ಪಾಟ್ನಾ: ಆರ್ಥಿಕವಾಗಿ ಸಬಲರಾಗಿರುವ ಮತ್ತು ಆದಾಯ ತೆರಿಗೆ ಪಾವತಿಸುವ ಜನ 125 ಯೂನಿಟ್ ಉಚಿತ ವಿದ್ಯುತ್ ಸೌಲಭ್ಯವನ್ನು ಸ್ವಯಂಪ್ರೇರಣೆಯಿಂದ ತ್ಯಜಿಸುವ ಮೂಲಕ ರಾಜ್ಯದ ಅಭಿವೃದ್ಧಿಗೆ ಕೊಡುಗೆ ನೀಡಬೇಕೆಂದು ಭಾನುವಾರ(ನ. 02) ಬಿಹಾರ ಸಿಎಂ ಸಾಮ್ರಾಟ್ ಚೌಧರಿ ಮನವಿ ಮಾಡಿದ್ದಾರೆ.
ಪಾಟ್ನಾದಲ್ಲಿ ನಡೆಯುತ್ತಿರುವ ಪಾಟಲಿಪುತ್ರ ರಾಷ್ಟ್ರೀಯ ಯುವ ಸಂಸತ್ತು-2.0 ಕಾರ್ಯಕ್ರಮದಲ್ಲಿ ಮಾತನಾಡಿರುವ ಅವರು, ರಾಜ್ಯ ಸರ್ಕಾರವು ವಿದ್ಯುತ್ ಸಬ್ಸಿಡಿಗಾಗಿ ವಾರ್ಷಿಕ ಸುಮಾರು 23,000 ಕೋಟಿ ರೂಪಾಯಿಗಳನ್ನು ಖರ್ಚು ಮಾಡುತ್ತಿದ್ದು, ಪ್ರತಿ ಕುಟುಂಬಕ್ಕೆ 8,000 ದಿಂದ 10,000 ರೂಪಾಯಿಗಳಷ್ಟು ವೆಚ್ಚವಾಗುತ್ತಿದೆ ಎಂದು ತಿಳಿಸಿದ್ದಾರೆ.
ಸರ್ಕಾರವು ಎಲ್ಲಾ ವರ್ಗಗಳ ಗ್ರಾಹಕರಿಗೆ 125 ಯೂನಿಟ್ ಉಚಿತ ವಿದ್ಯುತ್ ನೀಡುತ್ತಿದೆ. ಆರ್ಥಿಕವಾಗಿ ಸುಸ್ಥಿತಿಯಲ್ಲಿರುವ ಮತ್ತು ಆದಾಯ ತೆರಿಗೆ ಪಾವತಿಸುವ ಜನರು, ಈ ಉಚಿತ ವಿದ್ಯುತ್ ಸೌಲಭ್ಯವನ್ನು ಸ್ವಯಂಪ್ರೇರಣೆಯಿಂದ ಬಿಟ್ಟುಕೊಟ್ಟು, ಬಿಹಾರದ ಅಭಿವೃದ್ಧಿಗೆ ಕೈಜೋಡಿಸಬೇಕು ಎಂದು ಕೋರಿದ್ದಾರೆ.
ಪ್ರಜಾಪ್ರಭುತ್ವವನ್ನು ಬಲಪಡಿಸುವಲ್ಲಿ, ದೇಶದ ನಾಗರಿಕತೆ ಮತ್ತು ಸಾಂಸ್ಕೃತಿಕ ಪರಂಪರೆಯನ್ನು ಸಂರಕ್ಷಿಸುವಲ್ಲಿ ಹಾಗೂ ಅಭಿವೃದ್ಧಿ ಹೊಂದಿದ ಭಾರತವನ್ನು ನಿರ್ಮಿಸುವಲ್ಲಿ ಯುವಜನರು ನಿರ್ಣಾಯಕ ಪಾತ್ರ ವಹಿಸಬೇಕಿದೆ. ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಮತ್ತು ಹೋರಾಟಗಳ ಫಲವಾಗಿ 1947ರಲ್ಲಿ ಭಾರತಕ್ಕೆ ಸ್ವಾತಂತ್ರ್ಯ ಲಭಿಸಿತು. ದೇಶವು ಸ್ವಾತಂತ್ರ್ಯದ 80 ವರ್ಷಗಳನ್ನು ಪೂರೈಸುವತ್ತ ಸಾಗುತ್ತಿರುವ ಈ ಸಂದರ್ಭದಲ್ಲಿ, ಪ್ರಜಾಪ್ರಭುತ್ವ ಮೌಲ್ಯಗಳನ್ನು ಬಲಪಡಿಸುವ ಬದ್ಧತೆಯನ್ನು ಪುನರುಚ್ಚರಿಸುವ ಅಗತ್ಯವಿದೆ ಎಂದು ಹೇಳಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು 2047ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡುವ ಗುರಿಯೊಂದಿಗೆ ಶ್ರಮಿಸುತ್ತಿದ್ದಾರೆ. ಹಾಗೆಯೇ, ಬಿಹಾರದ ಮಾಜಿ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ರಾಜ್ಯದ ಅಭಿವೃದ್ಧಿಗೆ ಮಹತ್ವದ ಕೊಡುಗೆ ನೀಡಿದ್ದಾರೆ. 1974ರ ಚಳುವಳಿಯನ್ನು ಸ್ಮರಿಸಿದ ಅವರು, ಅದರಲ್ಲಿ ಯುವಜನರು ಮಹತ್ವದ ಪಾತ್ರ ವಹಿಸಿದ್ದರು ಎಂದು ತಿಳಿಸಿದ್ದಾರೆ (ಏಜೆನ್ಸೀಸ್).