ಚೆನ್ನೈ: ಕೇಂದ್ರ ಸರ್ಕಾರದ ಪ್ರಸ್ತಾವಿತ ಡಿಲಿಮಿಟೇಷನ್ ಮಸೂದೆಯ ಕುರಿತಾದ ತಮ್ಮ ಪಕ್ಷದ ನಿಲುವನ್ನು ಮರುಪರಿಶೀಲಿಸುವಂತೆ ಮನವೊಲಿಸಲು 'ಇಂಡಿಯಾ' ಮೈತ್ರಿಕೂಟದ ನಾಯಕರ ನಿಯೋಗವು ಭಾನುವಾರ(ನ. 29) ಚೆನ್ನೈನಲ್ಲಿ ಡಿಎಂಕೆ ಅಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರನ್ನು ಭೇಟಿಯಾಗಲಿದೆ ಎಂದು ವರದಿಯಾಗಿದೆ.
ಈ ಕುರಿತು ಪ್ರತಿಕ್ರಿಯಿಸಿರುವ ತಮಿಳುನಾಡು ಬಿಜೆಪಿ ರಾಜ್ಯಧ್ಯಕ್ಷ ನೈನಾರ್ ನಾಗೇಂದ್ರನ್, ದೇಶದ ಒಳಿತಿಗಾಗಿ ಎಂ.ಕೆ. ಸ್ಟಾಲಿನ್ ಅವರು ಅತ್ಯುತ್ತಮ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ. ಅವರು ದ್ರೋಹಿಗಳನ್ನು ನಂಬುವುದಿಲ್ಲ ಎಂದು ಹೇಳಿದ್ದಾರೆ.
ಸಂಸತ್ ವಿಶೇಷ ಅಧಿವೇಶನದಲ್ಲಿ ಕೇಂದ್ರ ಸರ್ಕಾರ ಪ್ರಸ್ತಾವಿತ ಡಿಲಿಮಿಟೇಶನ್ ಮಸೂದೆಯನ್ನು ಬೆಂಬಲಿಸದಂತೆ ಎಂ.ಕೆ.ಸ್ಟಾಲಿನ್ ಅವರನ್ನು ಮನವೊಲಿಸಲು ಕಾಂಗ್ರೆಸ್ ಕೊನೆಯ ಕಸರತ್ತು ನಡೆಸಿದ್ದು, ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿಯವರು ಚೆನ್ನೈ ಮತ್ತು ಮುಂಬೈಗೆ ಪ್ರಯಾಣಿಸಿದ್ದಾರೆ.
ಚೆನ್ನೈನಲ್ಲಿ ಡಿಎಂಕೆ ಅಧ್ಯಕ್ಷ ಎಂ.ಕೆ. ಸ್ಟಾಲಿನ್ ಮತ್ತು ಮುಂಬೈನಲ್ಲಿ ಎನ್ಸಿಪಿ (ಎಸ್ಪಿ) ಮುಖ್ಯಸ್ಥ ಶರದ್ ಪವಾರ್ ಅವರೊಂದಿಗೆ ಈ ಮೂವರು ನಾಯಕರು ಮಾತುಕತೆ ನಡೆಸಲಿದ್ದಾರೆ. ಮತ್ತು ಮಸೂದೆ ಬೆಂಬಲಿಸುವ ನಿರ್ಧಾರವನ್ನು ಮರು ಪರಿಶೀಲನೆ ಮಾಡುವಂತೆ ಒತ್ತಾಯಿಸಲಿದ್ದಾರೆ ಎನ್ನಲಾಗಿದೆ (ಏಜೆನ್ಸೀಸ್).