Cauvery Water Issue 
ದೇಶ

ತಮಿಳುನಾಡಿಗೆ ದಿನವೂ 3,500 ಕ್ಯೂಸೆಕ್ ನೀರು ಹರಿಸಲು ನಿರ್ವಹಣಾ ಪ್ರಾಧಿಕಾರ ಆದೇಶ; CWRC ಶಿಫಾರಸನ್ನು ಎತ್ತಿಹಿಡಿದ CWMA | Cauvery Water Issue

ಬೆಂಗಳೂರು: ಕಾವೇರಿ ನೀರು ಹಂಚಿಕೆ ವಿಚಾರಕ್ಕೆ (Cauvery Water Issue) ಸಂಬಂಧಿಸಿದಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA) ಮಹತ್ವದ ಆದೇಶ ಹೊರಡಿಸಿದ್ದು, ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ನೀಡಿದ್ದ ಶಿಫಾರಸನ್ನೇ ಮುಂದುವರಿಸಲು ನಿರ್ಧರಿಸಿದೆ. ಈ ಆದೇಶದ ಪ್ರಕಾರ, ತಮಿಳುನಾಡಿಗೆ ಪ್ರತಿದಿನ 3,500 ಕ್ಯೂಸೆಕ್ ನೀರು ಹರಿಸುವಂತೆ ಪ್ರಾಧಿಕಾರವು ಸೂಚನೆ ನೀಡಿದೆ.
ಈ ನಡುವೆ, ಕಾವೇರಿ ಜಲ ವಿವಾದದ ಮುಂದಿನ ನಿರ್ಧಾರಗಳ ಕುರಿತು ಚರ್ಚಿಸಲು ಭಾನುವಾರ ಬೆಳಿಗ್ಗೆ 11 ಗಂಟೆಗೆ ಬೆಂಗಳೂರಿನ ಮುಖ್ಯಮಂತ್ರಿಗಳ ಅಧಿಕೃತ ನಿವಾಸ ಕೃಷ್ಣಾದಲ್ಲಿ ಮಹತ್ವದ ಸರ್ವಪಕ್ಷ ಸಭೆಯನ್ನು ಕರೆಯಲಾಗಿದೆ. ಈ ಸಭೆಗೆ ರಾಜ್ಯದ ಎಲ್ಲಾ ಮಾಜಿ ಮುಖ್ಯಮಂತ್ರಿಗಳು, ಶಾಸಕರು, ಸಂಸದರು ಹಾಗೂ ಪ್ರಮುಖ ಪಕ್ಷಗಳ ನಾಯಕರಿಗೆ ಆಹ್ವಾನ ನೀಡಲಾಗಿದ್ದು, ರಾಜ್ಯದ ಹಿತರಕ್ಷಣೆಯ ಹಿತದೃಷ್ಟಿಯಿಂದ ಕೈಗೊಳ್ಳಬೇಕಾದ ಮುಂದಿನ ಕ್ರಮಗಳ ಬಗ್ಗೆ ಗಂಭೀರ ಚರ್ಚೆ ನಡೆಯಲಿದೆ.
ಕಾವೇರಿ ವಿಚಾರದಲ್ಲಿ ರಾಜ್ಯದ ಹಿತಾಸಕ್ತಿ ಕಾಯಲು ಕೇಂದ್ರ ನಾಯಕರ ಹಾಗೂ ಬಿಜೆಪಿ ಸಂಸದರ ಬೆಂಬಲವನ್ನು ಕೋರಿರುವುದಾಗಿ ತಿಳಿಸಿದ ಸಿಎಂ ಡಿ ಕೆ ಶಿವಕುಮಾರ್, ಈಗಾಗಲೇ ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ, ವಿ. ಸೋಮಣ್ಣ ಹಾಗೂ ಸಂಸದರಾದ ಜಗದೀಶ್ ಶೆಟ್ಟರ್, ಬಸವರಾಜ ಬೊಮ್ಮಾಯಿ ಅವರೊಂದಿಗೆ ಮಾತುಕತೆ ನಡೆಸಿ ರಾಜ್ಯಕ್ಕೆ ಸಹಕಾರ ನೀಡುವಂತೆ ವಿನಂತಿಸಿರುವುದಾಗಿ ಹೇಳಿದ್ದಾರೆ.