ಮೇಘಾಲಯ ಹನಿಮೂನ್ ಕೊಲೆ ಪ್ರಕರಣ: ಆರೋಪಿ ಸೋನಮ್ ರಘುವಂಶಿಗೆ ಜಾಮೀನು ನೀಡಿದ ನ್ಯಾಯಾಲಯ! Meghalaya Honeymoon Case
- ಇಡೀ ದೇಶವನ್ನೇ ಬೆಚ್ಚಿಬೀಳಿಸಿದ ಮೇಘಾಲಯ ಹನಿಮೂನ್ ಕೊಲೆ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ
- ತಾಳಿ ಕಟ್ಟಿದ ಗಂಡನನ್ನೇ ಭೀಕರವಾಗಿ ಬಲಿಪಡೆದ ಪತ್ನಿ ಸೋನಮ್ ರಘುವಂಶಿಗೆ ಜಾಮೀನು ಕೊಟ್ಟ ಕೋರ್ಟ್
- ರಾಜಾ ರಘುವಂಶಿ ಕೊಲೆ ಪ್ರಕರಣದ ನಾಲ್ಕನೇ ವಿಚಾರಣೆ ವೇಳೆ ಸೋನಮ್ ರಘುವಂಶಿಗೆ ಜಾಮೀನು
- ಸೋನಮ್ಗೆ ಜಾಮೀನು ಸಿಕ್ಕಿದ್ದಕ್ಕೆ ಬೇಸರ ಹೊರಹಾಕಿದ ರಾಜಾ ರಘುವಂಶಿ ಕುಟುಂಬ ಸದಸ್ಯರು
Meghalaya Honeymoon Case : ಇಡೀ ದೇಶವನ್ನೇ ಬೆಚ್ಚಿಬೀಳಿಸಿದ ಮೇಘಾಲಯ ಹನಿಮೂನ್ ಕೊಲೆ ಪ್ರಕರಣದಲ್ಲಿ ಇದೀಗ ಮಹತ್ವದ ಬೆಳವಣಿಗೆ ನಡೆದಿದೆ. ತಾಳಿ ಕಟ್ಟಿದ ಗಂಡನನ್ನೇ ಭೀಕರವಾಗಿ ಬಲಿಪಡೆದ ಪತ್ನಿ ಸೋನಮ್ ರಘುವಂಶಿಗೆ ಮೇಘಾಲಯದ ಶಿಲ್ಲಾಂಗ್ ನ್ಯಾಯಾಲಯ ಜಾಮೀನು ನೀಡಿದೆ.
ಅಂದಹಾಗೆ, ಆರೋಪಿ ಸೋನಮ್ ಬಹಳ ದಿನಗಳಿಂದ ಶಿಲ್ಲಾಂಗ್ ಜೈಲಿನಲ್ಲಿದ್ದಾಳೆ. ಈ ಪ್ರಕರಣದಲ್ಲಿ ಸೋನಮ್ ಜೊತೆಗೆ 8 ಜನರನ್ನು ಶಿಲ್ಲಾಂಗ್ ಪೊಲೀಸರು ಬಂಧಿಸಿದ್ದರು. ಆದಾಗ್ಯೂ, ಈ ಪ್ರಕರಣದಲ್ಲಿ ಮೂವರು ಆರೋಪಿಗಳಿಗೆ ಈಗಾಗಲೇ ಜಾಮೀನು ನೀಡಲಾಗಿದೆ. ಇದೀಗ ಸೋನಮ್ಗೂ ಜಾಮೀನು ದೊರೆತಿದ್ದು, ಪ್ರಕರಣವು ಹೊಸ ತಿರುವು ಪಡೆದುಕೊಂಡಿದೆ.
