ಇಸ್ಲಾಮಾಬಾದ್: ಮುಂಬರುವ ಐಸಿಸಿ ಪುರುಷರ ಟಿ20 ವಿಶ್ವಕಪ್ 2026ರಲ್ಲಿ ಪಾಕಿಸ್ತಾನ(Pakistan) ತಂಡ ಪಾಲ್ಗೊಳ್ಳುವುದೇ ಅಥವಾ ಇಲ್ಲವೇ ಎಂಬ ಪ್ರಶ್ನೆಗೆ ಇನ್ನೂ ಉತ್ತರ ಸಿಕ್ಕಿಲ್ಲ. ಈ ಕುರಿತು ಅಂತಿಮ ನಿರ್ಧಾರವನ್ನು ಪಾಕಿಸ್ತಾನ ಸರ್ಕಾರ ಸದ್ಯಕ್ಕೆ ಮುಂದೂಡಿದ್ದು, ಕ್ರಿಕೆಟ್ ಲೋಕದಲ್ಲಿ ಭಾರಿ ಕುತೂಹಲ ಮೂಡಿಸಿದೆ.
ಸೋಮವಾರ ಪಾಕಿಸ್ತಾನ ಕ್ರಿಕೆಟ್ ಮಂಡಳಿ (PCB) ಅಧ್ಯಕ್ಷ ಮೊಹ್ಸಿನ್ ನಖ್ವಿ ಅವರು ಪ್ರಧಾನ ಮಂತ್ರಿ ಶೆಹಬಾಜ್ ಷರೀಫ್ ಮತ್ತು ಮಾಜಿ ಪ್ರಧಾನಿ ನವಾಜ್ ಷರೀಫ್ ಅವರನ್ನು ಭೇಟಿ ಮಾಡಿ ಈ ಗಂಭೀರ ವಿಷಯದ ಬಗ್ಗೆ ಸುದೀರ್ಘ ಚರ್ಚೆ ನಡೆಸಿದ್ದಾರೆ.
ವಿಶ್ವಕಪ್ ಆಯೋಜನೆಯ ವಿಚಾರದಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ (ICC) ತೆಗೆದುಕೊಂಡ ಕೆಲವು ನಿರ್ಧಾರಗಳು ಪಾಕಿಸ್ತಾನದ ಆಕ್ರೋಶಕ್ಕೆ ಕಾರಣವಾಗಿವೆ. ಭದ್ರತಾ ಕಾರಣಗಳನ್ನು ನೀಡಿ ಭಾರತಕ್ಕೆ ಪ್ರಯಾಣಿಸಲು ನಿರಾಕರಿಸಿದ ಬಾಂಗ್ಲಾದೇಶವನ್ನು ಐಸಿಸಿ ಟೂರ್ನಿಯಿಂದಲೇ ಹೊರಹಾಕಿತ್ತು. ಬಾಂಗ್ಲಾದೇಶದ ಬದಲಿಗೆ ಸ್ಕಾಟ್ಲೆಂಡ್ ತಂಡವನ್ನು ಸೇರಿಸಿಕೊಳ್ಳಲಾಗಿದೆ. ಐಸಿಸಿಯ ಈ ಕಠಿಣ ನಿಲುವು ಪಾಕಿಸ್ತಾನ ಸರ್ಕಾರ ಮತ್ತು ಪಿಸಿಬಿ ನಡುವೆ ಅಸಮಾಧಾನದ ಕಿಚ್ಚು ಹಚ್ಚಿದೆ.
ಈ ಬಗ್ಗೆ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಮೊಹ್ಸಿನ್ ನಖ್ವಿ, ಪ್ರಧಾನಮಂತ್ರಿಯವರೊಂದಿಗೆ ಉತ್ಪಾದಕ ಸಭೆ ನಡೆದಿದೆ. ಐಸಿಸಿ ಮ್ಯಾಟರ್ ಬಗ್ಗೆ ಅವರಿಗೆ ಮಾಹಿತಿ ನೀಡಿದ್ದೇನೆ. ಎಲ್ಲಾ ಆಯ್ಕೆಗಳನ್ನು ಮುಕ್ತವಾಗಿಟ್ಟುಕೊಂಡು ಸಮಸ್ಯೆಯನ್ನು ಪರಿಹರಿಸಲು ಅವರು ಸೂಚಿಸಿದ್ದಾರೆ. ಅಂತಿಮ ನಿರ್ಧಾರವನ್ನು ಈ ಶುಕ್ರವಾರ ಅಥವಾ ಮುಂದಿನ ಸೋಮವಾರ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಜಿಯೋ ನ್ಯೂಸ್ ವರದಿಯ ಪ್ರಕಾರ, ಐಸಿಸಿ ನಡೆಗೆ ಪ್ರತಿಯಾಗಿ ಪಾಕಿಸ್ತಾನ ಈ ಬಾರಿಯ ವಿಶ್ವಕಪ್‌ನಿಂದ ಹಿಂದೆ ಸರಿಯುವ ಸಾಧ್ಯತೆಯಿದೆ. ಭಾರತದಲ್ಲಿ ನಡೆಯಲಿರುವ ಟೂರ್ನಿಗೆ ತನ್ನ ತಂಡವನ್ನು ಕಳುಹಿಸಲು ಪಾಕ್ ಸರ್ಕಾರ ಅನುಮತಿ ನಿರಾಕರಿಸಬಹುದು ಎನ್ನಲಾಗಿದೆ. ಒಂದು ವೇಳೆ ಪಾಕಿಸ್ತಾನ ಹಿಂದೆ ಸರಿದರೆ, ಅದು ವಿಶ್ವಕಪ್‌ನ ವರ್ಚಸ್ಸಿನ ಮೇಲೆ ಮತ್ತು ಐಸಿಸಿಯ ಆದಾಯದ ಮೇಲೆ ಭಾರಿ ಹೊಡೆತ ಬೀಳುವ ಸಾಧ್ಯತೆಯಿದೆ.
ಭಾರತ ಮತ್ತು ಪಾಕಿಸ್ತಾನ ನಡುವಿನ ರಾಜತಾಂತ್ರಿಕ ಬಿಕ್ಕಟ್ಟು ಈಗ ಕ್ರಿಕೆಟ್ ಮೈದಾನಕ್ಕೂ ವಿಸ್ತರಿಸಿದ್ದು, ಮುಂಬರುವ ಶುಕ್ರವಾರದ ನಿರ್ಧಾರ ಇಡೀ ಕ್ರೀಡಾ ಜಗತ್ತಿನ ಗಮನ ಸೆಳೆದಿದೆ,(ಏಜೆನ್ಸೀಸ್).