Taranjit Singh Sandhu | ದೆಹಲಿಯ ನೂತನ ಲೆಫ್ಟಿನೆಂಟ್ ಗವರ್ನರ್ ತರಂಜಿತ್ ಸಿಂಗ್ ಸಂಧು 
ದೇಶ

ದೆಹಲಿ ಲೆಫ್ಟಿನೆಂಟ್ ಗವರ್ನರ್ ಆಗಿ ತರಂಜಿತ್ ಸಿಂಗ್ ಸಂಧು ನೇಮಕ! | Taranjit Singh Sandhu

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯ ಲೆಫ್ಟಿನೆಂಟ್ ಗವರ್ನರ್ ಹುದ್ದೆಗೆ ಬಿಜೆಪಿ ನಾಯಕ ತರಂಜಿತ್ ಸಿಂಗ್ ಸಂಧುರನ್ನು (Taranjit Singh Sandhu) ರಾಷ್ಟ್ರಪತಿ ದ್ರೌಪದಿ ಮುರ್ಮು ಗುರುವಾರ ನೇಮಕ ಮಾಡಿದ್ದಾರೆ ಎಂದು ವರದಿಯಾಗಿದೆ.
ದೆಹಲಿಯ ಹಾಲಿ ಲೆಫ್ಟಿನೆಂಟ್ ಗವರ್ನರ್ ಆಗಿ ಸೇವೆ ಸಲ್ಲಿಸುತ್ತಿದ್ದ ವಿನಯ್ ಕುಮಾರ್ ಸಕ್ಸೇನಾರನ್ನು ಲಡಾಖ್ ಕೇಂದ್ರಾಡಳಿತ ಪ್ರದೇಶದಲ್ಲಿ ಆಡಳಿತಾತ್ಮಕ ಸುಧಾರಣೆಗಳನ್ನು ತರುವ ಉದ್ದೇಶದಿಂದ ವರ್ಗಾವಣೆ ಮಾಡಲಾಗಿದ್ದು, ಲಡಾಖ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದ ಕವಿಂದರ್ ಗುಪ್ತಾರನ್ನು ಹಿಮಾಚಲ ಪ್ರದೇಶದ ರಾಜ್ಯಪಾಲರನ್ನಾಗಿ ನೇಮಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಕೇರಳ ರಾಜ್ಯಪಾಲರಾಗಿರುವ ರಾಜೇಂದ್ರ ವಿಶ್ವನಾಥ್ ಅರ್ಲೇಖಾಗೆ ತಮಿಳುನಾಡಿನ ಹೆಚ್ಚುವರಿ ಹೊಣೆಗಾರಿಕೆ ನೀಡಲಾಗಿದ್ದು, ಪಶ್ಚಿಮ ಬಂಗಾಳದ ರಾಜ್ಯಪಾಲ ಸಿ.ವಿ. ಆನಂದ ಬೋಸ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಹೌದು, ನಾನು ರಾಜೀನಾಮೆ ನೀಡಿದ್ದೇನೆ.
ಮೂರುವರೆ ವರ್ಷಗಳಿಂದ ಬಂಗಾಳದ ರಾಜ್ಯಪಾಲನಾಗಿದ್ದೇನೆ, ಈಗ ನನಗೆ ಸಾಕಾಗಿದೆ ಎಂದು ಬೋಸ್ ಸುದ್ದಿ ಸಂಸ್ಥೆ ಪಿಟಿಐಗೆ ತಿಳಿಸಿದ್ದು, ರಾಜೀನಾಮೆಗೆ ಕಾರಣವೇನು ಎನ್ನುವುದು ಇಲ್ಲಿಯವರೆಗೆ ನೀಡಿದ್ದಾರೆ ಎಂಬುದನ್ನು ಅವರು ಬಹಿರಂಗಪಡಿಸಲಿಲ್ಲ.

ಹೊಸ ಅಧ್ಯಾಯ

ತರಂಜಿತ್ ಸಿಂಗ್ ಸಂಧು ಅಮೆರಿಕದಲ್ಲಿ ಭಾರತದ ರಾಯಭಾರಿಯಾಗಿ ಕೆಲಸ ಮಾಡಿದ ಅನುಭವ ಹೊಂದಿದ್ದು, ಇತ್ತೀಚೆಗಷ್ಟೇ ಸಕ್ರಿಯ ರಾಜಕಾರಣಕ್ಕೆ ಪ್ರವೇಶಿಸಿದ್ದರು. ದೆಹಲಿಯಂತಹ ಮಹತ್ವದ ಕೇಂದ್ರಾಡಳಿತ ಪ್ರದೇಶದ ಆಡಳಿತವನ್ನು ನಿಭಾಯಿಸಲು ಇವರ ಅನುಭವ ಸಹಕಾರಿಯಾಗಲಿದೆ ಎಂದು ವಿಶ್ಲೇಷಿಸಲಾಗುತ್ತಿದೆ. ಈ ಬೆಳವಣಿಗೆಯಿಂದ ದೆಹಲಿ ಮತ್ತು ಕೇಂದ್ರ ಸರ್ಕಾರದ ನಡುವಿನ ಸಂಬಂಧದಲ್ಲಿ ಹೊಸ ಬದಲಾವಣೆಗಳನ್ನು ನಿರೀಕ್ಷಿಸಲಾಗಿದೆ.

