ತಿರುವನಂತಪುರಂ: ಕೇರಳದ ತ್ರಿಶೂರ್ ಪೂರಂ-2026 ಉತ್ಸವ ಸಿದ್ದತೆ ನಡುವೆಯೂ ಮಂಗಳವಾರ(ಏ. 21) ತಿರುವಂಬಾಡಿ ದೇವಸ್ಥಾನಕ್ಕೆ ಸಂಬಂಧಿಸಿದ ಪಟಾಕಿ ತಯಾರಿಕಾ ಘಟಕದಲ್ಲಿ ಭಾರಿ ಸ್ಫೋಟ(Explosion at firecracker Factory) ಸಂಭವಿಸಿದ್ದು, ಘಟನೆಯಲ್ಲಿ ಆರು ಕಾರ್ಮಿಕರು ಮೃತಪಟ್ಟಿದ್ದು, ಹಲವಾರು ಮಂದಿ ಗಾಯಗೊಂಡಿದ್ದಾರೆ.
ಮುಂಡತ್ತಿಕೋಡ್‌ನಲ್ಲಿ ಸಂಜೆ 4 ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದು, ಸ್ಫೋಟದ ಸಮಯದಲ್ಲಿ ಸುಮಾರು 40 ಕಾರ್ಮಿಕರು ಘಟಕದೊಳಗೆ ಕೆಲಸ ಮಾಡ್ತಿದ್ದರು. ಪಟಾಕಿಗಳಿಗೆ ಬಳಸುವ ಸುಮಾರು 2,000 ಕೆಜಿ ಸ್ಫೋಟಕ ವಸ್ತುಗಳನ್ನು ಸಂಗ್ರಹಿಸಿಲಾಗಿತ್ತು ಎನ್ನಲಾಗಿದೆ.
ಈ ಕುರಿತು ಮಾಹಿತಿ ನೀಡಿರುವ ಸ್ಥಳೀಯ ಅಧಿಕಾರಿಗಳು, ಪ್ರಸ್ತುತವಾಗಿ ಆರು ಮಂದಿ ಸಾವನ್ನಪ್ಪಿದ್ದಾರೆ. ಇನ್ನೂ ಕನಿಷ್ಠ 10 ಜನರನ್ನು ಮುಲಂಕುನ್ನತುಕಾವುವಿನ ತ್ರಿಶೂರ್ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರಲ್ಲಿ ಕೆಲವರ ಸ್ಥಿತಿ ಗಂಭೀರವಾಗಿದೆ ಎಂದು ಹೇಳಿದ್ದಾರೆ.
ಸ್ಥಳದಲ್ಲಿ ಮತ್ತಷ್ಟು ಸ್ಫೋಟಗಳ ಸಾಧ್ಯತೆ ಇರುವುದರಿಂದ ಪೊಲೀಸರು, ಅಗ್ನಿಶಾಮಕ ದಳ ಹಾಗೂ ರಕ್ಷಣಾ ಸಿಬ್ಬಂದಿ ಪ್ರದೇಶವನ್ನು ಸುತ್ತುವರೆದಿದ್ದು, ಶೋಧ ಕಾರ್ಯಾಚರಣೆಯನ್ನು ಮುಂದುವರೆಸಿದ್ದಾರೆ. ಸ್ಫೋಟಕ್ಕೆ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ. ಹೆಚ್ಚಿನ ತನಿಖೆ ನಡೆಯುತ್ತಿದೆ.
ಇನ್ನೂ ಘಟನೆ ಕುರಿತು ಕೇರಳ ಸಿಎಂ ಪಿಣರಾಯಿ ವಿಜಯನ್ ಸಂತಾಪ ಸೂಚಿಸಿದ್ದು, ಪಟಾಕಿ ಉತ್ಪಾದನಾ ಘಟಕದಲ್ಲಿ ಸಂಭವಿಸಿದ ಸ್ಫೋಟದಲ್ಲಿ ಗಾಯಗೊಂಡವರಿಗೆ ಸಮಗ್ರ ವೈದ್ಯಕೀಯ ಚಿಕಿತ್ಸೆ ದೊರೆಯುವಂತೆ ಮಾಡಲು ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ (ಏಜೆನ್ಸೀಸ್).