ಬಿಜೆಪಿ ಅಧ್ಯಕ್ಷರಾಗಿ ನಿತಿನ್ ನಬಿನ್ ಅಧಿಕಾರ ಸ್ವೀಕಾರ
ನವದೆಹಲಿ: ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾಗಿ ಕಾರ್ಯಾಧ್ಯಕ್ಷ ನಿತಿನ್ ನಬಿನ್ ಅವಿರೋಧವಾಗಿ ಆಯ್ಕೆಯಾಗಿದ್ದು, ಇಂದು(ಜ. 20) ಜೆ.ಪಿ ನಡ್ಡಾ ಅವರ ಉತ್ತರಾಧಿಕಾರಿಯಾಗಿ ಪಕ್ಷದ 12ನೇ ರಾಷ್ಟ್ರೀಯ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ.
ದೆಹಲಿಯ ಪಕ್ಷದ ಪ್ರಧಾನ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ಚುನಾವಣಾಧಿಕಾರಿ ಕೆ. ಲಕ್ಷ್ಮಣ್ ಅವರು ಅವಿರೋಧವಾಗಿ ನಿತಿನ್ ನಬಿನ್ ಅವರ ಹೆಸರನ್ನು ಅಧ್ಯಕ್ಷರಾಗಿ ಘೋಷಣೆ ಮಾಡಿದರು. ಈ ವೇಳೆ ಪ್ರಧಾನಿ ಮೋದಿ, ಕೇಂದ್ರ ಗೃಹಸಚಿವ ಅಮಿತ್ ಶಾ, ರಾಜನಾಥ್ ಸಿಂಗ್, ಹಾಲಿ ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ, ನಿತಿನ್ ಗಡ್ಕರಿ, ಕಿರಣ್ ರಿಜಿಜು ಸೇರಿ ಹಲವು ನಾಯಕರು ಉಪಸ್ಥಿತರಿದ್ದರು.
ಕಳೆದ ಡಿಸೆಂಬರ್ ಆರಂಭದಲ್ಲಿ ಪಕ್ಷದ ಕಾರ್ಯಕಾರಿ ಅಧ್ಯಕ್ಷರಾಗಿ ನೇಮಕವಾಗಿದ್ದ 46 ವರ್ಷದ ನಿತಿನ್ ನಬಿನ್, ಇಂದು ದೆಹಲಿಯ ಬಿಜೆಪಿ ಪ್ರಧಾನ ಕಚೇರಿಯಲ್ಲಿ ಬಿಜೆಪಿ ಆಡಳಿತವಿರುವ ಎಲ್ಲಾ ರಾಜ್ಯಗಳ ಸಿಎಂಗಳು, ರಾಜ್ಯಾಧ್ಯಕ್ಷರು, ರಾಷ್ಟ್ರೀಯ ಪದಾಧಿಕಾರಿಗಳ ಸಮ್ಮುಖದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಬಿಜೆಪಿ 12ನೇ ರಾಷ್ಟ್ರೀಯ ಅಧ್ಯಕ್ಷರಾಗಿ ಪದಗ್ರಹಣ ಮಾಡಿದರು.
45 ವರ್ಷದ ನಿತಿನ್ ನಬಿನ್ ಅವರ ಆಯ್ಕೆ ಈ ವರ್ಷ ಮತ್ತು ಮುಂದಿನ ವರ್ಷ ನಡೆಯುವ ಬಂಗಾಳ, ತಮಿಳುನಾಡು, ಅಸ್ಸಾಂ ಹಾಗೂ ಉತ್ತರ ಪ್ರದೇಶ ಸೇರಿದಂತೆ ಪ್ರಮುಖ ರಾಜ್ಯ ಚುನಾವಣೆಗಳು, 2029ರ ಲೋಕಸಭೆ ಚುನಾವಣೆಗೂ ಮುನ್ನ ಬಿಜೆಪಿಯ ಸಂಘಟನಾತ್ಮಕ ಶಕ್ತಿ ಮತ್ತು ಪೀಳಿಗೆಯ ಪರಿವರ್ತನೆಗೆ ಹೊಸ ಒತ್ತು ನೀಡುವ ಸಂಕೇತವಾಗಿದೆ ಎನ್ನಲಾಗಿದೆ.
ಯಾರು ಈ ನಿತಿನ್ ನಬಿನ್
ರಾಜಕೀಯ ಹಿನ್ನೆಲೆಯ ಕುಟುಂಬದಿಂದ ಬಂದಿರುವ ನಿತಿನ್ ನಬಿನ್ ಬಿಹಾರ ವಿಧಾನಸಭೆಗೆ ಐದು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದು, ಪಾಟ್ನಾದ ಬಂಕಿಪುರ ವಿಧಾನಸಭಾ ಕ್ಷೇತ್ರವನ್ನು ಪ್ರತಿನಿಧಿಸುತ್ತಾರೆ. ಎರಡು ಬಾರಿ ಸಚಿವರಾಗಿ ಸೇವೆ ಸಲ್ಲಿಸಿದ್ದಾರೆ.
ದಿವಂಗತ ಬಿಜೆಪಿ ಹಿರಿಯ ಮತ್ತು ಮಾಜಿ ಶಾಸಕ ನಬಿನ್ ಕಿಶೋರ್ ಪ್ರಸಾದ್ ಸಿನ್ಹಾ ಅವರ ಪುತ್ರರಾಗಿದ್ದಾರೆ. ಸಂಘಟನೆಯೊಳಗೆ, ನಬಿನ್ ಅವರನ್ನು ಸೈದ್ಧಾಂತಿಕವಾಗಿ ಬೇರೂರಿರುವ ಮತ್ತು ಪಕ್ಷದ ರಚನೆಯೊಂದಿಗೆ ನಿಕಟ ಸಂಬಂಧ ಹೊಂದಿರುವ ವ್ಯಕ್ತಿಯಾಗಿ ನೋಡಲಾಗುತ್ತದೆ.
2023ರಲ್ಲಿ ನಿತಿನ್ ನಬಿನ್ ಅವರಿಗೆ ಛತ್ತೀಸ್‌ಗಢ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯ ಉಸ್ತುವಾರಿ ವಹಿಸುವ ಜವಾಬ್ದಾರಿಯನ್ನು ವಹಿಸಲಾಯಿತು. ಆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಭೂಪೇಶ್ ಬಾಘೇಲ್ ನೇತೃತ್ವದ ಸರ್ಕಾರವನ್ನು ಕೆಡವಿ ಬಿಜೆಪಿಯನ್ನು ಅಧಿಕಾರಕ್ಕೆ ತರಲಾಗಿತ್ತು. ಇದು ಅವರ ಸಂಘಟನಾ ಸಾಮರ್ಥ್ಯವನ್ನು ಹೈಕಮಾಂಡ್ ಗಮನಿಸಿತ್ತು ಎನ್ನಲಾಗಿದೆ. ಹೀಗಾಗಿಯೇ ಕಳೆದ 2025 ಡಿ. 14ರಂದು ಅವರನ್ನು ಬಿಜೆಪಿಯ ರಾಷ್ಟ್ರೀಯ ಕಾರ್ಯಾಧ್ಯಕ್ಷರನ್ನಾಗಿ ನೇಮಿಸಲಾಗಿತ್ತು. (ಏಜೆನ್ಸೀಸ್).