NTA Reforms | 47 ಅಧಿಕಾರಿಗಳನ್ನು ವಜಾ ಮಾಡಿದ ಎನ್​ಟಿಎ, ಹೊರಗುತ್ತಿಗೆ ಮಾದರಿಗೂ ಬ್ರೇಕ್!  
ದೇಶ

ನೀಟ್‌ ಪರೀಕ್ಷಾ ಅಕ್ರಮ: 47 ಅಧಿಕಾರಿಗಳನ್ನು ವಜಾ ಮಾಡಿದ ಎನ್​ಟಿಎ, ಹೊರಗುತ್ತಿಗೆ ಮಾದರಿಗೂ ಬ್ರೇಕ್! | NTA Reforms

ನವದೆಹಲಿ: ನೀಟ್​​ ಪರೀಕ್ಷಾ ಅಕ್ರಮಗಳ ವಿರುದ್ಧ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ ಪ್ರತಿಭಟನೆಗಳು ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA Reforms) ತನ್ನ 47 ಅಧಿಕಾರಿಗಳನ್ನು ಸೇವೆಯಿಂದ ವಜಾಗೊಳಿಸಿದೆ. ಇಷ್ಟೇ ಅಲ್ಲದೆ, ಇನ್ನು ಹಲವು ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.
ಏಜೆನ್ಸಿಯ ಸಂಪೂರ್ಣ ಪುನಾರಚನೆ ಮತ್ತು ವ್ಯವಸ್ಥೆಯನ್ನು ಸುಧಾರಿಸುವ ಭಾಗವಾಗಿ, ಎನ್‌ಟಿಎ ಕೆಲವು ಅಧಿಕಾರಿಗಳ ವಿರುದ್ಧ ಕಾನೂನು ಮತ್ತು ಕ್ರಿಮಿನಲ್ ಕ್ರಮಗಳನ್ನು ಸಹ ಜರುಗಿಸಲಿದೆ. ಮುಂದಿನ ದಿನಗಳಲ್ಲಿ ಇನ್ನು ಹಲವು ಸುಧಾರಣಾ ಕ್ರಮಗಳನ್ನು ಕೈಗೊಳ್ಳಲಾಗುವುದು ಹಾಗೂ ಪರೀಕ್ಷೆಗಳನ್ನು ಹೊರಗುತ್ತಿಗೆ ನೀಡುವ ಮಾದರಿಯನ್ನು ಸಹ ಸಂಪೂರ್ಣವಾಗಿ ಪರಿಷ್ಕರಿಸಲಾಗುವುದು ಎಂದು ಮೂಲಗಳು ತಿಳಿಸಿವೆ.
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದಿಂದಾಗಿ ಎನ್‌ಟಿಎ ಕಾರ್ಯವೈಖರಿ ತೀವ್ರ ಟೀಕೆಗೆ ಗುರಿಯಾಗಿದ್ದು, ಸಂಸ್ಥೆಯನ್ನು ಸಂಪೂರ್ಣವಾಗಿ ಪುನರ್​ ರಚಿಸಬೇಕೆಂಬ ಒತ್ತಡ ಹೆಚ್ಚಾಗಿದೆ. ಎನ್‌ಟಿಎ ಸಂಸ್ಥೆಯು ಪರೀಕ್ಷೆಗಳನ್ನು ಪಾರದರ್ಶಕವಾಗಿ ನಡೆಸಲು ವಿಫಲವಾಗಿದೆ ಎಂದು ಆರೋಪಿಸಿ, ಈ ಏಜೆನ್ಸಿಯನ್ನೇ ರದ್ದುಗೊಳಿಸಬೇಕು ಎಂದು ವಿರೋಧ ಪಕ್ಷಗಳು ಮತ್ತು ಪ್ರತಿಭಟನಾಕಾರರು ಆಗ್ರಹಿಸುತ್ತಿದ್ದಾರೆ. ಆದರೆ, ಎನ್‌ಟಿಎ ರದ್ದುಗೊಳಿಸುವ ಯಾವುದೇ ಪ್ರಸ್ತಾಪ ಸರ್ಕಾರದ ಮುಂದಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.

ಮಸೂದೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ

ಕೇಂದ್ರ ಸಚಿವ ಸಂಪುಟವು ಪರೀಕ್ಷಾ ಪತ್ರಿಕೆ ಸೋರಿಕೆ ಪ್ರಕರಣಗಳಲ್ಲಿ ಕಠಿಣ ಶಿಕ್ಷೆಯನ್ನು ಖಚಿತಪಡಿಸಲು ಕರಡು ವಿಧೇಯಕಕ್ಕೆ ಅಂಕಿತ ಹಾಕಿದ ಬೆನ್ನಲ್ಲೇ ಎನ್‌ಟಿಎ ಈ ಕ್ರಮ ಕೈಗೊಂಡಿದೆ. ಸಂಸತ್ ಭವನದ ಸಂಕೀರ್ಣದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಈ ವಿಧೇಯಕಕ್ಕೆ ಅನುಮೋದನೆ ದೊರೆತಿದ್ದು, ಮುಂದಿನ ವಾರ ಇದನ್ನು ಸಂಸತ್ತಿನಲ್ಲಿ ಮಂಡಿಸಲಾಗುವುದು.

ಈ ವಿಧೇಯಕವು ಸಾರ್ವಜನಿಕ ಪರೀಕ್ಷೆಗಳ (ಅಕ್ರಮ ತಡೆ) ಕಾಯ್ದೆ, 2024ಕ್ಕೆ ತಿದ್ದುಪಡಿ ತರಲಿದ್ದು, ಸಂಘಟಿತ ಪತ್ರಿಕೆ ಸೋರಿಕೆ ಪ್ರಕರಣಗಳಲ್ಲಿ ಭಾಗಿಯಾದವರಿಗೆ ಗರಿಷ್ಠ 10 ವರ್ಷಗಳ ಜೈಲು ಶಿಕ್ಷೆ ಮತ್ತು 10 ಕೋಟಿ ರೂಪಾಯಿವರೆಗೆ ದಂಡ ವಿಧಿಸುತ್ತದೆ. ಈ ಕರಡು ವಿಧೇಯಕದ ಕುರಿತು ಪ್ರಧಾನಿ ಮೋದಿ ತಡರಾತ್ರಿ ವೀಡಿಯೋ ಮೂಲಕ ಭರವಸೆ ನೀಡಿದ್ದರು. ಪೇಪರ್​ ಲೀಕ್​ ಘಟನೆಗಳು ಅತ್ಯಂತ ನೋವಿನ ಸಂಗತಿ ಎಂದಿದ್ದ ಪ್ರಧಾನಿಗಳು, ಇದು ಸಣ್ಣ ವಿಷಯವಲ್ಲ ಎಂಬುದು ತಮಗೆ ತಿಳಿದಿದೆ ಎಂದಿದ್ದರು.

ಸಚಿವ ಸಂಪುಟವು ಶುಕ್ರವಾರ ಪತ್ರಿಕೆ ಸೋರಿಕೆ ವಿಷಯದ ಕುರಿತು ಚರ್ಚಿಸಲಿದ್ದು, ಸಚಿವ ಸಂಪುಟದ ಸಹೋದ್ಯೋಗಿಗಳ ಸಲಹೆಗಳನ್ನು ಪಡೆದು ಮುಂದಿನ ಕ್ರಮವನ್ನು ಅಂತಿಮಗೊಳಿಸಲಾಗುವುದು ಎಂದು ಹೇಳಿದ್ದ ಪ್ರಧಾನಿ ಮೋದಿ, ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಕಠಿಣ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದರು. ಅಪರಾಧಿಗಳನ್ನು ಬಂಧಿಸಲಾಗಿದೆ. ಅವರು ಈಗ ಜೈಲಿನಲ್ಲಿದ್ದಾರೆ. ವಿದ್ಯಾರ್ಥಿಗಳ ಒಂದು ವರ್ಷ ವ್ಯರ್ಥವಾಗದಂತೆ ನೋಡಿಕೊಳ್ಳುವುದು ನಮ್ಮ ಅತ್ಯಂತ ಪ್ರಮುಖ ಜವಾಬ್ದಾರಿಯಾಗಿತ್ತು. ತಕ್ಷಣವೇ ಪರೀಕ್ಷೆ ನಡೆಸುವುದು ಅಗತ್ಯವಾಗಿತ್ತು. ಎಲ್ಲಾ ಸಂಪನ್ಮೂಲಗಳನ್ನು ಬಳಸಿಕೊಂಡು, 22 ಲಕ್ಷ ವಿದ್ಯಾರ್ಥಿಗಳು ಮರುಪರೀಕ್ಷೆಗೆ ಹಾಜರಾಗುವುದನ್ನು ಸರ್ಕಾರ ಖಚಿತಪಡಿಸಿದೆ ಎಂದು ಮೋದಿ ತಿಳಿಸಿದ್ದರು(ಏಜೆನ್ಸೀಸ್​).