ಬೋಸ್ ರಾಜೀನಾಮೆ ಗಲಾಟೆ

ಬೋಸ್​ ರಾಜೀನಾಮೆ, ಈ ವರ್ಷದ ಏಪ್ರಿಲ್ ಅಥವಾ ಮೇ ತಿಂಗಳಲ್ಲಿ ವಿಧಾನಸಭಾ ಚುನಾವಣೆಗಳು ನಡೆಯಲಿರುವ ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ, ಅಸ್ಸಾಂ ಮತ್ತು ಪುದುಚೇರಿಯಲ್ಲಿ ದೊಡ್ಡ ಮಟ್ಟದ ಸದ್ದು ಮಾಡಲಿದೆ ಎಂದು ನಿರೀಕ್ಷಿಸಲಾಗುತ್ತಿದೆ.
ಈ ಬೆಳವಣಿಗೆಯ ಕುರಿತಂತೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಪ್ರತಿಕ್ರಿಯಿಸಿದ್ದು, ಬೋಸ್​ರ ನಿರ್ಧಾರದಿಂದ ಆಘಾತವಾಗಿದೆ, ರಾಜಕೀಯ ಹಿತಾಸಕ್ತಿಗಳನ್ನು ಪೂರೈಸಲು ಕೇಂದ್ರ ಗೃಹ ಸಚಿವ ಅಮಿತ್ ಷಾ ಒತ್ತಡ ಹೇರಿದ್ದು, ಅದರಿಂದಾಗಿಯೇ ಬೋಸ್ ತಮ್ಮ ಹುದ್ದೆಗೆ ರಾಜೀನಾಮೆ ನೀಡಬೇಕಾಯಿತು ಎಂದು ಎಕ್ಸ್ ಪೋಸ್ಟ್​ನಲ್ಲಿ ಬರೆದುಕೊಂಡಿದ್ದಾರೆ.
ತಮಿಳುನಾಡು ರಾಜ್ಯಪಾಲರಾಗಿದ್ದ ಆರ್ ಎನ್ ರವಿ ಅವರನ್ನು ಪಶ್ಚಿಮ ಬಂಗಾಳ ರಾಜ್ಯಪಾಲರನ್ನಾಗಿ ನೇಮಿಸಿದ ಬಗ್ಗೆ ತಮ್ಮೊಂದಿಗೆ ಸಮಾಲೋಚಿಸಲಾಗಿಲ್ಲ ಎಂದು ದೀದಿ ಹೇಳಿಕೊಂಡಿದ್ದಾರೆ. ಈ ರೀತಿಯ ಕ್ರಮಗಳು ಭಾರತದ ಸಂವಿಧಾನದ ಚೈತನ್ಯವನ್ನು ಹಾಳುಮಾಡುತ್ತವೆ ಮತ್ತು ನಮ್ಮ ಒಕ್ಕೂಟ ರಚನೆಯ ಅಡಿಪಾಯವನ್ನೇ ಹೊಡೆದು ಹಾಕುತ್ತವೆ. ಕೇಂದ್ರ ಸರ್ಕಾರ ಸಹಕಾರಿ ಒಕ್ಕೂಟದ ತತ್ವಗಳನ್ನು ಗೌರವಿಸಬೇಕು ಮತ್ತು ಪ್ರಜಾಪ್ರಭುತ್ವ ಸಂಪ್ರದಾಯಗಳು ಮತ್ತು ರಾಜ್ಯಗಳ ಘನತೆಯನ್ನು ಕುಗ್ಗಿಸುವ ಏಕಪಕ್ಷೀಯ ನಿರ್ಧಾರಗಳನ್ನು ತೆಗೆದುಕೊಳ್ಳುವುದನ್ನು ನಿಲ್ಲಿಸಬೇಕು ಎಂದು ಬ್ಯಾನರ್ಜಿ ಅಭಿಪ್ರಾಯಪಟ್ಟಿದ್ದಾರೆ(ಏಜೆನ್ಸೀಸ್​).