Sulur Case 
ದೇಶ

Sulur Case: ರೇಪ್​​​ ಆ್ಯಂಡ್​​ ಮರ್ಡರ್​​ ಕೇಸ್​​ ಸುದ್ದಿಗೋಷ್ಠಿಯಲ್ಲಿ ನಕ್ಕ ಅಧಿಕಾರಿಗಳು: ಪೊಲೀಸರ ವಿರುದ್ಧ ಭಾರಿ ಆಕ್ರೋಶ!

ಚೆನ್ನೈ: ತಮಿಳುನಾಡಿನ ಸುಳೂರು(Sulur Case) ಎಂಬಲ್ಲಿ 10 ವರ್ಷದ ಅಪ್ರಾಪ್ತ ಬಾಲಕಿಯ ಭೀಕರ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಡೆಸಲಾದ ಅಧಿಕೃತ ಪತ್ರಿಕಾಗೋಷ್ಠಿಯಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳು ನಗುತ್ತಾ, ಬೇಜವಾಬ್ದಾರಿಯಿಂದ ವರ್ತಿಸಿರುವ ಆಘಾತಕಾರಿ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸಾರ್ವಜನಿಕರ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. 

ಏನಿದು ಭೀಕರ ಘಟನೆ?

ಸುಳೂರು ಮೂಲದ 10 ವರ್ಷದ ಬಾಲಕಿಯೊಬ್ಬಳು ತನ್ನ ಮನೆಯ ಬಳಿ ಆಟವಾಡುತ್ತಿದ್ದಾಗ ದಿಢೀರನೆ ನಾಪತ್ತೆಯಾಗಿದ್ದಳು. ಆಕೆಯ ಕುಟುಂಬಸ್ಥರು ಹಾಗೂ ಸ್ಥಳೀಯರು ತೀವ್ರ ಹುಡುಕಾಟ ನಡೆಸಿದ ನಂತರ, ಬಾಲಕಿಯ ಶವವು ಸಮೀಪದ ಕೆರೆಯ ಬಳಿ ಪತ್ತೆಯಾಗಿತ್ತು. ಬಾಲಕಿಯನ್ನು ಉಸಿರುಗಟ್ಟಿಸಿ ಕೊಲೆ ಮಾಡಲಾಗಿದೆ ಎಂದು ಪೊಲೀಸರು ಶಂಕಿಸಿದ್ದರೆ, ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಲಾಗಿದೆ ಎಂದು ಕುಟುಂಬಸ್ಥರು ಗಂಭೀರ ಆರೋಪ ಮಾಡಿದ್ದಾರೆ. ಈ ಘಟನೆಯನ್ನು ಖಂಡಿಸಿ ಮೃತ ಬಾಲಕಿಯ ಕುಟುಂಬದವರು ಮತ್ತು ಸಾರ್ವಜನಿಕರು ತಕ್ಷಣವೇ ನ್ಯಾಯ ಒದಗಿಸಬೇಕೆಂದು ಆಗ್ರಹಿಸಿ ಸ್ಥಳದಲ್ಲಿ ಭಾರಿ ಪ್ರತಿಭಟನೆ ನಡೆಸಿದ್ದರು.

ಸುದ್ದಿಗೋಷ್ಠಿಯಲ್ಲಿ ನಕ್ಕ ಅಧಿಕಾರಿಗಳು!

