ನವದೆಹಲಿ: 2020ರಲ್ಲಿ ವಿವಾದಾತ್ಮಕ ಕೃಷಿ ಕಾನೂನುಗಳಿಂದಾಗಿ ಮೈತ್ರಿ ಮುರಿದು ಬಿದ್ದ ಆರು ವರ್ಷಗಳ ಬಳಿಕ 2027 ರ ಪಂಜಾಬ್ ವಿಧಾನಸಭಾ ಚುನಾವಣೆಗೆ ಮುನ್ನ ಭಾರತೀಯ ಜನತಾ ಪಕ್ಷ(ಬಿಜೆಪಿ) ಮತ್ತು ಶಿರೋಮಣಿ ಅಕಾಲಿದಳ ಇಂದು(ನ. 24) ಹೊಸ ಮೈತ್ರಿಕೂಟವನ್ನು ಘೋಷಿಸುವ ಸಾಧ್ಯತೆಯಿದೆ ಎಂದು ವರದಿಯಾಗಿದೆ.
ನವದೆಹಲಿಯ ಬಿಜೆಪಿ ಪ್ರಧಾನ ಕಚೇರಿಯಲ್ಲಿ ಮಧ್ಯಾಹ್ನ 1 ಗಂಟೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಹಾಗೂ ಶಿರೋಮಣಿ ಅಕಾಲಿ ದಳ ಮುಖ್ಯಸ್ಥ ಸುಖ್‌ಬೀರ್ ಸಿಂಗ್ ಬಾದಲ್ ಅವರು ಈ ಘೋಷಣೆ ಮಾಡುವ ನಿರೀಕ್ಷೆಯಿದೆ ಎನ್ನಲಾಗಿದೆ.
2027ರ ವಿಧಾನಸಭಾ ಚುನಾವಣೆಗೆ ಸೀಟು ಹಂಚಿಕೆ ವ್ಯವಸ್ಥೆಗಳ ಕುರಿತು ಎರಡೂ ಪಕ್ಷಗಳ ನಡುವೆ ಮಾತುಕತೆಗಳು ನಡೆಯುತ್ತಿವೆ. ಇನ್ನೂ 2020ನ ಸೆಪ್ಟೆಂಬರ್ನಲ್ಲಿ ಈಗ ಕೇಂದ್ರ ಸರ್ಕಾರ ರದ್ದುಗೊಳಿಸಿರುವ ಮೂರು ಕೃಷಿ ಕಾನೂನುಗಳನ್ನು ವಿರೋಧಿಸಿ ಎಸ್ಎಡಿ ಬಿಜೆಪಿಯೊಂದಿಗಿನ ತನ್ನ 24 ವರ್ಷಗಳ ಮೈತ್ರಿಯನ್ನು ಕೊನೆಗೊಳಿಸಿತ್ತು.
ಕಳೆದ ತಿಂಗಳು ಪಂಜಾಬ್ಗೆ ಭೇಟಿ ನೀಡಿದ್ದ ಅಮಿತ್ ಶಾ, 2027 ರಲ್ಲಿ ಪಂಜಾಬ್‌ನಲ್ಲಿ ಎನ್‌ಡಿಎ ಸರ್ಕಾರ ರಚನೆಯಾಗಲಿದೆ ಎಂದು ಭವಿಷ್ಯ ನುಡಿದ ಬಳಿಕ ಮತ್ತೆ ಅಕಾಳಿದಳ-ಬಿಜೆಪಿ ಮೈತ್ರಿ ಬಗ್ಗೆ ಊಹಾಪೋಹಗಳು ಸೃಷ್ಟಿಯಾಗಿದ್ದವು.
ಇನ್ನೂ ಈ ಕುರಿತು ಪ್ರತಿಕ್ರಿಯಿಸಿದ್ದ ಅಕಾಲಿದಳ ಮುಖ್ಯಸ್ಥ ಸುಖ್‌ಬೀರ್ ಸಿಂಗ್ ಬಾದಲ್, ಏನಾಗುತ್ತದೆ ಎಂದು ನಿಮಗೆ ಕೆಲವೇ ದಿನಗಳಲ್ಲಿ ತಿಳಿಯುತ್ತದೆ. ನಮ್ಮ ಸಿದ್ಧಾಂತವನ್ನು ಒಪ್ಪಿಕೊಂಡರೇ ಕಾಂಗ್ರೆಸ್ ಮತ್ತು ಆಮ್ ಆದ್ಮಿ ಪಕ್ಷ (ಎಎಪಿ) ಹೊರತುಪಡಿಸಿ ಇತರ ಪಕ್ಷಗಳೊಂದಿಗೆ ಕೈಜೋಡಿಸಲು ಎಸ್ಎಡಿ ಮುಕ್ತವಾಗಿದೆ ಎಂದು ಹೇಳಿದ್ದರು.
2022ರ ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ಎರಡೂ ಪಕ್ಷಗಳು ಪ್ರತ್ಯೇಕವಾಗಿ ಸ್ಪರ್ಧಿಸಿದ್ದವು, 117 ಸದಸ್ಯರ ವಿಧಾನಸಭೆಯಲ್ಲಿ ಬಿಜೆಪಿ ಎರಡು ಸ್ಥಾನಗಳನ್ನು ಗೆದ್ದರೆ, ಶಿಯೋಮಿ ಅಕಾಲಿ ಅಕಾಲಿ ಮೂರು ಸ್ಥಾನಗಳನ್ನು ಗೆದ್ದಿತ್ತು (ಏಜೆನ್ಸೀಸ್).