ಚೆನ್ನೈ: ಮೇ 03ರಂದು ಕೇಂದ್ರ ಸರ್ಕಾರದ ಎನ್ಟಿಎ ನಡೆಸಿದ್ದ ನೀಟ್ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆಯಾಗಿತ್ತು ಎಂಬ ಅಂಶ ಬಯಲಿಗೆ ಬರ್ತಿದ್ದಂತೆ, ಪರೀಕ್ಷೆಯನ್ನೇ ರದ್ದು ಮಾಡಿರುವ ಕೇಂದ್ರ ಸರ್ಕಾರ ವಿರುದ್ಧ ತಮಿಳುನಾಡು ಮಾಜಿ ಸಿಎಂ ಎಂ.ಕೆ.ಸ್ಟಾಲಿನ್ ವಾಗ್ದಾಳಿ ನಡೆಸಿದ್ದು, ನೀಟ್ ವ್ಯವಸ್ಥೆಯೇ ಒಂದು ಹಗರಣ ಎಂದು ಕಿಡಿಕಾರಿದ್ದಾರೆ.
ಈ ಕುರಿತು ಎಕ್ಸ್ನಲ್ಲಿ ವಾಗ್ದಾಳಿ ನಡೆಸಿರುವ ಅವರು, ಎಂದಿನಂತೆ ಈ ವರ್ಷವೂ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಲಕ್ಷಾಂತರ ವಿದ್ಯಾರ್ಥಿಗಳು ತೊಂದರೆಗೊಳಗಾಗಿದ್ದಾರೆ. ನೀಟ್ ಪರೀಕ್ಷಾ ಪ್ರಕ್ರಿಯೆಯ ಪ್ರತಿಯೊಂದು ಹಂತದಲ್ಲೂ ವಂಚನೆ ನಡೆಯುತ್ತಿದೆ. ಮತ್ತು ನಿಜವಾದ ನೀಟ್ ಪರೀಕ್ಷಾ ಪ್ರಕ್ರಿಯೆಯೇ ಒಂದು ದೊಡ್ಡ ಹಗರಣ ಎಂದು ಆರೋಪಿಸಿದ್ದಾರೆ.
ನೀಟ್ ಪರೀಕ್ಷಾ ವ್ಯವಸ್ಥೆಯನ್ನು ರದ್ದುಗೊಳಿಸಬೇಕು ಎಂದಿರುವ ಸ್ಟಾಲಿನ್, ಪ್ರತಿ ವರ್ಷ ವಿದ್ಯಾರ್ಥಿಗಳ ಜೀವನದ ಜೊತೆ ಚೆಲ್ಲಾಟವಾಡುತ್ತಿರುವ ನೀಟ್ ಪರೀಕ್ಷಾ ವ್ಯವಸ್ಥೆಯನ್ನು ಸಂಪೂರ್ಣವಾಗಿ ರದ್ದುಗೊಳಿಸಬೇಕು. 12ನೇ ತರಗತಿಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಎಂಬಿಬಿಎಸ್ ಸೀಟುಗಳನ್ನು ಹಂಚಿಕೆ ಮಾಡುವ ಹಳೆಯ ವ್ಯವಸ್ಥೆಯನ್ನು ಮತ್ತೆ ಜಾರಿಗೆ ತರಬೇಕೆಂದು ಒತ್ತಾಯಿಸಿದ್ದಾರೆ.
ತಮಿಳುನಾಡಿನಲ್ಲಿ ರಚನೆಯಾಗಿರುವ ಹೊಸ ಸರ್ಕಾರವು, ನೀಟ್ ಪರೀಕ್ಷೆಯ ವಿರುದ್ಧ ತನ್ನ ದೃಢ ನಿಲುವನ್ನು ಸ್ಪಷ್ಟಪಡಿಸಬೇಕು. ಈ ಪರೀಕ್ಷಾ ವ್ಯವಸ್ಥೆಯಿಂದ ವಿನಾಯಿತಿ ಪಡೆಯಲು ಹಿಂದೆ ತಮ್ಮ ಸರ್ಕಾರ ಮಾಡಿದ ಕಾನೂನು ಪ್ರಯತ್ನಗಳನ್ನು ಹೊಸ ಸರ್ಕಾರ ಮುಂದುವರಿಸಬೇಕೆಂದು ಎಂದು ಆಗ್ರಹಿಸಿದ್ದಾರೆ.
ರಾಜಸ್ಥಾನದ ಸೀಕರ್ನಲ್ಲಿ ನಡೆದಿದೆ ಎನ್ನಲಾದ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ ದೇಶಾದ್ಯಂತ ದೊಡ್ಡ ಮಟ್ಟದಲ್ಲಿ ಸದ್ದು ಮಾಡಿದ್ದು, ಮೇ 03ರಂದು ನಡೆದಿದ್ದ ನೀಟ್ ಪರೀಕ್ಷೆಯನ್ನು ಎನ್ಟಿಎ ರದ್ದು ಮಾಡಿದೆ. ಪರೀಕ್ಷೆ ಬರೆದಿದ್ದ 22,05,035 ವಿದ್ಯಾರ್ಥಿಗಳಿಗೆ ಯಾವುದೇ ಅನ್ಯಾಯವಾಗದಂತೆ ಮರು ಪರೀಕ್ಷೆ ನಡೆಸಲು ಉದ್ದೇಶಿಸಿದೆ. ಜೊತೆಗೆ ಕೇಂದ್ರ ಸರ್ಕಾರವು ಈ ಘಟನೆಯನ್ನು ಸಿಬಿಐ ತನಿಖೆಗೆ ಆದೇಶ ನೀಡಿದೆ (ಏಜೆನ್ಸೀಸ್).