ನವದೆಹಲಿ: ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾಗಿ ಕಾರ್ಯಾಧ್ಯಕ್ಷ ನಿತಿನ್ ನಬಿನ್ ಅವಿರೋಧವಾಗಿ ಆಯ್ಕೆಯಾಗಿದ್ದು, ಇಂದು(ಜ. 20) ಪಕ್ಷದ 12ನೇ ರಾಷ್ಟ್ರೀಯ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ ಎಂದು ವರದಿಯಾಗಿದೆ.
ದೆಹಲಿಯ ಪಕ್ಷದ ಪ್ರಧಾನ ಕಚೇರಿಯಲ್ಲಿ ಚುನಾವಣಾಧಿಕಾರಿ ಕೆ. ಲಕ್ಷ್ಮಣ್ ಅವರಿಗೆ ನಿನ್ನೆ ನಾಮಪತ್ರ ಸಲ್ಲಿಸಿದ್ದ ನಿತಿನ್ ನಬಿನ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಪ್ರಧಾನಿ ಮೋದಿ, ಕೇಂದ್ರ ಗೃಹಸಚಿವ ಅಮಿತ್ ಶಾ, ರಾಜನಾಥ್ ಸಿಂಗ್, ಹಾಲಿ ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ, ನಿತಿನ್ ಗಡ್ಕರಿ, ಕಿರಣ್ ರಿಜಿಜು ಸೇರಿ ಹಲವು ನಾಯಕರು ಅವರ ಉಮೇದುವಾರಿಕೆಯನ್ನು ಬೆಂಬಲಿಸಿದ್ದರು.
ಕಳೆದ ಡಿಸೆಂಬರ್ ಆರಂಭದಲ್ಲಿ ಪಕ್ಷದ ಕಾರ್ಯಕಾರಿ ಅಧ್ಯಕ್ಷರಾಗಿ ನೇಮಕವಾಗಿದ್ದ 46 ವರ್ಷದ ನಿತಿನ್ ನಬಿನ್, ಇಂದು ದೆಹಲಿಯ ಬಿಜೆಪಿ ಪ್ರಧಾನ ಕಚೇರಿಯಲ್ಲಿ ಬಿಜೆಪಿ ಆಡಳಿತವಿರುವ ಎಲ್ಲಾ ರಾಜ್ಯಗಳ ಸಿಎಂಗಳು, ರಾಜ್ಯಾಧ್ಯಕ್ಷರು, ರಾಷ್ಟ್ರೀಯ ಪದಾಧಿಕಾರಿಗಳ ಸಮ್ಮುಖದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಬಿಜೆಪಿ 12ನೇ ರಾಷ್ಟ್ರೀಯ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ.
ಯಾರು ಈ ನಿತಿನ್ ನಬಿನ್
ರಾಜಕೀಯ ಹಿನ್ನೆಲೆಯ ಕುಟುಂಬದಿಂದ ಬಂದಿರುವ ನಿತಿನ್ ನಬಿನ್ ಬಿಹಾರ ವಿಧಾನಸಭೆಗೆ ಐದು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದು, ಪಾಟ್ನಾದ ಬಂಕಿಪುರ ವಿಧಾನಸಭಾ ಕ್ಷೇತ್ರವನ್ನು ಪ್ರತಿನಿಧಿಸುತ್ತಾರೆ. ಎರಡು ಬಾರಿ ಸಚಿವರಾಗಿ ಸೇವೆ ಸಲ್ಲಿಸಿದ್ದಾರೆ.
ದಿವಂಗತ ಬಿಜೆಪಿ ಹಿರಿಯ ಮತ್ತು ಮಾಜಿ ಶಾಸಕ ನಬಿನ್ ಕಿಶೋರ್ ಪ್ರಸಾದ್ ಸಿನ್ಹಾ ಅವರ ಪುತ್ರರಾಗಿದ್ದಾರೆ. ಸಂಘಟನೆಯೊಳಗೆ, ನಬಿನ್ ಅವರನ್ನು ಸೈದ್ಧಾಂತಿಕವಾಗಿ ಬೇರೂರಿರುವ ಮತ್ತು ಪಕ್ಷದ ರಚನೆಯೊಂದಿಗೆ ನಿಕಟ ಸಂಬಂಧ ಹೊಂದಿರುವ ವ್ಯಕ್ತಿಯಾಗಿ ನೋಡಲಾಗುತ್ತದೆ. ಕಳೆದ 2025 ಡಿ. 14ರಂದು ಅವರನ್ನು ಬಿಜೆಪಿಯ ರಾಷ್ಟ್ರೀಯ ಕಾರ್ಯಾಧ್ಯಕ್ಷರನ್ನಾಗಿ ನೇಮಿಸಲಾಗಿತ್ತು (ಏಜೆನ್ಸೀಸ್).