದಣಾಧಿಕಾರಿ (ಎಇಆರ್‌ಒ), ಬಿಎಲ್‌ಒ ಮೇಲ್ವಿಚಾರಕರು ಮತ್ತು ಬೂತ್ ಮಟ್ಟದ ಅಧಿಕಾರಿಗಳು (ಬಿಎಲ್‌ಒ) ಸೇರಿದಂತೆ ಎಲ್ಲಾ ಅಧಿಕಾರಿಗಳಿಗೆ ಅಗತ್ಯ ಸಿಬ್ಬಂದಿ ಮತ್ತು ಸಂಪನ್ಮೂಲಗಳನ್ನು ಒದಗಿಸುವುದನ್ನು ಖಚಿತಪಡಿಸಿಕೊಳ್ಳುವಂತೆ ಚುನಾವಣಾ ಆಯೋಗವು ಎಲ್ಲಾ ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳಿಗೆ ನಿರ್ದೇಶನ ನೀಡಿದೆ.

ಯಾವುದೇ ಅರ್ಹ ನಾಗರಿಕರು ಮತದಾರರ ಪಟ್ಟಿಯಿಂದ ಹೊರಗುಳಿಯದಂತೆ ಮತ್ತು ಯಾವುದೇ ಅನರ್ಹ ವ್ಯಕ್ತಿ ಪಟ್ಟಿಗೆ ಸೇರ್ಪಡೆಯಾಗದಂತೆ ನೋಡಿಕೊಳ್ಳುವುದು ಆಯಾ ವಿಧಾನಸಭಾ ಕ್ಷೇತ್ರದ ಇಆರ್‌ಒಗಳ ಜವಾಬ್ದಾರಿಯಾಗಿದೆ ಎಂದು ಚುನಾವಣಾ ಆಯೋಗ ಸ್ಪಷ್ಟಪಡಿಸಿದೆ.

ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆಯನ್ನು (ಎಸ್‌ಐಆರ್) ಪ್ರಶ್ನಿಸಿ ರಾಹುಲ್ ಗಾಂಧಿ ಮತ್ತು ಇತರ ಒಂಬತ್ತು ಇಂಡಿಯಾ ಒಕ್ಕೂಟದ ನಾಯಕರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಸರ್ವೋಚ್ಚ ನ್ಯಾಯಾಲಯವು, ಭಾರತೀಯ ಚುನಾವಣಾ ಆಯೋಗ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್, ಚುನಾವಣಾ ಆಯುಕ್ತರಾದ ಸುಖ್‌ಬೀರ್ ಸಿಂಗ್ ಸಂಧು ಮತ್ತು ವಿವೇಕ್ ಜೋಶಿ ಅವರಿಗೆ ನೋಟಿಸ್ ಜಾರಿ ಮಾಡಿದ ಕೆಲವೇ ಗಂಟೆಗಳಲ್ಲಿ ಚುನಾವಣಾ ಆಯೋಗದಿಂದ ಈ ಅಧಿಸೂಚನೆ ಹೊರಬಿದ್ದಿದೆ.

ಇದರ ಜೊತೆಗೆ, ದೇಶಾದ್ಯಂತ ಮತದಾರರ ಪಟ್ಟಿಯ ಪರಿಷ್ಕರಣೆಯ (ಎಸ್‌ಐಆರ್) ವಿರುದ್ಧ ತೀವ್ರ ಪ್ರತಿಭಟನೆಗಳು ನಡೆಯುತ್ತಿರುವ ಸಮಯದಲ್ಲೇ ಚುನಾವಣಾ ಆಯೋಗದಿಂದ ಈ ಆದೇಶ ಬಂದಿದೆ. ಈ ಪ್ರಕ್ರಿಯೆಯ ಸಮಯದಲ್ಲಿ ಮತದಾರರ ಹೆಸರುಗಳನ್ನು ಕೈಬಿಡಲಾಗುತ್ತಿದೆ ಎಂದು ವಿರೋಧ ಪಕ್ಷಗಳು ತೀವ್ರ ಕಳವಳ ವ್ಯಕ್ತಪಡಿಸುತ್ತಿವೆ. ಎಸ್‌ಐಆರ್ ನಡೆಯುತ್ತಿದ್ದಾಗ ಅರ್ಜಿದಾರರು ಫಾರ್ಮ್ 6 ರ ಜೊತೆಗೆ ಸಲ್ಲಿಸಬೇಕಾಗಿದ್ದ ಹೆಚ್ಚುವರಿ ಸ್ವಯಂ ಘೋಷಣಾಪತ್ರವು ಪ್ರಮುಖ ವಿವಾದದ ಅಂಶವಾಗಿತ್ತು.

ಇದಲ್ಲದೆ, ವಿರೋಧ ಪಕ್ಷಗಳು, ಇಂಡಿಯಾ ಒಕ್ಕೂಟದ ಪಕ್ಷಗಳು ಮತ್ತು ಕಾಕ್ರೋಚ್ ಜನತಾ ಪಾರ್ಟಿ ರಾಷ್ಟ್ರ ರಾಜಧಾನಿಯಲ್ಲಿ ಬೃಹತ್ ಪ್ರತಿಭಟನೆಗಳನ್ನು ನಡೆಸುತ್ತಿದ್ದು, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಹುದ್ದೆಯಿಂದ ವಜಾಗೊಳಿಸುವಂತೆ ಒತ್ತಾಯಿಸುತ್ತಿವೆ.

ಆಯೋಗದ ನೋಟಿಸ್ ಪ್ರಕಾರ, ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ನಡೆಯಲಿರುವ 17 ರಾಜ್ಯಗಳಲ್ಲಿ ಉತ್ತರ ಪ್ರದೇಶ, ಉತ್ತರಾಖಂಡ, ಪಂಜಾಬ್, ಮಣಿಪುರ ಮತ್ತು ಗೋವಾ ಕೂಡ ಸೇರಿವೆ. 403 ಸದಸ್ಯ ಬಲದ ಉತ್ತರ ಪ್ರದೇಶ ವಿಧಾನಸಭೆಯ ಅವಧಿಯು ಮುಂದಿನ ವರ್ಷ ಮೇ 22 ಕ್ಕೆ ಮುಕ್ತಾಯಗೊಳ್ಳಲಿದ್ದು, 60 ಸದಸ್ಯರ ಮಣಿಪುರ, 40 ಸದಸ್ಯರ ಗೋವಾ, 117 ಸದಸ್ಯರ ಪಂಜಾಬ್ ಮತ್ತು 70 ಸದಸ್ಯರ ಉತ್ತರಾಖಂಡ ವಿಧಾನಸಭೆಗಳ ಅವಧಿಯು ಮುಂದಿನ ವರ್ಷ ಮಾರ್ಚ್ ತಿಂಗಳ ಬೇರೆ ಬೇರೆ ದಿನಾಂಕಗಳಲ್ಲಿ ಮುಕ್ತಾಯಗೊಳ್ಳಲಿದೆ(ಏಜೆನ್ಸೀಸ್​).