ಪ್ರಕರಣದ ತನಿಖೆಯ ಪ್ರಗತಿಯನ್ನು ವಿವರಿಸಲು ಪೊಲೀಸ್ ಇಲಾಖೆಯು ಪತ್ರಿಕಾಗೋಷ್ಠಿ ಹಮ್ಮಿಕೊಂಡಿತ್ತು. ಈ ವೇಳೆ ವೇದಿಕೆಯಲ್ಲಿದ್ದ ಒಬ್ಬ ಮಹಿಳಾ ಅಧಿಕಾರಿ ಸೇರಿದಂತೆ ಮೂವರು ಹಿರಿಯ ಪೊಲೀಸ್ ಅಧಿಕಾರಿಗಳು ಗಂಭೀರವಾದ ಈ ಕೊಲೆ ಪ್ರಕರಣದ ಬಗ್ಗೆ ಮಾತನಾಡುವಾಗಲೇ ಪರಸ್ಪರ ನಗುತ್ತಾ, ಮುಗುಳ್ನಗುತ್ತಾ ಇರುವುದು ಕ್ಯಾಮೆರಾದಲ್ಲಿ ಸೆರೆಯಾಗಿದೆ. ಈ ದೃಶ್ಯಗಳ ವಿಡಿಯೋ ಇಂಟರ್ನೆಟ್‌ನಲ್ಲಿ ಹರಿದಾಡುತ್ತಿದ್ದಂತೆ ನೆಟ್ಟಿಗರು ಪೊಲೀಸರ ವಿರುದ್ಧ ಚಾಟಿ ಬೀಸಿದ್ದಾರೆ.
"ನೊಂದ ಕುಟುಂಬದ ಗಾಯದ ಮೇಲೆ ಉಪ್ಪು ಸವರುವಂತೆ ಈ ನಾಗರಿಕ ಸೇವಕರು ವರ್ತಿಸಿದ್ದಾರೆ" ಎಂದು ಸಾರ್ವಜನಿಕರು ಆಕ್ರೋಶ ಹೊರಹಾಕಿದ್ದಾರೆ. ಇಷ್ಟು ಬೇಜವಾಬ್ದಾರಿಯಾಗಿ ನಡೆದುಕೊಂಡ ಅಧಿಕಾರಿಗಳ ವಿರುದ್ಧ ಹಿರಿಯ ಅಧಿಕಾರಿಗಳು ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸಾಮಾಜಿಕ ಜಾಲತಾಣಗಳಲ್ಲಿ ಒತ್ತಾಯ ಕೇಳಿಬಂದಿದೆ. ಆದರೆ, ಈ ವಿಡಿಯೋ ವಿವಾದದ ಕುರಿತು ತಮಿಳುನಾಡು ಪೊಲೀಸ್ ಇಲಾಖೆ ಈವರೆಗೆ ಯಾವುದೇ ಅಧಿಕೃತ ಸ್ಪಷ್ಟನೆ ನೀಡಿಲ್ಲ.

ಇಬ್ಬರು ಆರೋಪಿಗಳ ಬಂಧನ

ಬಾಲಕಿಯ ಕೊಲೆಗೆ ಸಂಬಂಧಿಸಿದಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಚುರುಕುಗೊಳಿಸಿದ್ದು, ಈಗಾಗಲೇ ಇಬ್ಬರು ಶಂಕಿತ ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರನ್ನು 33 ವರ್ಷದ ದಿನಗೂಲಿ ಕಾರ್ಮಿಕ ಕಾರ್ತಿಕ್ ಮತ್ತು ಮೋಹನ್‌ರಾಜ್ ಎಂದು ಗುರುತಿಸಲಾಗಿದೆ.
ಮತ್ತೊಂದೆಡೆ, ಈ ಘಟನೆಯ ಕುರಿತು ತೀವ್ರ ಆಘಾತ ವ್ಯಕ್ತಪಡಿಸಿರುವ ತಮಿಳುನಾಡು ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಅವರು, "ಅಪ್ರಾಪ್ತೆಯ ಮೇಲಿನ ಈ ಕೃತ್ಯವು ಅತ್ಯಂತ ಅಮಾನವೀಯ ಮತ್ತು ಕ್ಷಮಿಸಲಾರದ ಅಪರಾಧವಾಗಿದೆ" ಎಂದು ಕಠಿಣ ಶಬ್ದಗಳಲ್ಲಿ ಖಂಡಿಸಿದ್ದಾರೆ. ಪ್ರಕರಣದ ತನಿಖೆಯನ್ನು ತೀವ್ರಗೊಳಿಸಿ ಆರೋಪಿಗಳಿಗೆ ಕಠಿಣ ಶಿಕ್ಷೆಯಾಗುವಂತೆ ನೋಡಿಕೊಳ್ಳಲು ಸೂಚಿಸಲಾಗಿದೆ,(ಏಜೆನ್ಸೀಸ್​).