ಮುಂಬೈ: ಮಹಾರಾಷ್ಟ್ರದ ರಾಜಧಾನಿ ಮುಂಬೈನಲ್ಲಿ ಸೋಮವಾರ(ಜೂ. 08) ಬೆಳಿಗ್ಗೆ ಭೀಕರ ಅಪಘಾತ ಸಂಭವಿಸಿದ್ದು, ನಿಯಂತ್ರಣ ತಪ್ಪಿ ಸರ್ಕಾರಿ ಬಸ್ ಹಲವು ವಾಹಗಳಿಗೆ ಡಿಕ್ಕಿ ಹೊಡೆದು, ಸವಾರರ ಮೇಲೆ ಹರಿದ ಪರಿಣಾಮ ಒಬ್ಬರು ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.
ಮುಂಬೈ ನಗರದ ದಾದರ್ ಪ್ರದೇಶದ ಪ್ಲಾಜಾ ಸಿನಿಮಾ ಬಳಿ ಬೆಳಿಗ್ಗೆ 9.30ಕ್ಕೆ ಘಟನೆ ನಡೆದಿದೆ. ಅಪಘಾತ ನಡೆದ ಪ್ರದೇಶವು ಅತ್ಯಂತ ಜನನಿಬಿಡ ಸ್ಥಳಗಳಲ್ಲಿ ಒಂದಾಗಿದೆ. ಬೃಹನ್ಮುಂಬೈ ವಿದ್ಯುತ್ ಸರಬರಾಜು ಮತ್ತು ಸಾರಿಗೆ (ಬೆಸ್ಟ್) ಗೆ ಸೇರಿದ ಬಸ್ ವೇಗವಾಗಿ ಚಲಿಸುತ್ತಿದ್ದಾಗ ನಿಯಂತ್ರಣ ತಪ್ಪಿ ರಸ್ತೆಯಲ್ಲಿದ್ದ ವಾಹನಗಳಿಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.
ಎರಡು ಕಾರುಗಳು, ಒಂದು ಟ್ಯಾಕ್ಸಿ ಮತ್ತು ಎರಡು ಬೈಕ್‌ಗಳಿಗೆ ಬಸ್ ಡಿಕ್ಕಿ ಹೊಡೆದಿದೆ. ಗಾಯಗೊಂಡವರಲ್ಲಿ ಇಬ್ಬರು ಬೈಕ್ ಸವಾರರು ಮತ್ತು ಒಬ್ಬ ಕಂಡಕ್ಟರ್ ಸೇರಿದ್ದಾರೆ. ಘಟನೆ ಬಳಿಕ ಪೊಲೀಸರು ಸ್ಥಳಕ್ಕೆ ತಲುಪಿ ಗಾಯಾಳುಗಳನ್ನು ಹೊರತೆಗೆದು ಆಸ್ಪತ್ರೆಗೆ ದಾಖಲಿಸಿದ್ದಾರೆ.
ಇನ್ನೂ ಘಟನೆ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಅಪಘಾತಕ್ಕೆ ಕಾರಣವಾದ ಬಸ್ ಚಾಲಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ (ಏಜೆನ್ಸೀಸ್).