ಪ್ರಕರಣದ ನಾಲ್ಕನೇ ವಿಚಾರಣೆ ವೇಳೆ ಸೋನಮ್ಗೆ ಜಾಮೀನು ಸಿಕ್ಕಿದೆ. ಈ ವಿಚಾರವನ್ನು ಕೊಲೆಯಾದ ರಾಜಾ ರಘುವಂಶಿ ಅವರ ಸಹೋದರ ವಿಪಿನ್ ರಘುವಂಶಿ ದೃಢಪಡಿಸಿದ್ದಾರೆ. ಮೂಲಗಳ ಪ್ರಕಾರ, ಸೋನಮ್ ಅವರ ಜಾಮೀನು ಅರ್ಜಿಗಳನ್ನು ನ್ಯಾಯಾಲಯವು ಈ ಹಿಂದೆ ಮೂರು ಬಾರಿ ತಿರಸ್ಕರಿಸಿತ್ತು. ಇದಕ್ಕೆ ವ್ಯತಿರಿಕ್ತವಾಗಿ, ಪ್ರಕರಣದ ಇತರ ಆರೋಪಿಗಳಾದ ಲೋಕೇಂದ್ರ ಸಿಂಗ್ ತೋಮರ್, ಬಲ್ಬೀರ್ ಅಹಿರ್ವಾರ್ ಮತ್ತು ಶಿಲೋಮ್ ಜೇಮ್ಸ್ ಅವರಿಗೆ ಈಗಾಗಲೇ ಜಾಮೀನು ನೀಡಲಾಗಿದೆ.
ಇದೀಗ ನ್ಯಾಯಾಲಯವು ಸೋನಮ್ ಅರ್ಜಿಯನ್ನು ಅಂಗೀಕರಿಸಿದ್ದು, ಮತ್ತೊಬ್ಬ ಆರೋಪಿ ಹಾಗೂ ಸೋನಮ್ ಬಾಯ್ಫ್ರೆಂಡ್ ರಾಜ್ ಕುಶ್ವಾಹ ನ್ಯಾಯಾಂಗ ಬಂಧನದಲ್ಲಿದ್ದಾನೆ. ಸೋನಮ್ಗೆ ಜಾಮೀನು ಸಿಕ್ಕಿದ್ದಕ್ಕೆ ರಾಜಾ ರಘುವಂಶಿ ಕುಟುಂಬ ಸದಸ್ಯರು ನಿರಾಶೆ ವ್ಯಕ್ತಪಡಿಸಿದ್ದಾರೆ. ನ್ಯಾಯಕ್ಕಾಗಿ ನಡೆಯುತ್ತಿದ್ದ ನಮ್ಮ ಹೋರಾಟದಲ್ಲಿ ಇದು ಹಿನ್ನಡೆ ಎಂದು ಬೇಸರ ಹೊರಹಾಕಿದ್ದಾರೆ.
ಪ್ರಕರಣದ ಹಿನ್ನೆಲೆ ಏನು?
ಮಧ್ಯಪ್ರದೇಶದ ಇಂದೋರ್ ಮೂಲದ ರಾಜಾ ರಘುವಂಶಿ ಮತ್ತು ಸೋನಮ್ 2025, ಮೇ 11 ರಂದು ವಿವಾಹವಾದರು. ಅದೇ ತಿಂಗಳು 20 ರಂದು ಅವರು ತಮ್ಮ ಹನಿಮೂನ್‌ಗಾಗಿ ಮೇಘಾಲಯಕ್ಕೆ ತೆರಳಿದರು. ಆರಂಭದಲ್ಲಿ, ಅವರು ಜಮ್ಮು ಮತ್ತು ಕಾಶ್ಮೀರಕ್ಕೆ ಹೋಗಲು ಯೋಜಿಸಿದ್ದರು. ಆದರೆ, ಪಹಲ್ಗಾಮ್ ಭಯೋತ್ಪಾದಕ ದಾಳಿ ನಡೆದಿದ್ದರಿಂದ ಮೇಘಾಲಯಕ್ಕೆ ತಮ್ಮ ಪ್ಲಾನ್ ಬದಲಾಯಿಸಿದರು. ನವದಂಪತಿ ಮೇ 20 ರಂದು ತಮ್ಮ ಹನಿಮೂನ್‌ಗೆ ಮೇಘಾಲಯಕ್ಕೆ ತೆರಳಿದರು. ಮೇ 23 ರಂದು ತಮ್ಮ ವಸತಿಗೃಹದಿಂದ ಸ್ಕೂಟಿಯಲ್ಲಿ ಹೊರಟು ಇದ್ದಕ್ಕಿದ್ದಂತೆ ನಾಪತ್ತೆಯಾದರು. ಸ್ಕೂಟರ್ ಒಂದು ಹಳ್ಳಿಯ ಹೊರವಲಯದಲ್ಲಿ ಪತ್ತೆಯಾಗಿತ್ತು. ಆದಾಗ್ಯೂ, ಅವರು ಕಣ್ಮರೆಯಾದ 11 ದಿನಗಳ ನಂತರ (ಜೂನ್ 2 ರಂದು), ಪೊಲೀಸರು ರಘುವಂಶಿ ಅವರ ಶವವನ್ನು ಸೊಹ್ರಾದಲ್ಲಿನ ಜಲಪಾತದ ಬಳಿಯ ಆಳವಾದ ಕಣಿವೆಯಲ್ಲಿ ಪತ್ತೆ ಮಾಡಿದರು. ಅವರ ದೇಹದ ಮೇಲೆ ಚಾಕುವಿನಿಂದಾದ ಗಾಯಗಳಿದ್ದ ಕಾರಣ, ಪೊಲೀಸರು ಕೊಲೆ ಎಂದು ಶಂಕಿಸಿದರು. ಸೋನಮ್ ಎಲ್ಲಿದ್ದಾರೆಂದು ಪತ್ತೆಯಾಗದ ಕಾರಣ ಎಲ್ಲರೂ ಭಯಭೀತರಾಗಿದ್ದರು. ಈ ಮಧ್ಯೆ, ವಿಶೇಷ ಪಡೆ ಆಕೆಗಾಗಿ ಕಾಡಿನಲ್ಲಿ ಹುಡುಕಾಟ ನಡೆಸಿತು. ಮತ್ತೊಂದೆಡೆ, ಪೊಲೀಸರು ಪ್ರಕರಣದ ತನಿಖೆಯ ವೇಗವನ್ನು ಹೆಚ್ಚಿಸಿದರು.
ಸೋನಮ್ ಮತ್ತು ಆಕೆಯ ಗೆಳೆಯ ರಾಜ್ ಕುಶ್ವಾಹ ಅವರ ಯೋಜನೆಯಂತೆಯೇ ಎಲ್ಲವೂ ನಡೆಯಿತು. ಆದರೆ, ಕೊಲೆಗೆ ಅವರು ಬಳಸಿದ್ದ ಹರಿತವಾದ ಆಯುಧ ಎಲ್ಲವನ್ನೂ ತಲೆಕೆಳಗು ಮಾಡಿತು. ರಘುವಂಶಿ ಕೊಲೆ ಪ್ರಕರಣದ ತನಿಖೆಯ ಸಮಯದಲ್ಲಿ, ಸೋನಮ್ ಜೀವಂತವಾಗಿದ್ದಾಳೆ ಎಂಬ ಅನುಮಾನ ಮೂಡಿತು. ಅಲ್ಲದೆ, ಆಕೆಯೇ ಕೊಲೆ ಮಾಡಿರಬಹುದು ಎಂಬ ಅನುಮಾನವನ್ನು ಹುಟ್ಟುಹಾಕಿತು. ಸಾಮಾನ್ಯವಾಗಿ, ಮೇಘಾಲಯದಲ್ಲಿ ಅಂತಹ ಆಯುಧವನ್ನು ಬಳಸಲಾಗುವುದಿಲ್ಲ. ಹೀಗಾಗಿ ಹೊರಗಿನವರು ಭಾಗಿಯಾಗಿರುವ ಬಗ್ಗೆ ಪೊಲೀಸರಿಗೆ ಅನುಮಾನ ಮೂಡಿತು. ಬಳಿಕ ಕರೆ ದಾಖಲೆಗಳನ್ನು ಪರಿಶೀಲಿಸಿದಾಗ ಸೋನಮ್, ರಾಜ್ ಕುಶ್ವಾಹ ಜತೆ ನಿಯಮಿತವಾಗಿ ಸಂಪರ್ಕದಲ್ಲಿರುವುದು ತಿಳಿದುಬಂತು. ಸೋನಮ್, ರಾಜಾ ರಘುವಂಶಿ ಅವರ ತಾಯಿಯೊಂದಿಗೆ ಮಾತನಾಡಿದ ಕೊನೆಯ ಮಾತುಗಳು ಸಹ ಪೊಲೀಸರಿಗೆ ಅನುಮಾನ ಉಂಟುಮಾಡಿದವು. ಅಲ್ಲದೆ, ಅವರಿಬ್ಬರೂ ಒಟ್ಟಿಗೆ ಇರುವ ಫೋಟೋಗಳ ಯಾವುದೇ ಸ್ಟೇಟಸ್‌ಗಳನ್ನು ಪೋಸ್ಟ್ ಮಾಡದ ಕಾರಣ ಅನುಮಾನಗಳು ಇನ್ನಷ್ಟು ಬಲಗೊಂಡವು. ಅಂದಹಾಗೆ, ಸೋನಮ್ ತನ್ನ ತಂದೆಯ ಕಂಪನಿಯಲ್ಲಿ ಕೆಲಸ ಮಾಡುವ ರಾಜ್ ಕುಶ್ವಾಹನನ್ನು ಪ್ರೀತಿಸುತ್ತಿದ್ದಳು. ಆದರೆ, ಆ ಬಗ್ಗೆ ಹಿರಿಯರಿಗೆ ಹೇಳುವ ಧೈರ್ಯ ಇರಲಿಲ್ಲ. ಆದ್ದರಿಂದ, ಅವಳು ರಾಜಾ ರಘುವಂಶಿಯನ್ನು ಮದುವೆಯಾದಳು. ಬಳಿಕ ತಮ್ಮ ಪ್ರೇಮಕ್ಕೆ ರಘುವಂಶಿ ಅಡ್ಡಿಯಾಗುತ್ತಾನೆಂದು ಭಾವಿಸಿ, ಆತನನ್ನು ಕೊಲ್ಲಲು ಸೋನಮ್ ಮತ್ತು ಕುಶ್ವಾಹ ಸಂಚು ರೂಪಿಸಿದರು. ಅದನ್ನು ಕಾರ್ಯಗತಗೊಳಿಸಲು, ಸುಪಾರಿ ಹಂತಕರನ್ನು ಏರ್ಪಡಿಸಿದರು. ಸೋನಮ್ ಮೇಘಾಲಯಕ್ಕೆ ಹನಿಮೂನ್ ಪ್ಲಾನ್ ಮಾಡಿದಳು. ಆದರೆ, ಕುಶ್ವಾಹ ಮೇಘಾಲಯಕ್ಕೆ ಹೋಗಲಿಲ್ಲ. ಬದಲಾಗಿ ಫೋನ್‌ನಲ್ಲಿ ಸೋನಮ್ ಜೊತೆ ಸಂಪರ್ಕದಲ್ಲಿದ್ದನು.
ಯೋಜನೆಯ ಪ್ರಕಾರ, ಸೋನಮ್, ರಾಜಾ ರಘುವಂಶಿಯನ್ನು ಚಿರಾಪುಂಜಿಯ ಸಂಚಾರವಿಲ್ಲದ ರಸ್ತೆಗೆ ಕರೆದೊಯ್ದಳು. ಅಲ್ಲಿ, ಸುಪಾರಿ ಹಂತಕರು ಆತನನ್ನು ಕೊಂದರು. ನಂತರ, ಸೋನಮ್ ಸೇರಿದಂತೆ ಮೂವರು ಆರೋಪಿಗಳು ಅಸ್ಸಾಂನ ಗುವಾಹಟಿಗೆ ಹೋಗಿ, ಅಲ್ಲಿಂದ ಬೇರೆ ಬೇರೆಯಾದರು. ಈ ನಡುವೆ ಸೋನಮ್, ಪೊಲೀಸರಿಗೆ ರಘುವಂಶಿಯನ್ನು ತಾನು ಕೊಂದಿಲ್ಲ, ಬದಲಿಗೆ ಯಾರೋ ಅವರನ್ನು ಅಪಹರಿಸಿದ್ದಾರೆ ಎಂದು ಹೇಳಿದಳು. ಆದರೆ, ತನಿಖೆಯಲ್ಲಿ ಆಕೆಯ ಕಳ್ಳಾಟ ಎಲ್ಲವು ಬಯಲಾಯಿತು. ಕೊನೆಗೂ ಸೋನಮ್ ಕೂಡ ತನ್ನ ತಪ್ಪನ್ನು ಒಪ್ಪಿಕೊಂಡಳು, (ಏಜೆನ್ಸೀಸ್).