ಘಟನೆಯ ಸ್ಥಳ 
ದೇಶ

ಭೀಕರ ಅಪಘಾತ: ಟ್ರಕ್​​ಗೆ ಡಿಕ್ಕಿ ಹೊಡೆದ ಬಳಿಕ ಹೊತ್ತಿ ಉರಿದ ಬಸ್​; 8 ಮಂದಿ ಸಜೀವ ದಹನ, 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ | burnt alive

ಜೈಪುರ: ರಾಜಸ್ಥಾನದ ದೆಹಲಿ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಬುಧವಾರ(ಜು. 01) ಬೆಳಗಿನ ಜಾವ ಭೀಕರ ಅಪಘಾತ ಸಂಭವಿಸಿದ್ದು, ಟ್ರಕ್​​ಗೆ ಡಿಕ್ಕಿ ಹೊಡೆದ ಬಳಿಕ ಪ್ರಯಾಣಿಕರ ಬಸ್‌ಗೆ ಬೆಂಕಿ ಹೊತ್ತಿಕೊಂಡಿದ್ದು, 8 ಮಂದಿ ಸಜೀವದಹನವಾಗಿದ್ದು(burnt alive), 20ಕ್ಕೂ ಹೆಚ್ಚು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.
ದೌಸಾ ಜಿಲ್ಲೆಯಲ್ಲಿ ಬೆಳಗಿನ ಜಾವ 2:30ರ ಸುಮಾರಿಗೆ ಈ ಘಟನೆ ನಡೆದಿದೆ. ಋಷಿಕೇಶದಿಂದ ಮಧ್ಯಪ್ರದೇಶದ ಇಂದೋರ್‌ಗೆ ಅತಿ ವೇಗದಲ್ಲಿ ಪ್ರಯಾಣಿಸುತ್ತಿದ್ದಾಗ ಅಪಘಾತ ಸಂಭವಿಸಿದೆ. ಸುಮಾರು 37 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಬಸ್​ ಮೊದಲು ಟ್ರಕ್​ಗೆ ಡಿಕ್ಕಿ ಹೊಡೆದಿದೆ. ಬಳಿಕ ಎರಡೂ ವಾಹನಗಳು ಬೆಂಕಿಗೆ ಆಹುತಿಯಾಗಿವೆ.
ಘಟನೆಯ ಮಾಹಿತಿ ತಿಳಿದ ತಕ್ಷಣ ಪೊಲೀಸರು, ಅಗ್ನಿಶಾಮಕ ದಳ ಮತ್ತು ತುರ್ತು ಪ್ರತಿಕ್ರಿಯೆ ತಂಡಗಳು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದವು. ಒಟ್ಟು ಎಂಟು ಜನರು ಸಾವನ್ನಪ್ಪಿದ್ದಾರೆ, ಗಾಯಾಳುಗಳನ್ನು ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.
ರಕ್ಷಣಾ ಕಾರ್ಯಾಚರಣೆ ಮುಂದುವರೆದಿದ್ದು, ಆರು ಶವಗಳನ್ನು ಹೊರತೆಗೆದು ಜಿಲ್ಲಾ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಅಪಘಾತಕ್ಕೆ ನಿಖರವಾದ ಕಾರಣ ತಿಳಿದುಬಂದಿಲ್ಲವಾದರೂ, ಬಸ್ ಚಾಲಕ ನಿದ್ದೆ ಮಂಪರಿನಲ್ಲಿದ್ದಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ದೌಸಾ ಪೊಲೀಸ್ ವರಿಷ್ಠಾಧಿಕಾರಿ ಪಿಯೂಷ್ ದೀಕ್ಷಿತ್ ಅಪಘಾತ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ (ಏಜೆನ್ಸೀಸ್).