ಲಖನೌ: ಅಯೋಧ್ಯೆಯಲ್ಲಿರುವ ರಾಮಮಂದಿರದಲ್ಲಿ ದೇಣಿಗೆ ಕಳ್ಳತನ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್(Ram Mandir Trust) ಸೋಮವಾರ(ಜು. 06) ಪ್ರಮುಖ ಸಭೆ ನಡೆಸಲಿದೆ ಎಂದು ವರದಿಯಾಗಿದೆ.
ಅಯೋಧ್ಯೆಯ ಮಣಿರಾಮ್ ದಾಸ್ ಚವಾನಿಯಲ್ಲಿ ಮಧ್ಯಾಹ್ನ ಸಭೆ ನಡೆಯಲಿದೆ. ದೇಣಿಗೆಯಲ್ಲಿ ಅಕ್ರಮಗಳ ಆರೋಪದ ಹಿನ್ನೆಲೆಯಲ್ಲಿ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ಈಗಾಗಲೇ ರಾಜೀನಾಮೆ ನೀಡಿದ್ದಾರೆ. ಈ ಬಗ್ಗೆ ಸಭೆಯಲ್ಲಿ ಚರ್ಚಿಸಿ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಟ್ರಸ್ಟ್ ಮೂಲಗಳು ತಿಳಿಸಿವೆ.
ಸಭೆಯಲ್ಲಿ ವಿಶೇಷ ತನಿಖಾ ತಂಡ ಸಲ್ಲಿಸಿದ ಮಧ್ಯಂತರ ವರದಿಯ ಬಗ್ಗೆಯೂ ಚರ್ಚಿಸಲಾಗುವುದು. ದೇಣಿಗೆಗಳ ಲೆಕ್ಕಾಚಾರ ಮತ್ತು ನಿರ್ವಹಣೆಯಲ್ಲಿ ಗುರುತಿಸಲಾದ ಸಮಸ್ಯೆಗಳ ಬಗ್ಗೆ ಸದಸ್ಯರಿಗೆ ವಿವರಿಸುವ ಸಾಧ್ಯತೆಯಿದೆ. ಭವಿಷ್ಯದಲ್ಲಿ ದೇವಾಲಯದ ಹೆಚ್ಚು ಪಾರದರ್ಶಕ ಆಡಳಿತವನ್ನು ಖಚಿತಪಡಿಸಿಕೊಳ್ಳಲು ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆಯೂ ಅವರು ಚರ್ಚಿಸಲಿದ್ದಾರೆ ಎನ್ನಲಾಗಿದೆ.
2025-26ರ ಹಣಕಾಸು ವರ್ಷದ ಲೆಕ್ಕಪರಿಶೋಧಿತ ಆದಾಯ-ವೆಚ್ಚ ವಿವರಗಳು ಮತ್ತು ಬ್ಯಾಲೆನ್ಸ್ ಶೀಟ್ ಅನ್ನು ಅನುಮೋದನೆಗಾಗಿ ಇಡಲಾಗುವುದು. ದೇವಾಲಯದ ನಿರ್ವಹಣೆಗೆ ನಿರ್ದಿಷ್ಟವಾಗಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ(ಸಿಇಒ) ನೇಮಕದ ಬಗ್ಗೆಯೂ ಸಭೆಯಲ್ಲಿ ಚರ್ಚಿಸುವ ಸಾಧ್ಯತೆಯಿದೆ ಎಂದು ವರದಿಗಳು ಉಲ್ಲೇಖಿಸಿವೆ.
ಟ್ರಸ್ಟ್ ಅಧ್ಯಕ್ಷ ಮಹಂತ್ ನೃತ್ಯ ಗೋಪಾಲ್ ದಾಸ್ ಪ್ರಸ್ತುತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆಯಲ್ಲಿ ಭಾಗವಹಿಸುವ ಸಾಧ್ಯತೆಯಿದೆ (ಏಜೆನ್ಸೀಸ್).