ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಹಿನ್ನಡೆ: ರಾಜ್ಯದಲ್ಲಿ ಬೈಕ್ ಟ್ಯಾಕ್ಸಿಗೆ ಗ್ರೀನ್​ ಸಿಗ್ನಲ್​, ನಿಷೇಧಕ್ಕಿಂತ ನಿಯಂತ್ರಿಸಲು ಸೂಚನೆ! 
ದೇಶ

ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಹಿನ್ನಡೆ: ರಾಜ್ಯದಲ್ಲಿ ಬೈಕ್ ಟ್ಯಾಕ್ಸಿಗೆ ಗ್ರೀನ್​ ಸಿಗ್ನಲ್​, ನಿಷೇಧಕ್ಕಿಂತ ನಿಯಂತ್ರಿಸಲು ಸೂಚನೆ! Bike Taxis

ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ಸೇವೆಗಳ ಕಾರ್ಯಾಚರಣೆಗೆ ಹಸಿರು ನಿಶಾನೆ ತೋರಿದ್ದ ಕರ್ನಾಟಕ ಹೈಕೋರ್ಟ್‌ನ ತೀರ್ಪನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ತಿರಸ್ಕರಿಸಿದೆ.

ನವದೆಹಲಿ/ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನ ಟ್ರಾಫಿಕ್ ಕಿರಿಕಿರಿಯ ನಡುವೆ ಕೈಗೆಟಕುವ ದರದಲ್ಲಿ ಪ್ರಯಾಣಿಸಲು ಬೈಕ್ ಟ್ಯಾಕ್ಸಿಗಳನ್ನೇ ( Bike Taxis ) ನಂಬಿದ್ದ ಲಕ್ಷಾಂತರ ಪ್ರಯಾಣಿಕರಿಗೆ ಹಾಗೂ ಓಲಾ, ಉಬರ್, ರ್‍ಯಾಪಿಡೋ ಸಂಸ್ಥೆಗಳಿಗೆ ಸುಪ್ರೀಂ ಕೋರ್ಟ್ ಭರ್ಜರಿ ಸಿಹಿಸುದ್ದಿ ನೀಡಿದೆ. ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ಸೇವೆಗಳ ಮೇಲಿನ ನಿಷೇಧವನ್ನು ಮರುಸ್ಥಾಪಿಸಬೇಕೆಂದು ಕೋರಿ ಕರ್ನಾಟಕ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿಯನ್ನು ಸರ್ವೋಚ್ಚ ನ್ಯಾಯಾಲಯ ವಜಾಗೊಳಿಸಿದ್ದು, ನಿಷೇಧಕ್ಕಿಂತ ನಿಯಂತ್ರಣವೇ ಉತ್ತಮ ಎಂದು ಖಡಕ್ ಸಂದೇಶ ರವಾನಿಸಿದೆ.

ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ಸೇವೆಗಳ ಕಾರ್ಯಾಚರಣೆಗೆ ಹಸಿರು ನಿಶಾನೆ ತೋರಿದ್ದ ಕರ್ನಾಟಕ ಹೈಕೋರ್ಟ್‌ನ ತೀರ್ಪನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ತಿರಸ್ಕರಿಸಿದೆ. ನ್ಯಾಯಮೂರ್ತಿಗಳಾದ ಸತೀಶ್ ಚಂದ್ರ ಶರ್ಮಾ ಮತ್ತು ಎನ್. ಕೋಟೀಶ್ವರ್ ಸಿಂಗ್ ಅವರನ್ನೊಳಗೊಂಡ ಪೀಠವು ಈ ಮಹತ್ವದ ಆದೇಶವನ್ನು ಹೊರಡಿಸಿದ್ದು, ಬೈಕ್ ಟ್ಯಾಕ್ಸಿಗಳ ಮೇಲಿನ ನಿಷೇಧವನ್ನು ತೆರವುಗೊಳಿಸಿ ಸೇವೆ ನಡೆಸಲು ಪರವಾನಗಿ ಕೋರಿ ಅರ್ಜಿ ಸಲ್ಲಿಸಲು ಅವಕಾಶ ನೀಡಿದ್ದ ಹೈಕೋರ್ಟ್‌ನ ಜನವರಿ 23ರ ತೀರ್ಪನ್ನು ಎತ್ತಿಹಿಡಿದಿದೆ. ಬೈಕ್ ಟ್ಯಾಕ್ಸಿಗಳನ್ನು ಸಂಪೂರ್ಣವಾಗಿ ನಿಷೇಧಿಸುವ ಬದಲು ಅವುಗಳಿಗೆ ಸೂಕ್ತ ನಿಯಮಾವಳಿಗಳನ್ನು ರೂಪಿಸಿ ನಿಯಂತ್ರಿಸುವುದೇ ಉತ್ತಮ ಮಾರ್ಗ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ.

