ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್
ನವದೆಹಲಿ: ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡುವ ಸಾಧ್ಯತೆಯನ್ನು ಕೇಂದ್ರ ಸರ್ಕಾರ(Central Government) ತಳ್ಳಿಹಾಕಿದ್ದು, ರಾಜೀನಾಮೆ ನೀಡುವುದು ಅತ್ಯಂತ ಸುಲಭದ ಕೆಲಸ ಮತ್ತು ಅದು ಜವಾಬ್ದಾರಿಯಿಂದ ತಪ್ಪಿಸಿಕೊಳ್ಳುವುದಕ್ಕೆ ಸಮಾನವಾಗಿರುತ್ತದೆ ಎಂದು ತಿಳಿಸಿದೆ.
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿವಾದ ಮತ್ತು ಇತರ ಪರೀಕ್ಷೆಗೆ ಸಂಬಂಧಿಸಿದ ವಿಷಯಗಳಿಗೆ ಸಂಬಂಧಿಸಿದಂತೆ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ದೆಹಲಿಯ ಜಂತರ್ ಮಂತರ್‌ನಲ್ಲಿ ಕಳೆದ ಒಂದು ತಿಂಗಳಿನಿಂದ ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆ ನಡೆಸುತ್ತಿದೆ.
ಕೇಂದ್ರ ಸರ್ಕಾರದ ಮೂಲಗಳ ಮಾಹಿತಿ ಪ್ರಕಾರ, ಪ್ರಧಾನ್ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ. ರಾಜೀನಾಮೆ ನೀಡಿ ಜವಾಬ್ದಾರಿಯಿಂದ ತಪ್ಪಿಸಿಕೊಳ್ಳುವುದು ಸುಲಭದ ಕೆಲಸ. ಜನರು ನಮಗೆ ಜನಾದೇಶ ನೀಡಿದ್ದಾರೆ, ಮತ್ತು ನಾವು ಅದನ್ನು ಪೂರೈಸುತ್ತೇವೆ ಎಂದು ಹೇಳಿದೆ ಎಂದು ವರದಿಗಳು ಉಲ್ಲೇಖಿಸಿವೆ.
ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯಲ್ಲಿನ ಸಮಸ್ಯೆಗಳ ಪಟ್ಟಿಯನ್ನು ಸರ್ಕಾರ ಸಿದ್ಧಪಡಿಸುತ್ತಿದೆ. ಮತ್ತು ಈ ಸಮಸ್ಯೆಗಳನ್ನು ಶೀಘ್ರದಲ್ಲೇ ಪರಿಹರಿಸಲಾಗುವುದು. ಪ್ರಶ್ನೆ ಪತ್ರಿಕೆ ಸೋರಿಕೆಯಲ್ಲಿ ಭಾಗಿಯಾಗಿರುವ ಅನೇಕ ಗ್ಯಾಂಗ್‌ಗಳನ್ನು ನಾವು ಭೇದಿಸಿದ್ದೇವೆ. ಭಾಗಿಯಾಗಿರುವವರ ವಿರುದ್ಧ ಮುಂದಿನ ಕ್ರಮ ಕೈಗೊಳ್ಳುವ ಹಂತದಲ್ಲಿದೆ ಎಂದು ತಿಳಿಸಿದೆ.
ರಾಜೀನಾಮೆ ಬಗ್ಗೆ ನಾಳೆ ನಿರ್ಧಾರ
ಇನ್ನೂ ಮತ್ತೊಂದೆಡೆ ಕೇಂದ್ರ ಸಚಿವರೊಂದಿಗಿನ ಪ್ರಮುಖ ಸಭೆಯ ಬೆನ್ನಲ್ಲೇ, ಕಾಕ್ರೋಚ್ ಜನತಾ ಪಾರ್ಟಿ ಪ್ರತಿನಿಧಿಗಳು ಶುಕ್ರವಾರ ಪತ್ರಿಕಾಗೋಷ್ಠಿ ನಡೆಸಿ, ಕೇಂದ್ರ ಸರ್ಕಾರವು ತಮ್ಮ ಎರಡು ಪ್ರಮುಖ ಬೇಡಿಕೆಗಳಿಗೆ ಒಪ್ಪಿಗೆ ನೀಡಿದೆ ಎಂದು ತಿಳಿಸಿದ್ದಾರೆ. ಜೊತೆಗೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕುರಿತು ಶನಿವಾರದೊಳಗೆ ತನ್ನ ಅಂತಿಮ ಪ್ರತಿಕ್ರಿಯೆಯನ್ನು ನೀಡಲಿದೆ ಎಂದು ತಿಳಿಸಿದ್ದಾರೆ.
ಸರ್ಕಾರದೊಂದಿಗಿನ ಸಭೆಯ ನಂತರ ಮಾತನಾಡಿದ ಕಾಕ್ರೋಚ್ ಜನತಾ ಪಾರ್ಟಿಯ ರಾಷ್ಟ್ರೀಯ ವಕ್ತಾರ ಅಶುತೋಷ್ ರಾಂಕಾ, ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕುರಿತಾದ ನಮ್ಮ ಬೇಡಿಕೆಗೆ ಸಂಬಂಧಿಸಿದಂತೆ ಸರ್ಕಾರವು ನಾಳೆ ಮಧ್ಯಾಹ್ನದವರೆಗೆ ಸಮಯ ಕೇಳಿದೆ. ಸರ್ಕಾರ ಶೀಘ್ರದಲ್ಲೇ ಅವರನ್ನು ಹುದ್ದೆಯಿಂದ ತೆಗೆದುಹಾಕುತ್ತದೆ ಎಂಬ ಭರವಸೆ ನಮಗಿದೆ. ಇನ್ನು ನೀಟ್ ಪರೀಕ್ಷೆಯ ಅಕ್ರಮಗಳಿಂದಾಗಿ ಆತ್ಮಹತ್ಯೆ ಮಾಡಿಕೊಂಡ ಅಭ್ಯರ್ಥಿಗಳ ಕುಟುಂಬಗಳಿಗೆ ಪರಿಹಾರ ನೀಡುವುದು ಹಾಗೂ ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲಿರುವ ಎಫ್‌ಐಆರ್ ಮತ್ತು ಕಾನೂನು ಪ್ರಕರಣಗಳನ್ನು ಹಿಂಪಡೆಯುವುದು ಎಂಬ ನಮ್ಮ ಎರಡು ಬೇಡಿಕೆಗಳಿಗೆ ಸರ್ಕಾರ ಭಾಗಶಃ ಒಪ್ಪಿಗೆ ಸೂಚಿಸಿದೆ ಎಂದಿದ್ದಾರೆ (ಏಜೆನ್ಸೀಸ್).