ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ 
ದೇಶ

ಎಸ್​ಐಆರ್ ವಿವಾದ; ಜ್ಞಾನೇಶ್ ಕುಮಾರ್ ವಿರುದ್ಧ ದೇಶಾದ್ಯಂತ ಕಾಂಗ್ರೆಸ್ ಪ್ರತಿಭಟನೆ: ಗೌರವ್ ಗೊಗೊಯ್ ಸೇರಿ ಹಲವರು ಬಂಧನ | Congress

ಭಾರತೀಯ ಚುನಾವಣಾ ಆಯೋಗದಲ್ಲಿ ಎಸ್​ಐಆರ್ ಕುರಿತು ಚುನಾವಣಾ ಆಯುಕ್ತರ ನಡುವಿನ ಆಂತರಿಕ ಭಿನ್ನಾಭಿಪ್ರಾಯದ ವರದಿ ಬೆನ್ನಲ್ಲೇ ಸಿಇಸಿ ಜ್ಞಾನೇಶ್ ಕುಮಾರ್ ವಿರುದ್ಧ ಶುಕ್ರವಾರ(ಸೆ. 25) ಕಾಂಗ್ರೆಸ್ ದೇಶಾದ್ಯಂತ ಪ್ರತಿಭಟನೆ ನಡೆಸಿದೆ.

ನವದೆಹಲಿ: ಭಾರತೀಯ ಚುನಾವಣಾ ಆಯೋಗದಲ್ಲಿ ಎಸ್​ಐಆರ್ ಕುರಿತು ಚುನಾವಣಾ ಆಯುಕ್ತರ ನಡುವಿನ ಆಂತರಿಕ ಭಿನ್ನಾಭಿಪ್ರಾಯದ ವರದಿ ಬೆನ್ನಲ್ಲೇ ಸಿಇಸಿ ಜ್ಞಾನೇಶ್ ಕುಮಾರ್ ವಿರುದ್ಧ ಶುಕ್ರವಾರ(ಸೆ. 25) ಕಾಂಗ್ರೆಸ್ ದೇಶಾದ್ಯಂತ ಪ್ರತಿಭಟನೆ ನಡೆಸಿದೆ.

ದೆಹಲಿ, ಪಾಟ್ನಾ, ಜಮ್ಮು, ಲಖನೌ, ಕೋಲ್ಕತ್ತಾ, ಪಂಜಾಬ್, ಅಸ್ಸಾಂ ಮತ್ತು ಅರುಣಾಚಲ ಪ್ರದೇಶ ಸೇರಿದಂತೆ ಕಾಂಗ್ರೆಸ್ ಕಾರ್ಯಕರ್ತರು ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಒತ್ತಾಯಿಸಿ ಬೀದಿಗಿಳಿದು ಪ್ರತಿಭಟನೆ ನಡೆಸಿದರು.

ರೈಸಿನಾ ರಸ್ತೆಯಲ್ಲಿರುವ ಯೂತ್ ಕಾಂಗ್ರೆಸ್ ಕಚೇರಿಯಿಂದ ಚುನಾವಣಾ ಆಯೋಗದ ಪ್ರಧಾನ ಕಚೇರಿಗೆ ದೆಹಲಿ ಕಾಂಗ್ರೆಸ್ ಅಧ್ಯಕ್ಷ ದೇವೇಂದರ್ ಯಾದವ್ ನೇತೃತ್ವದಲ್ಲಿ ಮೆರವಣಿಗೆ ನಡೆಸಿದ ಕಾರ್ಯಕರ್ತರು, ಬ್ಯಾರಿಕೇಡ್‌ಗಳನ್ನು ಮುರಿದು ಚುನಾವಣಾ ಆಯೋಗದ ಕಚೇರಿ ಮುತ್ತಿಗೆಗೆ ಯತ್ನಿಸಿದ್ದಾರೆ. ಈ ವೇಳೆ ಪೊಲೀಸರು ಎಲ್ಲಾ ಕಾರ್ಯಕರ್ತರನ್ನು ವಶಕ್ಕೆ ಪಡೆದಿದ್ದಾರೆ.

ಈ ವೇಳೆ ಮಾತನಾಡಿರುವ ದೇವೇಂದ್ರ ಯಾದವ್, ಜ್ಞಾನೇಶ್ ಕುಮಾರ್ ತಕ್ಷಣವೇ ರಾಜೀನಾಮೆ ನೀಡಬೇಕು. ಭಾರತದಲ್ಲಿ ಪ್ರಜಾಪ್ರಭುತ್ವ ನಾಶವಾಗುವುದನ್ನು ನಾವು ಸುಮ್ಮನೆ ನೋಡುತ್ತಾ ಕುಳಿತುಕೊಳ್ಳುವುದಿಲ್ಲ. ಇದಕ್ಕೆ ಕಾರಣರಾದವರಿಗೆ ಶಿಕ್ಷೆಯಾಗುತ್ತದೆ ಎಂದು ಹೇಳಿದ್ದಾರೆ.

ಅಸ್ಸಾಂನಲ್ಲಿ ರಾಜ್ಯ ಕಾಂಗ್ರೆಸ್ ಮುಖ್ಯಸ್ಥ ಗೌರವ್ ಗೊಗೊಯ್ ನೇತೃತ್ವದಲ್ಲಿ ಪ್ರತಿಭಟನೆ ನಡೆದಿದ್ದು, ಪೊಲೀಸರು ಅವರನ್ನು ಬಂಧಿಸಿದ್ದಾರೆ. ಬಿಹಾರದ ರಾಜಧಾನಿ ಪಾಟ್ನಾದಲ್ಲಿ ಚುನಾವಣಾ ಆಯೋಗದ ಕಚೇರಿಗೆ ಮುತ್ತಿಗೆಗೆ ಯತ್ನಿಸಲಾಗಿದ್ದು, ಈ ವೇಳೆ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಪೊಲೀಸರು ಜಲಫಿರಂಗಿ ಬಳಸಿದ್ದಾರೆ.

ಚುನಾವಣಾ ಆಯುಕ್ತರಾದ ಸುಖ್‌ಬೀರ್ ಸಿಂಗ್ ಸಂಧು ಮತ್ತು ವಿವೇಕ್ ಜೋಶಿ 10 ತಿಂಗಳ ಅವಧಿಯಲ್ಲಿ ಕನಿಷ್ಠ 14 ಬಾರಿ ಮತದಾರರ ಪಟ್ಟಿಯ ಎಸ್​ಐಆರ್ ಪ್ರಕ್ರಿಯೆಗಳಿಗೆ ಸಂಬಂಧಿಸಿದ ನಿರ್ಧಾರಗಳು ಮತ್ತು ಆದೇಶಗಳ ವಿರುದ್ಧ ಔಪಚಾರಿಕ ಆಕ್ಷೇಪಣೆಗಳನ್ನು ಎತ್ತಿದ್ದಾರೆ ಎಂದು ಇಂಡಿಯನ್ ಎಕ್ಸ್​ಪ್ರೆಸ್ ತನಿಖಾ ವರದಿ ಬಿತ್ತರಿಸಿದ ಬಳಿಕ ಪ್ರತಿಪಕ್ಷಗಳು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿವೆ. ಮತ್ತು ಅವರ ರಾಜೀನಾಮೆಗೆ ಒತ್ತಾಯಿಸಿವೆ (ಏಜೆನ್ಸೀಸ್).