ಈ ಹಿಂದೆ ಜನವರಿ 23ರಂದು ತೀರ್ಪು ನೀಡಿದ್ದ ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಮತ್ತು ನ್ಯಾಯಮೂರ್ತಿ ಸಿ.ಎಂ. ಜೋಶಿ ಅವರ ವಿಭಾಗೀಯ ಪೀಠವು, ಮೋಟಾರು ವಾಹನ ಕಾಯ್ದೆ 1988ರ ಅಡಿಯಲ್ಲಿ ದ್ವಿಚಕ್ರ ವಾಹನಗಳನ್ನು ಸಾರಿಗೆ ವಾಹನಗಳಾಗಿ ನೋಂದಾಯಿಸಬಹುದು ಮತ್ತು ಕಾಂಟ್ರಾಕ್ಟ್ ಕ್ಯಾರೇಜ್‌ಗಳಾಗಿ (Contract Carriages) ಕಾರ್ಯನಿರ್ವಹಿಸಬಹುದು ಎಂದು ಮಹತ್ವದ ತೀರ್ಪು ನೀಡಿತ್ತು.

ರಾಜ್ಯ ಸರ್ಕಾರವು ಬೈಕ್ ಟ್ಯಾಕ್ಸಿಗಳ ಕಾರ್ಯಾಚರಣೆಗೆ ಅಗತ್ಯ ನಿಯಂತ್ರಕ ಷರತ್ತುಗಳನ್ನು ವಿಧಿಸಬಹುದೇ ಹೊರತು, ಅವು ದ್ವಿಚಕ್ರ ವಾಹನಗಳು ಎಂಬ ಒಂದೇ ಕಾರಣಕ್ಕೆ ಪರವಾನಗಿ ನಿರಾಕರಿಸುವಂತಿಲ್ಲ ಎಂದು ಹೈಕೋರ್ಟ್ ಸ್ಪಷ್ಟಪಡಿಸಿತ್ತು. ಓಲಾ ಮಾತೃಸಂಸ್ಥೆ ಎಎನ್‌ಐ ಟೆಕ್ನಾಲಜೀಸ್, ಉಬರ್, ರ್‍ಯಾಪಿಡೋ, ಬೈಕ್ ಮಾಲೀಕರು ಹಾಗೂ ಬೈಕ್ ಟ್ಯಾಕ್ಸಿ ಕಲ್ಯಾಣ ಸಂಘ ಸಲ್ಲಿಸಿದ್ದ ಮೇಲ್ಮನವಿಗಳನ್ನು ಪುರಸ್ಕರಿಸಿದ್ದ ಹೈಕೋರ್ಟ್, ಪರವಾನಗಿ ಅರ್ಜಿಗಳನ್ನು ಪರಿಗಣಿಸುವಂತೆ ಸಾರಿಗೆ ಅಧಿಕಾರಿಗಳಿಗೆ ನಿರ್ದೇಶನ ನೀಡಿತ್ತು.

