ಲಖನೌ: ಉತ್ತರ ಪ್ರದೇಶದ ಜಲೌನ್‌ನಲ್ಲಿ ಕೌನ್ಸಿಲರೊಬ್ಬರ ಮನೆಯಲ್ಲಿ ಭಾನುವಾರ(ನ. 22) ಎಲ್‌ಪಿಜಿ ಸಿಲಿಂಡರ್ ಸ್ಪೋಟಗೊಂಡಿದ್ದು, ಘಟನೆಯಲ್ಲಿ 13 ಮಕ್ಕಳು ಸೇರಿದಂತೆ ಕನಿಷ್ಠ 23 ಜನ ಬೆಂಕಿಯಿಂದ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.
ಒರೈನ ಶಾಂತಿನಗರ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಸ್ಥಳೀಯ ಕೌನ್ಸಿಲರ್ ಮಾತಾ ಪ್ರಸಾದ್ ಅವರ ನಿವಾಸದಲ್ಲಿ ಸಂಜೆ 6 ಗಂಟೆ ಸುಮಾರಿಗೆ ಸ್ಫೋಟ ಸಂಭವಿಸಿದೆ. ತೀವ್ರ ಸುಟ್ಟಗಾಯಗಳಿಗೆ ಒಳಗಾದ 19 ಮಂದಿಯನ್ನು ವಿಶೇಷ ಚಿಕಿತ್ಸೆಗಾಗಿ ಝಾನ್ಸಿ ವೈದ್ಯಕೀಯ ಕಾಲೇಜಿಗೆ ರವಾನಿಸಲಾಗಿದೆ.
ಉಳಿದ ನಾಲ್ವರು ಒರೈ ಜಿಲ್ಲಾ ಆಸ್ಪತ್ರೆಯಲ್ಲಿ ವೈದ್ಯಕೀಯ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆಯ ಬಳಿಕ ಪೊಲೀಸರು ಮತ್ತು ಆಡಳಿತಾಧಿಕಾರಿಗಳು ಸ್ಥಳಕ್ಕೆ ಧಾವಿಸಿ, ರಕ್ಷಣಾ ಕಾರ್ಯಾಚರಣೆಯನ್ನು ಕೈಗೊಂಡಿದ್ದಾರೆ.
ಈ ಕುರಿತು ಮಾತನಾಡಿರುವ ಪೊಲೀಸ್ ವರಿಷ್ಠಾಧಿಕಾರಿ ಸುರೇಶ್ ಚಂದ್ರ ರಾವತ್, ಮಾತಾ ಪ್ರಸಾದ್ ಅವರ ಮನೆಯಲ್ಲಿದ್ದ ಎಲ್‌ಪಿಜಿ (LPG) ಸಿಲಿಂಡರ್‌ನಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದೆ. ಕುಟುಂಬದ ಸದಸ್ಯರು ಮತ್ತು ಅಕ್ಕಪಕ್ಕದ ನಿವಾಸಿಗಳು ಬೆಂಕಿಯನ್ನು ನಂದಿಸಲು ಪ್ರಯತ್ನಿಸುತ್ತಿದ್ದಾಗ, ಸಿಲಿಂಡರ್ ಸ್ಫೋಟಗೊಂಡಿದೆ. ಈ ಘಟನೆಯಲ್ಲಿ 23 ಮಂದಿ ಗಾಯಗೊಂಡಿದ್ದಾರೆ ಎಂದು ತಿಳಿಸಿದ್ದಾರೆ.
ಗಾಯಗೊಂಡವರಲ್ಲಿ 13 ಮಕ್ಕಳು ಕೂಡ ಸೇರಿದ್ದಾರೆ. ಮಾಹಿತಿ ತಿಳಿದ ಕೂಡಲೇ ಪೊಲೀಸರು ಮತ್ತು ಆಡಳಿತ ಮಂಡಳಿಯ ತಂಡಗಳು ಸ್ಥಳಕ್ಕೆ ಧಾವಿಸಿ, ಪರಿಹಾರ ಹಾಗೂ ರಕ್ಷಣಾ ಕಾರ್ಯಾಚರಣೆಗಳನ್ನು ಕೈಗೊಂಡರು. ಗಾಯಗೊಂಡವರೆಲ್ಲರನ್ನೂ ಚಿಕಿತ್ಸೆಗಾಗಿ ಸಮೀಪದ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಘಟನೆ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಹೇಳಿದ್ದಾರೆ (ಏಜೆನ್ಸೀಸ್).