ರಾಹುಲ್ ಗಾಂಧಿ ಮತ್ತು ಜಾರ್ಖಂಡ್ ಸಿಎಂ ಹೇಮಂತ್ ಸೊರೆನ್  
ದೇಶ

ನೇಮಕಾತಿ ಪರೀಕ್ಷೆಗಳಲ್ಲಿ ಅಕ್ರಮ: ಪ್ರತಿಭಟನಾನಿರತ ವಿದ್ಯಾರ್ಥಿಗಳನ್ನು ಭೇಟಿ ಮಾಡುವಂತೆ ಸಿಎಂ ಸೊರೆನ್​​ಗೆ ಪತ್ರ ಬರೆದ ರಾಹುಲ್ ಗಾಂಧಿ | Rahul Gandhi

ನವದೆಹಲಿ: ರಾಜ್ಯದ ಉದ್ಯೋಗ ನೇಮಕಾತಿ ಪರೀಕ್ಷೆಗಳಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ವಿದ್ಯಾರ್ಥಿಗಳನ್ನು ಭೇಟಿಯಾಗುವಂತೆ ಕಾಂಗ್ರೆಸ್ ನಾಯಕ ಮತ್ತು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ(Rahul Gandhi) ಅವರು, ತಮ್ಮ ಮಿತ್ರ ಪಕ್ಷ ಮತ್ತು ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೇನ್ ಅವರಿಗೆ ಪತ್ರ ಬರೆದಿದ್ದಾರೆ.
ಜಾರ್ಖಂಡ್ ಸಾರ್ವಜನಿಕ ಸೇವಾ ಆಯೋಗದ (JPSC) ಸಿವಿಲ್ ಸೇವೆಗಳ ಪರೀಕ್ಷೆ, ಜಾರ್ಖಂಡ್ ಸಿಬ್ಬಂದಿ ಆಯ್ಕೆ ಆಯೋಗದ ಸಂಯೋಜಿತ ಪದವೀಧರ ಮಟ್ಟದ (JSSC-CGL) ಪರೀಕ್ಷೆ ಮತ್ತು ಇತರ ನೇಮಕಾತಿ ಪರೀಕ್ಷೆಗಳಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ಕುರಿತು ತನಿಖೆ ನಡೆಸುವಂತೆ ಆಗ್ರಹಿಸಿ, ರಾಂಚಿಯಲ್ಲಿ ಸಾವಿರಾರು ವಿದ್ಯಾರ್ಥಿಗಳು ಕಳೆದ 24 ದಿನಗಳಿಂದ ಧರಣಿ ನಡೆಸುತ್ತಿದ್ದಾರೆ.
ಆಗಸ್ಟ್ 14ರಂದು ಸಿಎಂ ಸೊರೆನ್​ಗೆ ರಾಹುಲ್ ಗಾಂಧಿ ಪತ್ರ ಬರೆದಿದ್ದು, ಭಾರತದ ಸಂವಿಧಾನದಲ್ಲಿ ಅಳವಡಿಸಲಾಗಿರುವ ಶಾಂತಿಯುತ ಪ್ರತಿಭಟನೆಯ ಹಕ್ಕು ನಮ್ಮ ಪ್ರಜಾಪ್ರಭುತ್ವದ ಪ್ರಮುಖ ಆಧಾರಸ್ತಂಭಗಳಲ್ಲಿ ಒಂದಾಗಿದೆ ಎಂದು ಕಾಂಗ್ರೆಸ್ ಪಕ್ಷವು ನಂಬುತ್ತದೆ. ಆದ್ದರಿಂದಲೇ, ಕಳೆದ ಕೆಲವು ತಿಂಗಳುಗಳಿಂದ ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ವ್ಯವಸ್ಥೆಯಲ್ಲಿನ ಅವ್ಯವಸ್ಥೆಗಳ ವಿರುದ್ಧ ಪ್ರತಿಭಟಿಸುತ್ತಿರುವ ವಿದ್ಯಾರ್ಥಿಗಳಿಗೆ ನಾವು ನಮ್ಮ ಸಂಪೂರ್ಣ ಬೆಂಬಲವನ್ನು ನೀಡಿದ್ದೇವೆ ಎಂದು ಹೇಳಿದ್ದಾರೆ.
ಜಾರ್ಖಂಡ್ ಸರ್ಕಾರವು ವಿದ್ಯಾರ್ಥಿಗಳೊಂದಿಗೆ ಮಾತುಕತೆ ಆರಂಭಿಸಿರುವುದನ್ನು ಶ್ಲಾಘಿಸಿರುವ ಅವರು, ವಿದ್ಯಾರ್ಥಿಗಳು ಮುಂದಿಟ್ಟಿರುವ ಹಲವು ಬೇಡಿಕೆಗಳ ಕುರಿತು ಒಮ್ಮತವಿದೆ ಎಂದು ನಾನು ಭಾವಿಸುತ್ತೇನೆ. ಆದಾಗ್ಯೂ, ಪ್ರತಿಭಟನೆಗಳು ಮುಂದುವರಿದಿವೆ ಮತ್ತು ಕೆಲವು ವಿದ್ಯಾರ್ಥಿಗಳು ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ.

ಪ್ರತಿಭಟನಾ ನಿರತ ವಿದ್ಯಾರ್ಥಿಗಳ ಪ್ರತಿನಿಧಿಗಳನ್ನು ನೀವು ಖುದ್ದಾಗಿ ಭೇಟಿಯಾಗಬೇಕೆಂದು ಸಲಹೆ ನೀಡಲು ನಾನು ಈ ಪತ್ರ ಬರೆಯುತ್ತಿದ್ದೇನೆ. ಈ ಕ್ರಮವು ವಿದ್ಯಾರ್ಥಿಗಳ ಉಳಿದಿರುವ ಸಮಸ್ಯೆಗಳನ್ನು ಬಗೆಹರಿಸುವ ಸರ್ಕಾರದ ಬದ್ಧತೆಯನ್ನು ಬಲಪಡಿಸಲು ಸಹಾಯ ಮಾಡುತ್ತದೆ. ಭಾರತದ ಯುವಜನರೇ ದೇಶದ ಭವಿಷ್ಯ. ಈ ಸಂಕಷ್ಟದ ಸಮಯದಲ್ಲಿ ನಾವು ಅವರಿಗೆ ನಮ್ಮ ಒಗ್ಗಟ್ಟು ಮತ್ತು ಬೆಂಬಲವನ್ನು ನೀಡಬೇಕಿದೆ ಎಂದು ತಿಳಿಸಿದ್ದಾರೆ (ಏಜೆನ್ಸೀಸ್).