ಪ್ರಯಾಣಿಕರ ಸುರಕ್ಷತೆ, ಚಾಲ್ತಿಯಲ್ಲಿದ್ದ ನೀತಿಯ ದುರುಪಯೋಗದ ಆರೋಪ ಹಾಗೂ ರೈಡ್-ಹೇಲಿಂಗ್ ಪ್ಲಾಟ್‌ಫಾರ್ಮ್‌ಗಳಲ್ಲಿ ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳ ಕೊರತೆಯಂತಹ ಕಾರಣಗಳನ್ನು ಮುಂದಿಟ್ಟು ಕರ್ನಾಟಕ ಸರ್ಕಾರವು 2024ರ ಮಾರ್ಚ್‌ನಲ್ಲಿ ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ಸೇವೆಗಳನ್ನು ನಿಷೇಧಿಸಿತ್ತು. ಬಳಿಕ ಹೈಕೋರ್ಟ್ ಈ ನಿಷೇಧವನ್ನು ತೆರವುಗೊಳಿಸಿದಾಗ, ಪ್ರಯಾಣಿಕರ ಸುರಕ್ಷತೆ ಮತ್ತು ವಿಮಾ ರಕ್ಷಣೆಯ (Insurance Coverage) ಕಳವಳಗಳನ್ನು ವ್ಯಕ್ತಪಡಿಸಿ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು. ಸರ್ಕಾರದ ಜತೆಗೆ ಐದು ಆಟೋ ಮತ್ತು ಟ್ಯಾಕ್ಸಿ ಚಾಲಕರ ಸಂಘಟನೆಗಳೂ ಸಹ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ, ಸೂಕ್ತ ನಿಯಂತ್ರಕ ಹೊಣೆಗಾರಿಕೆಗಳಿಲ್ಲದೆ ಬೈಕ್ ಟ್ಯಾಕ್ಸಿಗಳಿಗೆ ಅವಕಾಶ ನೀಡುವುದರಿಂದ ಸಾಂಪ್ರದಾಯಿಕ ಸಾರಿಗೆ ಚಾಲಕರ ಜೀವನೋಪಾಯಕ್ಕೆ ಭಾರಿ ಹೊಡೆತ ಬೀಳಲಿದೆ ಎಂದು ವಾದಿಸಿದ್ದವು.

ಇದೀಗ ಸುಪ್ರೀಂ ಕೋರ್ಟ್ ರಾಜ್ಯ ಸರ್ಕಾರ ಹಾಗೂ ಆಟೋ-ಟ್ಯಾಕ್ಸಿ ಸಂಘಟನೆಗಳ ಮೇಲ್ಮನವಿಯನ್ನು ವಜಾಗೊಳಿಸಿರುವುದರಿಂದ, ಕರ್ನಾಟಕದಲ್ಲಿ ಬೈಕ್ ಟ್ಯಾಕ್ಸಿ ಸೇವೆಗಳಿಗೆ ಎದುರಾಗಿದ್ದ ಕಾನೂನು ಅಡೆತಡೆಗಳು ಸಂಪೂರ್ಣವಾಗಿ ನಿವಾರಣೆಯಾದಂತಾಗಿದೆ. ನ್ಯಾಯಾಲಯದ ಈ ತೀರ್ಪಿನ ಅನ್ವಯ ಓಲಾ, ಉಬರ್ ಮತ್ತು ರ್‍ಯಾಪಿಡೋ ಸೇರಿದಂತೆ ವಿವಿಧ ಅಗ್ರಿಗೇಟರ್ ಸಂಸ್ಥೆಗಳು ನಡೆಸುತ್ತಿರುವ ಬೈಕ್ ಟ್ಯಾಕ್ಸಿ ಸೇವೆಗಳು ರಾಜ್ಯದಲ್ಲಿ ಎಂದಿನಂತೆ ಮುಂದುವರಿಯಲಿವೆ. ಇನ್ನೊಂದೆಡೆ, ಬೈಕ್ ಟ್ಯಾಕ್ಸಿಗಳನ್ನು ನಿಷೇಧಿಸುವ ಬದಲು ಪ್ರಯಾಣಿಕರ ಸುರಕ್ಷತೆ, ವಿಮೆ ಮತ್ತು ದರ ನಿಗದಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರವು ಸ್ಪಷ್ಟ ಮಾರ್ಗಸೂಚಿಗಳನ್ನು ರೂಪಿಸಿ ಜಾರಿಗೆ ತರುವ ಅನಿವಾರ್ಯತೆ ಎದುರಾಗಿದೆ, (ಏಜೆನ್ಸೀಸ್​).