ಕೋಲ್ಕತ್ತಾ: ಪಶ್ಚಿಮ ಬಂಗಾಳದ ಕೋಲ್ಕತ್ತಾದ ವಿಮಾನ ನಿಲ್ದಾಣದ ಸುತ್ತಮುತ್ತ ಇಂದು(ಜೂ. 19) ಗುಡುಗು ಸಹಿತ ಮಳೆಯಾಗುತ್ತಿದ್ದು, ಈ ವೇಳೆ ಅಗರ್ತಲಾಕ್ಕೆ ತೆರಳುತ್ತಿದ್ದ ಇಂಡಿಗೋ ವಿಮಾನಕ್ಕೆ(IndiGo flight) ಸಿಡಲು ಬಡಿದಿದೆ. ಯಾವುದೇ ಪ್ರಯಾಣಿಕರಿಗೆ ತೊಂದರೆಯಾಗಿಲ್ಲ, ಆದರೆ ನೆಲದ ಇಬ್ಬರು ಸಿಬ್ಬಂದಿಗಳು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.
ಈ ಕುರಿತು ಮಾಹಿತಿ ನೀಡಿರುವ ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ ಅಧಿಕಾರಿ, ಗುಡುಗು ಸಹಿತ ಮಳೆಯ ವಾತಾವರಣದ ನಡುವೆ ಈ ಘಟನೆ ಸಂಭವಿಸಿದೆ. ಮಾನ ನಿಲ್ದಾಣ ಕಾರ್ಯಾಚರಣೆ ನಿಯಂತ್ರಣ ಕೇಂದ್ರ (AOCC) ಹವಾಮಾನ ಎಚ್ಚರಿಕೆ ನೀಡಿತ್ತು. ಘಟನೆಯಲ್ಲಿ ಯಾವುದೇ ಪ್ರಯಾಣಿಕರಿಗೆ ಗಾಯಗಳಾಗಿಲ್ಲ ಎಂದು ತಿಳಿಸಿದ್ದಾರೆ.
ಇಂಡಿಗೋ ಫ್ಲೈಟ್ 6E6068(VT-IPW) ವಿಮಾನವು ಏರೋಬ್ರಿಡ್ಜ್ 56L ನಲ್ಲಿ ನಿಂತಿದ್ದಾಗ ಸಿಡಿಲು ಬಡಿದಿದೆ. ಮುನ್ನೆಚ್ಚರಿಕೆ ಕ್ರಮವಾಗಿ ವಿಮಾನಯಾನ ಸಂಸ್ಥೆಯು ಪ್ರಯಾಣಿಕರನ್ನು ಕೆಳಗಿಳಿಸಿತು, ನಂತರ ಮತ್ತೊಂದು ವಿಮಾನದಲ್ಲಿ ಅವರನ್ನು ಕಳುಹಿಸಿದೆ ಎಂದು ಹೇಳಿದ್ದಾರೆ.
ಘಟನೆಯಲ್ಲಿ ಇಬ್ಬರು ನೆಲದ ಸಿಬ್ಬಂದಿಗೆ ಗಾಯಗಳಾಗಿದ್ದು, ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರು ಆರೋಗ್ಯವಾಗಿದ್ದಾರೆ ಎಂದು ತಿಳಿದು ಬಂದಿದೆ. ಇನ್ನೂ ಕೋಲ್ಕತ್ತಾ ಮತ್ತು ಪಕ್ಕದ ಜಿಲ್ಲೆಗಳಲ್ಲಿ ಶುಕ್ರವಾರ ಬೆಳಿಗ್ಗೆಯಿಂದ ಗುಡುಗು ಸಹಿತ ಮಳೆಯಾಗುತ್ತಿದ್ದು, ಹಲವಾರು ಪ್ರದೇಶಗಳಲ್ಲಿ ನೀರು ನಿಂತು ಸಂಚಾರ ಅಸ್ತವ್ಯಸ್ತವಾಗಿದೆ ಎನ್ನಲಾಗಿದೆ (ಏಜೆನ್ಸೀಸ್).